ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಶಿಷ್ಟರ ಸಮಸ್ಯೆಗೆ ಸ್ಪಂದನ

Last Updated 23 ಜನವರಿ 2012, 8:40 IST
ಅಕ್ಷರ ಗಾತ್ರ

ಹರಪನಹಳ್ಳಿ: ತಲತಲಾಂತರ ಗಳಿಂದಲೂ ಅನ್ಯಾಯ, ಶೋಷಣೆ, ದಬ್ಬಾಳಿಕೆ, ದೌರ್ಜನ್ಯದ ನೋವುಂಡು ಪರಿತಪಿಸುತ್ತಿರುವ ಪರಿಶಿಷ್ಟ ಕುಟುಂಬಗಳ ಬದುಕು ಹಸನಗೊಳಿಸುವ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸಿದೆ ಎಂದು ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಆರುಂಡಿ ನಾಗರಾಜ್ ಹೇಳಿದರು.

ತಾಲ್ಲೂಕಿನ ಅಣಿಮೇಗಳ ತಾಂಡಾದಲ್ಲಿ ಭಾನುವಾರ ಪಕ್ಷದ ಎಸ್ಸಿ ಮೋರ್ಚಾ ಸ್ವಾಮಿ ವಿವೇಕಾನಂದ ಸ್ಮರಣಾರ್ಥ ಹಮ್ಮಿಕೊಂಡಿದ್ದ ಪ್ರತಿಭಾವಂತ ಪರಿಶಿಷ್ಟ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.

ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಲ್ಪಸಂಖ್ಯಾತರ ಕುಟುಂಬಗಳು ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವ ಮೂಲಕ ಆರ್ಥಿಕ ಸಬಲೀಕರಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಸಮಾಜಕಲ್ಯಾಣ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ಸಚಿವಾಲಯದ ಮೂಲಕ ಶೋಷಿತ ಸಮುದಾಯಗಳ ಸಮಗ್ರ ಅಭಿವೃದ್ಧಿಗೆ ಕೋಟ್ಯಂತರ ರೂ ಅನುದಾನ ಬಿಡುಗಡೆ ಮಾಡಿದೆ ಎಂದು ವಿವರಿಸಿದರು.

ಬಂಜಾರ ಸಮುದಾಯ ಏಳಿಗೆಗಾಗಿ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಿರುವುದು ರಾಜ್ಯ ಸರ್ಕಾರಕ್ಕೆ ಶೋಷಿತ ಸಮುದಾಯಗಳ ಬಗ್ಗೆ ಇರುವ ಕಾಳಜಿಯನ್ನು ಬಿಂಬಿಸುತ್ತಿದೆ. ಶಾಸಕ ಜಿ. ಕರುಣಾಕರರೆಡ್ಡಿ ಹಾಗೂ ಸಂಸದ ಜಿ.ಎಂ. ಸಿದ್ದೇಶ್ವರ ಅವರು ಬಂಜಾರ ಸಮುದಾಯ ತಾಂಡಾಗಳ ಅಭಿವೃದ್ಧಿಗೆ ವಿಶೇಷ ಕಾಳಜಿವಹಿಸಿದ್ದಾರೆ.

ಸ್ವಾತಂತ್ರ್ಯನಂತರ ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಶೋಷಿತ ಸಮುದಾಯಗಳಿಗೆ ಧ್ವನಿಯಾಗುವ ಕೆಲಸ ಮಾಡದೇ, ಸ್ವಾರ್ಥಕ್ಕಾಗಿ ಅಧಿಕಾರ ಅನುಭವಿಸಿದ ಕಾಂಗ್ರೆಸಿಗರು ಈಗ ವೃಥಾ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಸ್ವಾಮಿ ವಿವೇಕಾನಂದರು ಚಿಕಾಗೋ ನಡೆದ ಸರ್ವಧರ್ಮ ಸಮ್ಮೇಳನದಲ್ಲಿ ಭಾಗವಹಿಸುವ ಮೂಲಕ ಭಾರತೀಯ ಮೂಲದ ಹಿಂದುಧರ್ಮವನ್ನು ಅಂತರ್‌ರಾಷ್ಟ್ರೀಯ ಮಟ್ಟಕ್ಕೇರಿಸಿದ್ದು ಅವಿಸ್ಮರಣೀಯ. ಅಂತಹ ಮಹನೀಯರ ನೆನಪಿನಲ್ಲಿ ಆಚರಿಸುತ್ತಿರುವ ಕಾರ್ಯಕ್ರಮ ಅರ್ಥಪೂರ್ಣ ಎಂದು ಶ್ಲಾಘಿಸಿದರು.

ತಾಲ್ಲೂಕು ಎಸ್ಸಿ ಮೋರ್ಚಾ ಅಧ್ಯಕ್ಷ ಕಣವಿಹಳ್ಳಿ ಮಂಜುನಾಥ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.  ಜಿಲ್ಲಾ ಎಸ್ಸಿಮೋರ್ಚಾ ಉಪಾಧ್ಯಕ್ಷ ತಿಪ್ಪೇಸ್ವಾಮಿ, ಗ್ರಾ.ಪಂ. ಅಧ್ಯಕ್ಷ ಪರಶುರಾಮ, ಎಸ್‌ಡಿಎಂಸಿ ಅಧ್ಯಕ್ಷ ಕುಮಾರನಾಯ್ಕ, ತೆಲಿಗಿ ಶಕ್ತಿಕೇಂದ್ರದ ಅಧ್ಯಕ್ಷ ಕರಿಬಸಪ್ಪ, ತುಳಜಾನಾಯ್ಕ, ಮುಖಂಡರಾದ ಅಂಜಿನಪ್ಪ, ಬಾಗಳಿ ಕೊಟ್ರಪ್ಪ ಇತರರು ಉಪಸ್ಥಿತರಿದ್ದರು. ರಾಜು ಚನ್ನಗಿರಿ ನಿರೂಪಿಸಿದರು. ಜಯಾನಾಯ್ಕ ಸ್ವಾಗತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT