ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ: 'ಮುಷ್ಕರ ವಾಪಸ್‌ ಪಡೆಯುವ ಪ್ರಶ್ನೆಯೇ ಇಲ್ಲ'

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ
Last Updated 27 ಫೆಬ್ರುವರಿ 2023, 4:24 IST
ಅಕ್ಷರ ಗಾತ್ರ

ದಾವಣಗೆರೆ: ‘ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ವರದಿ ಜಾರಿ ಹಾಗೂ ಎನ್‌ಪಿಎಸ್ ರದ್ದು ಮಾಡಿ, ಹಳೆಯ ಪಿಂಚಣಿ ವ್ಯವಸ್ಥೆ ಜಾರಿಗೆ ತರಬೇಕು ಎಂಬ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮಾರ್ಚ್‌ 1ರಂದು ನಡೆಸುತ್ತಿರುವ ಮುಷ್ಕರವನ್ನು ಲಿಖಿತ ಭರವಸೆ ನೀಡುವವರೆಗೂ ವಾಪಸ್‌ ಪಡೆಯುವ ಪ್ರಶ್ನೆಯೇ ಇಲ್ಲ’ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದರು.

ಇಲ್ಲಿನ ಪಿ.ಬಿ. ರಸ್ತೆಯ ಕಮ್ಮವಾರಿ ಸಮುದಾಯ ಭವನದಲ್ಲಿ ಭಾನುವಾರ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘ ಆಯೋಜಿಸಿದ್ದ ಶೈಕ್ಷಣಿಕ ಕಾರ್ಯಾಗಾರ, ರಾಜ್ಯ ಮಟ್ಟದ ಪದಾಧಿಕಾರಿಗಳ ಶೈಕ್ಷಣಿಕ ಸಮಾವೇಶ ಹಾಗೂ ಸರ್ವ ಸದಸ್ಯರ ಮಹಾಸಭೆಯಲ್ಲಿ ಮಾತನಾಡಿದರು.

‘7ನೇ ವೇತನ ಆಯೋಗದಿಂದ ಶೀಘ್ರ ಮಧ್ಯಂತರ ವರದಿ ಪಡೆದು ಜಾರಿ ಮಾಡುವಂತೆ ಈ ಹಿಂದಿನಿಂದಲೂ ಒತ್ತಾಯಿಸುತ್ತಿದ್ದು, ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ಬಜೆಟ್‌ನಲ್ಲಿ ಘೋಷಣೆ ಮಾಡುವ ನಿರೀಕ್ಷೆ ಇತ್ತು. ಆದೂ ಹುಸಿಯಾಗಿದೆ. ಹೀಗಾಗಿ ಮಾರ್ಚ್ 1ರಿಂದ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಸರ್ಕಾರಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದು, ಎಲ್ಲರೂ ಸಹಕಾರ ನೀಡಬೇಕು’ ಎಂದು ಮನವಿ ಮಾಡಿದರು.

‘ಸರ್ಕಾರಿ ನೌಕರರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರು ಇದ್ದೀರಿ. ನೀವು ಮುಷ್ಕರಕ್ಕೆ ಸಂಪೂರ್ಣ ಸಹಕಾರ ನೀಡಬೇಕು. ವೇತನ ಆಯೋಗದ ಸಮಿತಿ ನೌಕರರೊಂದಿಗೆ ಫೆ. 27ರಂದು ಸಭೆ ಕರೆದಿದ್ದು, ಅಲ್ಲಿ ಯಾವ ನಿರ್ಧಾರ ಆಗುತ್ತದೆ. ನೋಡೋಣ’ ಎಂದು ಹೇಳಿದರು.

‘ಶಿಕ್ಷಕರು ಶಿಕ್ಷಣ ಕಾಯ್ದೆಯನ್ನು ಓದಿಕೊಳ್ಳಬೇಕು. ನಿಮ್ಮ ಹಕ್ಕುಗಳ ಬಗ್ಗೆ ತಿಳಿಯಬೇಕು.ಶಿಕ್ಷಕರು ಉತ್ತಮವಾಗಿ ಕೆಲಸ ನಿರ್ವಹಿಸಬೇಕು. ಶಿಕ್ಷಕರ ಕೆಲಸಗಳನ್ನು ಸಂಘದ ನಿರ್ದೇಶಕರು ನಿರ್ವಹಿಸಬೇಕು. ಶಿಕ್ಷಕರಿಗೆ ಆಗುತ್ತಿರುವ ಅನ್ಯಾಯಗಳನ್ನು ಸರಿಪಡಿಸಲು ಪ್ರಯತ್ನಿಸಬೇಕು’ ಎಂದು ರಾಜ್ಯ ಸರ್ಕಾರದ ಮುಖ್ಯ ಸಚೇತಕ ಡಾ.ವೈ.ಎ. ನಾರಾಯಣಸ್ವಾಮಿ ಸಲಹೆ ನೀಡಿದರು.

ಶಿಕ್ಷಕರಿಗೆ ಇರುವ ಸೌಲಭ್ಯಗಳು, ಅವರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಸಂಘದ ಪ್ರಧಾನ ಕಾರ್ಯದರ್ಶಿ ರಾಮು ಗುಗವಾಡ ಸವಿಸ್ತಾರವಾಗಿ ತಿಳಿಸಿದರು.

ದಾವಣಗೆರೆಯಲ್ಲಿ ಸಮಾವೇಶ ಆಯೋಜಿಸಲು ಹಲವರು ಸಹಕಾರ ನೀಡಿದ್ದಾರೆ. ಎಲ್ಲರಿಗೂ ಅಭಿನಂದನೆ ಸಲ್ಲಿಸುವುದಾಗಿ ಜಿಲ್ಲಾಧ್ಯಕ್ಷ ಮುಬಾರಕ್‌ ಅಲಿ ಬಿ. ಹೇಳಿದರು.

ಸಂಘದ ರಾಜ್ಯಾಧ್ಯಕ್ಷ ಸಿದ್ದಬಸಪ್ಪ ಬಿ., ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಿ. ಫಾಲಾಕ್ಷಿ ಮಾತನಾಡಿದರು.

ಸಂಘದ ದ್ವಾರಕೀಶ ನಾಯ್ಕ್, ಬಿ.ಆರ್‌. ಚಂದ್ರಪ್ಪ, ಡಿ.ಡಿ. ಹಾಲಪ್ಪ, ಡಿ.ಎಂ. ಮಂಜುನಾಥಯ್ಯ, ಸಿದ್ದೇಶ್ ಸಿ., ಸಿದ್ದೇಶಪ್ಪ, ಅನಿತಾ ಡಿ., ಪ್ರೇಮಾ ಎನ್‌., ಸವಿತಾ ಎಸ್. ಮಮತಾ ಎಚ್‌. ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT