ಸೋಮವಾರ, ನವೆಂಬರ್ 30, 2020
24 °C
ನವೆಂಬರ್ 16ರ ವರೆಗೆ ಮಾರಾಟಕ್ಕೆ ಅವಕಾಶ* ಕೋವಿಡ್ ಸುರಕ್ಷತಾ ಕ್ರಮ ಪಾಲಿಸಲು ಸೂಚನೆ

ದಾವಣಗೆರೆ: ಹಸಿರು ಪಟಾಕಿಗೆ ಮಾತ್ರ ಅವಕಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ‘ಕೋವಿಡ್ ಕಾರಣದಿಂದ ಈ ಬಾರಿ ದೀಪಾವಳಿ ಹಬ್ಬದಲ್ಲಿ ಹಸಿರು ಪಟಾಕಿ ಬಳಕೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ಸಾರ್ವಜನಿಕರು ಕೋವಿಡ್ ಸುರಕ್ಷತಾ ಕ್ರಮಗಳನ್ನು ಪಾಲಿಸುವುದರ ಜೊತೆಗೆ ಮಾಲಿನ್ಯ ರಹಿತವಾಗಿ ಆಚರಿಸಬೇಕು’ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮನವಿ ಮಾಡಿದ್ದಾರೆ.

‘ಪ್ರತಿವರ್ಷ ಪಟಾಕಿಗಳನ್ನು ಸಿಡಿಸಿ ವಿಜೃಂಭಣೆಯಿಂದ ಹಬ್ಬ ಆಚರಿಸಲಾಗುತ್ತಿತ್ತು. ಆದರೆ ಜನರ ಆರೋಗ್ಯದ ದೃಷ್ಟಿಯಿಂದ ಕೋವಿಡ್ ಸೋಂಕಿನ ಸರಪಳಿಯನ್ನು ಕತ್ತರಿಸಲು ಇನ್ನೂ ಹೆಚ್ಚಿನ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾದ ಅನಿವಾರ್ಯ ಇದೆ. ಆದ್ದರಿಂದ ಹಸಿರು ಹೊರತುಪಡಿಸಿ ಉಳಿದ ಯಾವುದೇ ಪಟಾಕಿಗಳನ್ನು ಮಾರಾಟ ಅಥವಾ ಬಳಕೆ ಮಾಡುವಂತಿಲ್ಲ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ನವೆಂಬರ್ 16ರ ವರೆಗೆ ಮಾತ್ರ ಮಳಿಗೆಗಳನ್ನು ತೆರೆದಿರಬೇಕು. ಮಳಿಗೆಗಳಲ್ಲಿ ಎರಡೂ ಕಡೆಯಿಂದ ಸರಾಗವಾಗಿ ಗಾಳಿಯಾಡುವಂತೆ ಇರಬೇಕು. ಒಂದರಿಂದ ಮತ್ತೊಂದು ಮಾರಾಟ ಮಳಿಗೆಗೆ ಕನಿಷ್ಠ 6 ಮೀಟರ್ ಅಂತರವಿರಬೇಕು. ಪ್ರತಿಯೊಂದು ಮಳಿಗೆಯಲ್ಲೂ ಪರವಾನಗಿ ಪತ್ರದ ಪ್ರತಿಯನ್ನು ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶಿಸಬೇಕು. ಅಲ್ಲದೇ ಪರವಾನಗಿ ಪಡೆದವರು ಕಡ್ಡಾಯವಾಗಿ ಮಳಿಗೆಯಲ್ಲಿ ಹಾಜರಿರಬೇಕು’ ಎಂದು ಅವರು ತಿಳಿಸಿದ್ದಾರೆ.

‘ಹಸಿರು ಪಟಾಕಿಗಳನ್ನು ಮಾರಾಟ ಮಾಡುವ ಮಳಿಗೆಗಳ ಸುತ್ತಮುತ್ತ ದಿನನಿತ್ಯ ಸ್ಯಾನಿಟೈಸ್‌ ಮಾಡಬೇಕು. ಪಟಾಕಿ ಖರೀದಿಗೆ ಬರುವ ಸಾರ್ವಜನಿಕರಿಗೆ ಸ್ಯಾನಿಟೈಸರ್, ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಕಲ್ಪಿಸುವುದರ ಜೊತೆಗೆ ಕನಿಷ್ಠ 6 ಅಡಿ ಅಂತರ ಕಾಯ್ದುಕೊಳ್ಳುವಂತೆ ಕಟ್ಟುನಿಟ್ಟಾಗಿ ಪಾಲಿಸಬೇಕು. ಎಲ್ಲರೂ ತಪ್ಪದೆ ಮಾಸ್ಕ್ ಧರಿಸಿರಬೇಕು. ಹಸಿರು ಪಟಾಕಿ ಖರೀದಿ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಜನದಟ್ಟಣೆಯಾಗದಂತೆ ನೋಡಿಕೊಳ್ಳಬೇಕು’ ಎಂದು ಸೂಚಿಸಿದ್ದಾರೆ.

‘ಈ ಮಾರ್ಗಸೂಚಿಗಳನ್ನು ಪೊಲೀಸ್ ಇಲಾಖೆ, ಮಹಾನಗರಪಾಲಿಕೆ, ಆರೋಗ್ಯ ಇಲಾಖೆ, ಅಗ್ನಿಶಾಮಕ ಇಲಾಖೆ, ಮಾಲಿನ್ಯ ನಿಯಂತ್ರಣ ಮಂಡಳಿ, ಆಯಾ ಸ್ಥಳೀಯ ಸಂಸ್ಥೆಗಳು ಕಟ್ಟುನಿಟ್ಟಾಗಿ ಪಾಲಿಸಬೇಕು’ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧ್ಯಕ್ಷರೂ ಆಗಿರುವ ಮಹಾಂತೇಶ ಬೀಳಗಿ ಆದೇಶಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.