ಮಂಗಳವಾರ, ಅಕ್ಟೋಬರ್ 26, 2021
20 °C
ಕಂದಾಯ ಮತ್ತು ಅರಣ್ಯ ಇಲಾಖೆಗಳ ನಡುವೆ ಸಮನ್ವಯದ ಕೊರತೆ

ಜಗಳೂರು: ತಪ್ಪದ ಬಗರ್‌ಹುಕುಂ ಸಾಗುವಳಿದಾರ ಪರದಾಟ

ಡಿ. ಶ್ರೀನಿವಾಸ್ Updated:

ಅಕ್ಷರ ಗಾತ್ರ : | |

Prajavani

ಜಗಳೂರು: ದಶಕಗಳಿಂದ ಬಗರ್‌ಹುಕುಂ ಜಮೀನುಗಳನ್ನು ಸಾಗುವಳಿ ಮಾಡುತ್ತಾ ಬಂದಿರುವ ರೈತರಿಗೆ ಸಾಗುವಳಿ ಪತ್ರ ನೀಡುವಲ್ಲಿ ವಿಳಂಬವಾಗಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ 3 ತಿಂಗಳ ಒಳಗಾಗಿ ಎಲ್ಲಾ ಅರ್ಜಿಗಳನ್ನು ವಿಲೇವಾರಿ ಮಾಡಲು ತಾಲ್ಲೂಕು ಆಡಳಿತ ನಿರ್ಧರಿಸಿದೆ.

ತಾಲ್ಲೂಕಿನ ವಿವಿಧ ಹಳ್ಳಿಗಳಲ್ಲಿ ಗೋಮಾಳ, ಕಂದಾಯ ಹಾಗು ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ರೈತರು ಹಲವು ವರ್ಷಗಳಿಂದ ಭೂಮಿಯನ್ನು ಉಳುಮೆ ಮಾಡುತ್ತಾ ಬಂದಿದ್ದು, ಸಾಗುವಳಿ ಪತ್ರ ಕೋರಿ 4 ಸಾವಿರಕ್ಕೂ ಹೆಚ್ಚು ರೈತರು ಅರ್ಜಿ ಸಲ್ಲಿಸಿದ್ದಾರೆ.

ತಾಲ್ಲೂಕಿನ ಚಿಕ್ಕಉಜ್ಜಿನಿ, ಗೌಡ ಗೊಂಡನಹಳ್ಳಿ, ಅಸಗೋಡು, ಮಾಗಡಿ, ಮಡ್ರಳ್ಳಿ ಹಾಗೂ ಬಿಳಿಚೋಡು ಹೋಬಳಿ ಮತ್ತು ಕಸಬಾ ಹೋಬಳಿ ವ್ಯಾಪ್ತಿಯಲ್ಲಿ ಸಾವಿರಾರು ಎಕರೆ ಪ್ರದೇಶದಲ್ಲಿ ಉಳುಮೆ ಮಾಡುತ್ತಿರುವ ರೈತರು ಭೂಮಿಯ ಒಡೆತನಕ್ಕಾಗಿ ಹಲವು ವರ್ಷಗಳಿಂದ ವಿವಿಧ ಇಲಾಖೆಗಳ ಕಚೆರಿಗಳಿಗೆ ನಿತ್ಯ ಎಡ ತಾಕುತ್ತಿದ್ದಾರೆ.

ಇಲಾಖೆಗಳ ನಡುವೆ ಸಮನ್ವಯ ಕೊರತೆ: ಕಂದಾಯ ಹಾಗೂ ಅರಣ್ಯ ಇಲಾಖೆಗಳ ನಡುವಿನ ಸಮನ್ವಯ ಕೊರತೆಯಿಂದ ದೊಡ್ಡ ಪ್ರಮಾಣದಲ್ಲಿರುವ ಬಗರ್‌ಹುಕುಂ ಅರ್ಜಿಗಳನ್ನು ಸಕಾಲದಲ್ಲಿ ವಿಲೇಪಡಿಸಲು ಸಾಧ್ಯವಾಗಿಲ್ಲ. ಸಾಗುವಳಿ ಮಾಡುತ್ತಿರುವ ಜಮೀನು ಕಂದಾಯ ಇಲಾಖೆಗೆ ಸೇರಿದೆಯೋ ಅಥವಾ ಅರಣ್ಯ ಇಲಾಖೆ ವ್ಯಾಪ್ತಿಗೆ ಬರುತ್ತದೆಯೋ ಎನ್ನುವ ಬಗ್ಗೆ ಅಧಿಕಾರಿಗಳಲ್ಲೇ ಸ್ಪಷ್ಟತೆ ಇಲ್ಲ. ಭೂ ಮಾಪನ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ನಿಖರವಾಗಿ ಅಳತೆ ಮಾಡದ ಕಾರಣ ಗೊಂದಲ ಮುಂದುವರಿದಿದ್ದು, ಹಕ್ಕುಪತ್ರ ವಿಳಂಬಕ್ಕೆ ಪ್ರಮುಖ ಕಾರಣವಾಗಿದೆ ಎಂದು ಸಾಗುವಳಿದಾರರು ಆರೋಪಿಸಿದ್ದಾರೆ.

‘ಸಾಗುವಳಿದಾರರಿಗೆ ಹಕ್ಕುಪತ್ರ ನೀಡಲು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಲ್ಲಿ ಇಚ್ಛಾಶಕ್ತಿಯ ಕೊರತೆ ಇದೆ. ಭೂ ಮಾಪನ ಇಲಾಖೆಯಲ್ಲಿ ರೈತರು ಹಾಗೂ ಜನಸಾಮಾನ್ಯರ ಅಹವಾಲುಗಳಿಗೆ ಕವಡೆಕಾಸಿನ ಕಿಮ್ಮತ್ತು ಇಲ್ಲ. ಬಡ ಸಾಗುವಳಿದಾರರು ಕಚೇರಿಗಳಿಗೆ ಅಲೆಯುವುವುದ ತಪ್ಪಿಲ್ಲ’ ಎಂದು ರಾಜ್ಯ ರೈತ ಸಂಘದ ಮುಖಂಡ ಚಿರಂಜೀವಿ ದೂರಿದ್ದಾರೆ.

‘15 ವರ್ಷಗಳಿಂದ 2 ಎಕರೆ ಭೂಮಿಯಲ್ಲಿ ಸಾಗುವಳಿ ಮಾಡುತ್ತಿದ್ದೇನೆ. ಅರ್ಜಿ ನಮೂನೆ 57ರ ಅಡಿ ಹಕ್ಕುಪತ್ರಕ್ಕಾಗಿ ತಹಶೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಿ 2 ವರ್ಷ ಕಳೆದಿದೆ. ಇನ್ನೂ ಹಕ್ಕುಪತ್ರ ಸಿಕ್ಕಿಲ್ಲ. ಇಲಾಖೆಗಳ ಅಧಿಕಾರಿಗಳು ಪರಸ್ಪರರ ಮೇಲೆ ಬೊಟ್ಟು ತೋರಿಸುತ್ತಾ ರೈತರನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ಹಕ್ಕುಪತ್ರ ಮರೀಚಿಕೆಯಾಗಿದೆ’ ಎಂದು ತಾಲ್ಲೂಕಿನ ಚಿಕ್ಕ ಉಜ್ಜಿನಿ ಗ್ರಾಮದ ಸುಪುತ್ರಪ್ಪ ನೊಂದು ನುಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.