ಬುಧವಾರ, ಮೇ 25, 2022
27 °C

ಕಾಂಗ್ರೆಸ್‌ಗೆ ಮರಳುವ ಪ್ರಸ್ತಾವ ನಮ್ಮೆದುರಿಗಿಲ್ಲ: ಸಚಿವ ಬೈರತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ದಾವಣಗೆರೆ: ಬಿಜೆಪಿಗೆ ಬಂದು ಸಚಿವರಾಗಿದ್ದವರು ಮತ್ತೆ ಕಾಂಗ್ರೆಸ್‌ಗೆ ಮರಳಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆಧಾರರಹಿತವಾಗಿ ಹೇಳಿಕೆ ನೀಡಿದ್ದಾರೆ. ಖಂಡಿತವಾಗಿಯೂ ಬಿಜೆಪಿ ತೊರೆದು ಬೇರೆ ಪಕ್ಷಕ್ಕೆ ಹೋಗುವಂತಹ ಯಾವುದೇ ಪ್ರಸ್ತಾವ ನಮ್ಮ ಮುಂದೆ ಇಲ್ಲ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನವರು ಆಧಾರ ಇಟ್ಟುಕೊಂಡು ಮಾತನಾಡಲಿ. ಡಿ.ಕೆ. ಶಿವಕುಮಾರ್‌ ಅವರಲ್ಲಿ ದಿಟ್ಟತನವಿದ್ದರೆ ಕಾಂಗ್ರೆಸ್‌ಗೆ ಮರಳಲಿರುವವರ ಹೆಸರನ್ನು ಈಗಲೇ ಬಹಿರಂಗಪಡಿಸಲಿ. ಅದನ್ನು ಬಿಟ್ಟು ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸವನ್ನು ಅವರು ಮಾಡುತ್ತಿದ್ದಾರೆ  ಎಂದು ದೂರಿದರು.

ನಾವು ಮುಂದಿನ ಚುನಾವಣೆಯನ್ನು ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಎದುರಿಸುತ್ತೇವೆ. ಅವರ ಮಾರ್ಗದರ್ಶನದಲ್ಲಿ ಕಮಲದ ಗುರುತಿನಲ್ಲೇ ಚುನಾವಣೆಗೆ ಸ್ಪರ್ಧಿಸುತ್ತೇವೆ. ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುತ್ತೇವೆ ಎಂದು ಸ್ಪಷ್ಟಪಡಿಸಿದರು.

ಅನೇಕರಿಗೆ ಸಚಿವರಾಗಬೇಕು ಎಂಬ ಆಸೆ ಇದೆ. ಅವರು ಕೂಡ ಹಲವು ಬಾರಿ ಗೆದ್ದಿರುತ್ತಾರೆ. ಸಚಿವ ಸ್ಥಾನದ ವಿಚಾರವನ್ನು ಪಕ್ಷದ ವೇದಿಕೆಯಲ್ಲಿ ಚರ್ಚಿಸುವುದು ಸೂಕ್ತ. ನಮ್ಮದು ರಾಷ್ಟ್ರೀಯ ಪಕ್ಷ. ಬಿಜೆಪಿಯಲ್ಲಿ ಅಧಿಕಾರಕ್ಕಾಗಿ ಕಿತ್ತಾಟ ಮಾಡುತ್ತಿದ್ದಾರೆ ಎಂದು ಸಂದೇಶ ಸಾರ್ವಜನಿಕರಿಗೆ ಹೋಗಬಾರದು. ಈ ವಿಚಾರದಲ್ಲಿ ಮುಖ್ಯಮಂತ್ರಿ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು