ಬುಧವಾರ, ಫೆಬ್ರವರಿ 1, 2023
18 °C
ಜಿಲ್ಲಾ ಲಸಿಕಾ ಕಾರ್ಯಪಡೆ ಸಭೆಯಲ್ಲಿ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ

ದಡಾರದಿಂದ ರಕ್ಷಿಸಿಕೊಳ್ಳಲು ಮಕ್ಕಳಿಗೆ ಲಸಿಕೆ ಹಾಕಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಹಲವು ರಾಜ್ಯಗಳಲ್ಲಿ ದಡಾರ ಪ್ರಕರಣಗಳು ಹೆಚ್ಚುತ್ತಿವೆ. ಅದರಿಂದ ಮಕ್ಕಳ ಸಾವೂ ಉಂಟಾಗುತ್ತಿದೆ. ಸಾವಿನ ಪ್ರಮಾಣವನ್ನು ತಡೆಗಟ್ಟಲು ದಡಾರ ಹಾಗೂ ರುಬೆಲ್ಲ ಲಸಿಕೆಗಳನ್ನು ಮಕ್ಕಳಿಗೆ ಕಡ್ಡಾಯವಾಗಿ ಹಾಕಿಸಬೇಕು ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಲಸಿಕಾ ಕಾರ್ಯಪಡೆ ಸಭೆಯಲ್ಲಿ ಅವರು ಮಾತನಾಡಿದರು.

ಬಿಹಾರ, ಗುಜರಾತ್, ಹರಿಯಾಣ, ಜಾರ್ಖಂಡ್, ಕೇರಳ ಹಾಗೂ ಮಹಾರಾಷ್ಟ್ರಗಳಲ್ಲಿ ದಡಾರ ಹೆಚ್ಚುತ್ತಿದೆ. ಹಾಗಾಗಿ ರಾಜ್ಯದಲ್ಲಿಯೂ ಹೆಚ್ಚಾಗುವ ಸಾಧ್ಯತೆಗಳಿರುತ್ತವೆ ಎಂದು ಅವರು ಎಚ್ಚರಿಸಿದರು.

ಜಿಲ್ಲೆಯಲ್ಲಿ ದಡಾರ ಹಾಗೂ ರುಬೆಲ್ಲ ಲಸಿಕೆಯ ಎರಡನೇ ಡೋಸ್ ಪಡೆದ ಮಕ್ಕಳ ಪ್ರಮಾಣ ಶೇ 50 ಕೂಡ ದಾಟಿಲ್ಲ. ಜನರಲ್ಲಿ ಜಾಗೃತಿ ಮೂಡಿಸಿ ಲಸಿಕೆ ಅಭಿಯಾನ ನಡೆಸಬೇಕು ಎಂದು ಸಲಹೆ ನೀಡಿದರು.

ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಖಾಸಗಿ ಬಾಲವಾಡಿಯವರು ಈ ಅಭಿಯಾನದಲ್ಲಿ ಕೈಜೋಡಿಸಬೇಕು. ಲಸಿಕೆ ಪಡೆಯದ ಮಕ್ಕಳನ್ನು ಗುರುತಿಸಬೇಕು. ಲಸಿಕೆ ಕುರಿತು ನಗರ ಪಾಲಿಕೆ ವಾಹನಗಳ ಮೂಲಕ ಘೋಷಣೆಗಳನ್ನು ಕೂಗಿಸಬೇಕು ಎಂದರು.

ದಡಾರ ರೋಗಕ್ಕೆ ಎರಡು ವರ್ಷಗಳಲ್ಲಿ ಎರಡು ಲಸಿಕೆ ನೀಡಬೇಕು. ಎರಡನೇ ಲಸಿಕೆ ಪಡೆಯದ ಮಕ್ಕಳಿಗೆ ಐದು ವರ್ಷದವರೆಗೂ ಅವಕಾಶ ಇರುತ್ತದೆ ಎಂದು ವಿಶ್ವ ಆರೋಗ್ಯ ಸಂಘಟನೆಯ ಸಲಹಾ ವೈದ್ಯ ಡಾ. ಶ್ರೀಧರ್ ತಿಳಿಸಿದರು.

ನಗರದ ಹಳೆಯ ಭಾಗದಲ್ಲಿ ಲಸಿಕೆ ಪಡೆಯಲು ನಿರಾಸಕ್ತಿ ತೋರುತ್ತಿದ್ದಾರೆ. ಹಾಗಾಗಿ ಅಲ್ಲಿ ಲಸಿಕೆ ಹಾಕಿಸಿಕೊಳ್ಳದ ಮಕ್ಕಳ ಸಂಖ್ಯೆ ಹೆಚ್ಚಿದೆ. ಈ ಭಾಗದಲ್ಲಿ ಲಸಿಕೆ ಪ್ರಮಾಣ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಅಧಿಕಾರಿ ಡಾ. ಕೆ.ಎಸ್‌. ಮೀನಾಕ್ಷಿ  ಮಾಹಿತಿ ನೀಡಿದರು.

ಜಗಳೂರಿನಲ್ಲಿ ದಡಾರ ಹಾಗೂ ರುಬೆಲ್ಲ ಹೆಚ್ಚು ಪ್ರಕರಣಗಳ ಪರೀಕ್ಷೆ ನಡೆಸಿದ ಜಗಳೂರು ತಾಲ್ಲೂಕು ಆಸ್ಪತ್ರೆಯ ಮಕ್ಕಳ ತಜ್ಞ ಡಾ. ಜಯಕುಮಾರ್ ಅವರನ್ನು ಸನ್ಮಾನಿಸಲಾಯಿತು. ಡಿಡಿಪಿಐ ತಿಪ್ಪೇಶಪ್ಪ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.