ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ: ದೇಶ ಕಟ್ಟುವ ಹೊಣೆಗಾರಿಕೆ ಶಿಕ್ಷಕರದ್ದು

ಶಿಕ್ಷಕರ ದಿನಾಚರಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ
Last Updated 6 ಸೆಪ್ಟೆಂಬರ್ 2021, 9:01 IST
ಅಕ್ಷರ ಗಾತ್ರ

ದಾವಣಗೆರೆ: ‘ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ, ದೇಶ ಕಟ್ಟುವ ಗುರುತರ ಹೊಣೆಗಾರಿಕೆ ಶಿಕ್ಷಕರ ಮೇಲೆ ಇದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಹೇಳಿದರು.

ನಗರದ ಕುವೆಂಪು ಕನ್ನಡ ಭವನದಲ್ಲಿ ಭಾನುವಾರ ನಡೆದ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕಾರ ಕಲಿಸಿ, ಅವರನ್ನು ಸುಶಿಕ್ಷಿತರನ್ನಾಗಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ಅಂತಹ ಕಾರ್ಯದಲ್ಲಿ ನಿರತರಾಗಿರುವ ಶಿಕ್ಷಕರಿಗೆ ಅಭಿನಂದನೆ. ಗ್ರಾಮೀಣ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವಲ್ಲೂ ಶಿಕ್ಷಕರ ಪಾತ್ರ ಮಹತ್ವದ್ದು. ಈ ನಿಟ್ಟಿನಲ್ಲಿ ಹಲವರು ಶ್ರಮಿಸುತ್ತಿರುವುದು ಶ್ಲಾಘನೀಯ ಎಂದರು.

‘ಅಂಧಕಾರದಿಂದ ಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರು ಶಿಕ್ಷಕರು. ವೇದಗಳ ಕಾಲದಿಂದಲೂ ಗುರುಗಳಿಗೆ ಮಹತ್ವದ ಸ್ಥಾನ ಇದೆ. ಸತ್ಪ್ರಜೆಗಳಿಂದ ಕೂಡಿದ ದೇಶ ಸಂಪತ್ಭರಿತವಾಗುತ್ತದೆ. ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಉನ್ನತ ಹುದ್ದೆ ಅಲಂಕರಿಸಿದರೂ ಅವರ ಆಸಕ್ತಿ ಇದ್ದುದು ಶಿಕ್ಷಣ ಕ್ಷೇತ್ರದಲ್ಲಿ ಎಂಬುದು ಗಮನಿಸಬೇಕಾದ ಅಂಶ’ ಎಂದರು.

ದಾವಣಗೆರೆ ಉತ್ತರ ಕ್ಷೇತ್ರದ ಶಾಸಕ ಎಸ್‌.ಎ. ರವೀಂದ್ರನಾಥ್‌, ‘ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರನ್ನು ನೋಡಿದರೆ ಪೂಜ್ಯ ಭಾವನೆ ಬರುತ್ತದೆ. ಅಂತಹ ವ್ಯಕ್ತಿತ್ವ ಅವರದು. ಶಿಕ್ಷಕರಾಗಿ ಉನ್ನತ ಸ್ಥಾನಕ್ಕೆ ಏರಿದರು. ಎಲ್ಲ ಶಿಕ್ಷಕರೂ ಅವರಂತೆ ಸಾಧನೆ ಮಾಡಬೇಕು. ನಿಮ್ಮಿಂದ ಬೇರೆಯವರಿಗೂ ಸಾಧನೆ ಮಾಡುವ ಪ್ರೇರಣೆ ಸಿಗಬೇಕು. ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಿದರೆ ಅವರು ಮುಂದೆ ನಿಮ್ಮನ್ನು ನೆನೆಯುತ್ತಾರೆ’ ಎಂದು ಸಲಹೆ ನೀಡಿದರು.

‘ಗ್ರಾಮೀಣ ಪ್ರದೇಶದ ಶಾಲೆಗಳಲ್ಲಿ ಮೂಲಸೌಕರ್ಯ ಇಲ್ಲ. ಈ ನಿಟ್ಟಿನಲ್ಲಿ ಅಧಿಕಾರಿಗಳು ಗಮನಹರಿಸಬೇಕು. ಇಲ್ಲಿರುವ ಹಲವು ಉನ್ನತ ಅಧಿಕಾರಿಗಳು ಮೊದಲು ಶಿಕ್ಷಕರಾಗಿದ್ದವರು. ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳತ್ತ ಗಮನಹರಿಸಬೇಕು’ ಎಂದು ಕಿವಿಮಾತು ಹೇಳಿದರು.

ಪಾಲಿಕೆ ಮೇಯರ್‌ ಎಸ್‌.ಟಿ. ವೀರೇಶ್‌ ಮಾತನಾಡಿ, ‘ಭಾರತ ತನ್ನ ಸಂಸ್ಕೃತಿಯಿಂದ ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿರುವುದರ ಹಿಂದೆ ಶಿಕ್ಷಕರ ಪಾತ್ರ ಬಹಳಷ್ಟಿದೆ. ಸ್ವಾತಂತ್ರ್ಯ ಹೋರಾಟದಲ್ಲೂ ಶಿಕ್ಷಕರ ಪಾತ್ರ ಪ್ರಮುಖವಾಗಿತ್ತು’ ಎಂದರು.

ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ 21 ಜನ ಶಿಕ್ಷಕರಿಗೆ ಪ್ರಶಸ್ತಿ ಮಾಡಿ ಗೌರವಿಸಲಾಯಿತು. ಡಿಡಿಪಿಐ ಸಿ.ಆರ್‌. ಪರಮೇಶ್ವರಪ್ಪ ಸ್ವಾಗತಿಸಿದರು.

ಉಪಮೇಯರ್‌ ಎಚ್‌.ಆರ್‌. ಶಿಲ್ಪ, ಪಾಲಿಕೆ ಸದಸ್ಯೆ ಗೀತಾ ದಿಳ್ಯಪ್ಪ, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪಂಚಾಯಿತಿ ಸಿಇಒ ಡಾ. ವಿಜಯ ಮಹಾಂತೇಶ ಬಿ. ದಾನಮ್ಮನವರ್‌, ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ಎಎಸ್‌ಪಿ ರಾಜೀವ್‌ ಎಂ., ತಾಲ್ಲೂಕು ಪಂಚಾಯಿತಿ ಇಒ ಆನಂದ್‌ ಎನ್‌.ಜೆ., ತಹಶೀಲ್ದಾರ್‌ ಗಿರೀಶ್, ಉಪ ವಿಭಾಗಾಧಿಕಾರಿ ಮಮತಾ ಹೊಸಗೌಡರ್‌,ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಫಾಲಾಕ್ಷಿ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಇದ್ದರು.

‘ಮೇಕೆದಾಟು ಯೋಜನೆ: ರಾಜಿ ಇಲ್ಲ’:‘ಮೇಕೆದಾಟು ಯೋಜನೆ ವಿಚಾರದಲ್ಲಿ ಸರ್ಕಾರದ ನಿಲುವಿನಲ್ಲಿ ರಾಜಿ ಪ್ರಶ್ನೆಯೇ ಇಲ್ಲ. ರಾಜ್ಯದ ಜನರ ಹಿತದೃಷ್ಟಿಯಿಂದ ದಿಟ್ಟ ನಿರ್ಧಾರ ಕೈಗೊಳ್ಳುತ್ತೇವೆ. ಮುಖ್ಯಮಂತ್ರಿ ಈ ಕುರಿತು ಕಾನೂನಾತ್ಮಕ ಪರಿಹಾರ ಕಂಡುಕೊಳ್ಳಲಿದ್ದಾರೆ’ ಎಂದು ಸಚಿವ ಬೈರತಿ ಬಸವರಾಜ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜಿಲ್ಲಾ ಪಂಚಾಯಿತಿ ಚುನಾವಣೆ ಸಂಬಂಧ ಕ್ಷೇತ್ರ ವಿಂಗಡಣೆ ತರಾತುರಿಯಲ್ಲಿ ಆಗಿತ್ತು. ಮತ್ತೊಮ್ಮೆ ಅದನ್ನುಅಧಿಕಾರಿಗಳ ಸಮ್ಮುಖದಲ್ಲಿ ಮರುಪರಿಶೀಲನೆ ನಡೆಸಲಾಗುವುದು’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ಉತ್ತಮ ಶಿಕ್ಷಕರಿಗೆ ₹ 10 ಸಾವಿರ ಪ್ರೋತ್ಸಾಹ ಧನ’:‘ಉತ್ತಮವಾಗಿ ಕಾರ್ಯನಿರ್ವಹಿಸಿದ ದಾವಣಗೆರೆ ಜಿಲ್ಲೆಯ ಪ್ರತಿ ತಾಲ್ಲೂಕಿನ ಒಬ್ಬ ಶಿಕ್ಷಕ ಹಾಗೂ ಶಿಕ್ಷಕಿಗೆ ತಲಾ ₹ 10 ಸಾವಿರಪ್ರೋತ್ಸಾಹ ಧನ ನೀಡಿ ಸನ್ಮಾನಿಸಲಾಗುವುದು. ನವೆಂಬರ್ 1ರಂದು ಇಂತಹ ಶಿಕ್ಷಕರನ್ನು ಗುರುತಿಸಿ ಸನ್ಮಾನಿಸಲಾಗುವುದು. ನಾನು ಜಿಲ್ಲಾ ಉಸ್ತುವಾರಿ ಸಚಿವನಾಗಿರುವವರೆಗೆ ಇದನ್ನು ಮುಂದುವರಿಸುಕೊಂಡು ಹೋಗುತ್ತೇನೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT