ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿವೇತನ ಬಿಡುಗಡೆಗೆ ಆಗ್ರಹ

Last Updated 6 ಜುಲೈ 2012, 5:50 IST
ಅಕ್ಷರ ಗಾತ್ರ

ಹರಪನಹಳ್ಳಿ: ಪದವಿಪೂರ್ವ ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆ ಅಧೀನಕ್ಕೆ ಒಳಪಡುವ ಪಿಯು ಹಾಗೂ ಡಿಪ್ಲೊಮಾ ಕೋರ್ಸ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳ ವಿದ್ಯಾರ್ಥಿವೇತನದ ಬಿಡುಗಡೆಯಲ್ಲಿ ವಿಳಂಬಧೋರಣೆ ಅನುಸರಿಸುತ್ತಿರುವ ಬಿಸಿಎಂ ಇಲಾಖೆಯ ಅಧಿಕಾರಿಗಳ ಧೋರಣೆ ಖಂಡಿಸಿ ಅಖಿಲ ಭಾರತ ವಿದ್ಯಾರ್ಥಿ ಫೆಡರೇಷನ್(ಎಐಎಸ್‌ಎಫ್) ಹಾಗೂ ಅಖಿಲ ಭಾರತ ಯುವಜನ ಫೆಡರೇಷನ್(ಎಐವೈಎಫ್) ಸಂಘಟನೆಗಳ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಗುರುವಾರ ಪಟ್ಟಣದ ತಾಲ್ಲೂಕು ಪಂಚಾಯ್ತಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಸರ್ಕಾರಿ ಪ್ರಥಮದರ್ಜೆ ಕಾಲೇಜು ಆವರಣದಿಂದ ಸರ್ಕಾರ ಹಾಗೂ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ವಿರುದ್ಧ ಧಿಕ್ಕಾರದ ಘೋಷಣೆ ಕೂಗುತ್ತಾ ಮೆರವಣಿಗೆ ಸಾಗಿದ ಪ್ರತಿಭಟನಾಕಾರರು, ಹೊಸಪೇಟೆ ರಸ್ತೆಯ ಮೂಲಕ ತಾಲ್ಲೂಕು ಪಂಚಾಯ್ತಿ ಕಚೇರಿ ತಲುಪಿ, ಬಳಿಕ ಬಹಿರಂಗ ಸಭೆ ನಡೆಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಎಐಎಸ್‌ಎಫ್ ಸಂಘಟನೆಯ ಮುಖಂಡ ಚಂದ್ರನಾಯ್ಕ ಮಾತನಾಡಿ, ಕಳೆದ ಶೈಕ್ಷಣಿಕ ವರ್ಷದಲ್ಲಿ ಪಿಯು ಹಾಗೂ ಡಿಪ್ಲೊಮಾ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ವಿದ್ಯಾರ್ಥಿವೇತನವನ್ನು, ಹೊಸ ಶೈಕ್ಷಣಿಕ ವರ್ಷ ಆರಂಭವಾದರೂ ಸಂಬಂಧಿಸಿದ ಬಿಸಿಎಂ ಇಲಾಖೆಯ ಅಧಿಕಾರಿಗಳು ಇದುವರೆಗೂ ಬಿಡುಗಡೆ ಮಾಡದೇ ವಿನಾಕಾರಣ ವಿಳಂಬ ನೀತಿ ಅನುಸರಿಸುತ್ತಿದ್ದಾರೆ. ತಾಲ್ಲೂಕು ಸತತ ಬರಗಾಲದ ಸಂಕಷ್ಟಕ್ಕೆ ಸಿಲುಕುತ್ತಿರುವ ಪರಿಣಾಮ, ಎಷ್ಟೋ ಪೋಷಕರು ದುಬಾರಿ ಶೈಕ್ಷಣಿಕ ವೆಚ್ಚವನ್ನು ಭರಿಸಲಾಗದೇ ತಮ್ಮ ಮಕ್ಕಳನ್ನು ಕಾಲೇಜಿಗೆ ಕಳುಹಿಸದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳ ಪಾಲಿಗೆ ಕೊಂಚ ನೆರವಾಗಬಲ್ಲ ವಿದ್ಯಾರ್ಥಿವೇತನಕ್ಕೂ ಅಧಿಕಾರಿಗಳು ಕತ್ತರಿ ಹಾಕಿದ್ದಾರೆ ಎಂದು ಕಿಡಿಕಾರಿದರು.

ಈ ಕುರಿತು ಕಾಲೇಜಿನಲ್ಲಿ ಕೇಳಿದರೆ ಬಿಸಿಎಂ ಇಲಾಖೆ ಇನ್ನೂ ವಿದ್ಯಾರ್ಥಿವೇತನ ಮಂಜೂರು ಮಾಡಿಲ್ಲ ಎನ್ನುತ್ತಾರೆ. ಬಿಸಿಎಂ ಇಲಾಖೆಯಲ್ಲಿ ವಿಚಾರಿಸಿದರೆ, ಪೂರಕ ದಾಖಲೆಗಳು ಕಾಲೇಜಿನಿಂದ ಕಚೇರಿಗೆ ಬಂದಿಲ್ಲ ಎಂದು ಸಬೂಬು ಹೇಳುತ್ತಾರೆ. ಇಲಾಖೆ ಹಾಗೂ ಕಾಲೇಜು ಸಿಬ್ಬಂದಿಯ ಬೇಜವಾಬ್ದಾರಿಯುತ ಆರೋಪ-ಪ್ರತ್ಯಾರೋಪ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕಂಟಕವಾಗಿ ಪರಿಣಮಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಅಖಿಲ ಭಾರತ ಕಿಸಾನ್ ಸಭಾ(ಎಐಕೆಎಸ್) ಸಂಘಟನೆಯ ರಾಜ್ಯ ಘಟಕದ ಕಾರ್ಯದರ್ಶಿ ಹೊಸಳ್ಳಿ ಮಲ್ಲೇಶ್, ಉಭಯ ಸಂಘಟನೆಯ ಮುಖಂಡರಾದ ಎಚ್. ಗೋಣಿಸ್ವಾಮಿ, ಎಚ್. ರಮೇಶನಾಯ್ಕ, ಭಾರ್ಗವ್, ಮಂಜುನಾಥ, ನಾಗರಾಜ್, ಸಂಗೀತಾ, ಮಾಲಾಶ್ರೀ, ಕವಿತಾ, ಶ್ರುತಿ, ಮಾಲಾ ಪ್ರತಿಭಟನೆಯ ನೇತೃತ್ವವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT