ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ :ಸಂಜೆಯ ಬಳಿಕವೇ ಫಲಿತಾಂಶ ಘೋಷಣೆ

ವಿಶ್ವವಿದ್ಯಾಲಯ ಆವರಣದಲ್ಲಿ 23ರ ಬೆಳಿಗ್ಗೆ 8ರಿಂದ ಮತ ಎಣಿಕೆ
Last Updated 22 ಮೇ 2019, 13:54 IST
ಅಕ್ಷರ ಗಾತ್ರ

ದಾವಣಗೆರೆ: ತೋಳಹುಣಸೆಯಲ್ಲಿರುವ ದಾವಣಗೆರೆ ವಿಶ್ವವಿದ್ಯಾಲಯದ ಆವರಣದಲ್ಲಿ ಗುರುವಾರ (ಮೇ 23) ಬೆಳಿಗ್ಗೆ 8ರಿಂದ ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭಗೊಳ್ಳಲಿದೆ.

ಮಧ್ಯಾಹ್ನ ಎರಡು ಗಂಟೆಯೊಳಗೆ 1949 ಮತಗಟ್ಟೆಗಳ ಇವಿಎಂಗಳ ಮತ ಎಣಿಕೆ ಕಾರ್ಯ ಪೂರ್ಣಗೊಳ್ಳುವ ಸಾಧ್ಯತೆ ಇದ್ದು, ಯಾವ ಅಭ್ಯರ್ಥಿ ಗೆಲ್ಲಬಹುದು ಎಂಬ ಚಿತ್ರಣ ಸ್ಪಷ್ಟವಾಗಲಿದೆ. ಆದರೆ, ಎಂಟು ವಿಧಾನಸಭಾ ಕ್ಷೇತ್ರಗಳಿಂದ ತಲಾ ಐದು ವಿ.ವಿ. ಪ್ಯಾಟ್‌ಗಳಲ್ಲಿ ದಾಖಲಾಗಿರುವ ಮತಗಳನ್ನು ಇವಿಎಂಗಳೊಂದಿಗೆ ತಾಳೆ ನೋಡಿ ಸರಿಯಾಗಿರುವುದು ಖಚಿತಪಡಿಸಿಕೊಂಡ ಬಳಿಕವೇ ಚುನಾವಣಾಧಿಕಾರಿ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ. ಈ ಪ್ರಕ್ರಿಯೆ ಮುಗಿಯಲು ಸಂಜೆ 6ರಿಂದ 7 ಗಂಟೆಯಾಗುವ ಸಾಧ್ಯತೆ ಇದೆ.

ಬೆಳಿಗ್ಗೆ 7 ಗಂಟೆಗೆ ಸಾಮಾನ್ಯ ವೀಕ್ಷಕರು, ಚುನಾವಣಾಧಿಕಾರಿ, ಅಭ್ಯರ್ಥಿಗಳು ಹಾಗೂ ಏಜೆಂಟರ ಸಮ್ಮುಖದಲ್ಲಿ ಸ್ಟ್ರಾಂಗ್‌ ರೂಂನ ಬೀಗವನ್ನು ತೆರೆದು ಮತ ಎಣಿಕೆ ಪ್ರಕ್ರಿಯೆ ಆರಂಭಿಸಲಾಗುತ್ತದೆ. ಬೆಳಿಗ್ಗೆ 8 ಗಂಟೆಗೆ ಚುನಾವಣಾಧಿಕಾರಿ ಟೇಬಲ್‌ ಎದುರು ಅಂಚೆ ಮತ ಹಾಗೂ ಇ.ಟಿ.ಪಿ.ಬಿ.ಎಸ್‌ ಮತಪತ್ರಗಳನ್ನು ಎಣಿಕೆ ಮಾಡಲಾಗುತ್ತದೆ. ಬಳಿಕ ಎಂಟು ವಿಧಾನಸಭಾ ಕ್ಷೇತ್ರಗಳ ಸಹಾಯಕ ಚುನಾವಣಾಧಿಕಾರಿ ಸಮ್ಮುಖದಲ್ಲಿ ಇವಿಎಂ ಎಣಿಕೆ ಕಾರ್ಯ ನಡೆಯಲಿದೆ.

ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ ಇವಿಎಂ ಮತ ಎಣಿಕೆಗೆ 14 ಟೇಬಲ್‌ ಹಾಗೂ ವಿ.ವಿ. ಪ್ಯಾಟ್‌ಗಳ ಚೀಟಿ ಎಣಿಕೆಗೆ ಒಂದು ಟೇಬಲ್‌ ಹಾಕಲಾಗಿದೆ. ಜಗಳೂರು ಕ್ಷೇತ್ರದಲ್ಲಿ 262 ಮತಗಟ್ಟೆಗಳು ಇದ್ದುದರಿಂದ ಇಲ್ಲಿ ಮತ ಎಣಿಕೆಯು 19 ಸುತ್ತು ನಡೆಯಲಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ 211 ಮತಗಟ್ಟೆಗಳಿರುವುದರಿಂದ 16 ಸುತ್ತು ಮತ ಎಣಿಕೆ ನಡೆಯಲಿದೆ.

ಜಿಲ್ಲಾ ಚುನಾವಣಾಧಿಕಾರಿ ಜಿ.ಎನ್‌. ಶಿವಮೂರ್ತಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಆರ್‌. ಚೇತನ್‌ ಅವರು ಮತ ಎಣಿಕೆ ಕೇಂದ್ರಕ್ಕೆ ಬುಧವಾರ ಭೇಟಿ ನೀಡಿ ಅಂತಿಮ ಹಂತದ ಸಿದ್ಧತೆ ಪರಿಶೀಲಿಸಿದರು.

ಮೊಬೈಲ್‌ ನಿಷೇಧ

ಮತ ಎಣಿಕೆ ಕೇಂದ್ರದ ಒಳಗೆ ಮೊಬೈಲ್‌, ಎಲೆಕ್ಟ್ರಾನಿಕ್‌ ಉಪಕರಣ ಬಳಕೆ, ಸಿಗರೇಟು, ಬೆಂಕಿಪೊಟ್ಟಣ ಹಾಗೂ ಇತರೆ ತಂಬಾಕು ಉತ್ಪನ್ನಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಮತ ಎಣಿಕೆ ಕೇಂದ್ರದ ಬಳಿ ಗುಂಪು ಸೇರುವುದು, ವಿಜಯೋತ್ಸವ ಆಚರಿಸುವುದನ್ನೂ ನಿಷೇಧಿಸಲಾಗಿದೆ.

ಮತ ಎಣಿಕೆ ಸಿಬ್ಬಂದಿ, ಏಜೆಂಟರು ಸಹ ಮೊಬೈಲ್‌ಗಳನ್ನು ಮತ ಎಣಿಕೆ ಕೇಂದ್ರದ ಒಳಗೆ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಮೊಬೈಲ್‌ ತಂದರೆ ಕೇಂದ್ರದ ಪ್ರವೇಶ ದ್ವಾರದಲ್ಲೇ ಕೊಟ್ಟು ಸ್ವೀಕೃತಿ ಚೀಟಿ ಪಡೆದು, ವಾಪಸ್‌ ಹೋಗುವಾಗ ಮೊಬೈಲ್‌ ತೆಗೆದುಕೊಂಡು ಹೋಗಬಹುದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT