ಮಂಗಳವಾರ, ಜನವರಿ 28, 2020
29 °C
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ದೌರ್ಜನ್ಯ ಪ್ರಕರಣ

₹40.46 ಲಕ್ಷ ಪರಿಹಾರ ಧನ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ‘ದೌರ್ಜನ್ಯಕ್ಕೆ ಒಳಗಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ 36 ಸಂತ್ರಸ್ತರಿಗೆ ಜಿಲ್ಲಾಡಳಿತದಿಂದ ₹40.46 ಲಕ್ಷ ಪರಿಹಾರ ಧನ ವಿತರಿಸಲಾಗಿದೆ’ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಅವರು ಈ ವಿಷಯ ತಿಳಿಸಿದರು.

‘2019ರ ಜನವರಿ 1 ರಿಂದ 30ರ ವರೆಗೆ ಒಟ್ಟು 47 ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಇದುವರೆಗೆ 36 ಪ್ರಕರಣಗಳಲ್ಲಿ ₹40.46 ಲಕ್ಷ ಪರಿಹಾರ ಧನವನ್ನು ವಿತರಿಸಲಾಗಿದೆ. ಇನ್ನುಳಿದ 11 ಪ್ರಕರಣಗಳಲ್ಲಿ ನೊಂದ ಸಂತ್ರಸ್ತರಿಗೆ ಪರಿಹಾರ ಧನ ವಿತರಿಸಬೇಕಾಗಿದೆ. 1989ರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಕಾಯ್ದೆಯಡಿ 36 ನ್ಯಾಯಾಲಯ ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ’ ಎಂದು ಹೇಳಿದರು.

ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಮಾತನಾಡಿ, ‘ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ ಕೃಷಿ ಇಲಾಖೆ ವ್ಯಾಪ್ತಿಯಲ್ಲಿ ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಫಲಾನುಭವಿಗಳಿಗೆ ಸಾಧನ ಸಲಕರಣೆ ದೊರೆಯುವಂತೆ ನೋಡಿಕೊಳ್ಳಬೇಕು. ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯಾಪ್ತಿಯಲ್ಲಿ ಒಡೆತನ ಯೋಜನೆಯಡಿ ಸೌಲಭ್ಯ, ಬ್ಯಾಂಕ್‌ಗಳಲ್ಲಿ ಸಕಾಲಕ್ಕೆ ಸಾಲ ಸೌಲಭ್ಯ ದೊರೆಯುವಂತೆ ನೋಡಿಕೊಳ್ಳಬೇಕು’ ಎಂದು ಸೂಚಿಸಿದರು.

‘ಬಸವನಬಾಗೇವಾಡಿ ಪಟ್ಟಣದಲ್ಲಿ ಕೈಗಾರಿಕಾ ಪ್ರದೇಶ ಅಭಿವೃದ್ಧಿಗೆ ಸಂಬಂಧ ಪಟ್ಟಂತೆ ಬೇಡಿಕೆ ಆಧಾರದ ಮೇಲೆ ಕ್ರಮ ಕೈಗೊಳ್ಳಬೇಕು. ಖಾದಿ ಮತ್ತು ಗ್ರಾಮೋದ್ಯೋಗ ಇಲಾಖೆಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಜನರಿಗೆ ಇರುವ ಯೋಜನೆಗಳ ಲಾಭ ದೊರಕಿಸುವ ಜೊತೆಗೆ ಜಾಗೃತಿ ಮೂಡಿಸಬೇಕು. ಸಿಂದಗಿ ಪಟ್ಟಣದಲ್ಲಿ ಕೈಗಾರಿಕಾ ಪ್ರದೇಶಕ್ಕಾಗಿ ಮೀಸಲಿರುವ ನಿವೇಶನ ಹಂಚಿಕೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.

‘ಸಿಂದಗಿ ತಾಲೂಕಿನ ಕಲ್ಲಹಳಿ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನಕ್ಕಾಗಿಯೇ ಮೀಸಲಿಟ್ಟ ಅನುದಾನ ಅದೇ ಕಾಮಗಾರಿಗೆ ಬಳಸಬೇಕು. ಪಟ್ಟಣದ ಇಂಡಿ ರಸ್ತೆಯಲ್ಲಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಜನಾಂಗಕ್ಕೆ ಮೀಸಲಿಟ್ಟ ಜಾಗದ ಜಮೀನು ಬಗ್ಗೆ ಪರಿಶೀಲನೆ ನಡೆಸಬೇಕು. ಕೆಸರಟ್ಟಿ ಗ್ರಾಮದ ಪರಿಶಿಷ್ಟ ಜಾತಿ ಕುಟುಂಬಗಳಿಗೆ ಕುಡಿಯುವ ನೀರಿನ ಶಾಶ್ವತ ಪರಿಹಾರ ಕಲ್ಪಿಸಬೇಕು’ ಎಂದು ಹೇಳಿದರು.

ದೇವದಾಸಿ ಪದ್ಧತಿ ನಿರ್ಮೂಲನೆಗಾಗಿ ಜಾಗೃತಿ, ಸ್ಮಶಾನ ಭೂಮಿ ಗುರುತಿಸುವುದು, ಗಂಗಾ ಕಲ್ಯಾಣ ಯೋಜನೆಗೆ ವಿದ್ಯುತ್ ಸಂಪರ್ಕ ಕಲ್ಪಿಸುವುದು, ಸಾಮಾಜಿಕ ಭದ್ರತೆ ಹಾಗೂ ಪಿಂಚಣಿ ಯೋಜನೆಯ ಸಮಸ್ಯೆಗಳ ಕುರಿತು ನಾಮನಿರ್ದೇಶಿತ ಸದಸ್ಯರು ಸಭೆಯ ಗಮನಕ್ಕೆ ತಂದರು.

ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪ್ರಕಾಶ್ ನಿಕ್ಕಂ, ಉಪವಿಭಾಗಾಧಿಕಾರಿ ಸ್ನೆಹಲ್ ಸುಧಾಕರ ಲೋಖಂಡೆ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಸಮಿತಿಯ ನಾಮನಿರ್ದೇಶಿತ ಸದಸ್ಯರಾದ ಅಡಿವೆಪ್ಪ ಸಾಲಗಲ್ಲ, ಅರವಿಂದ ಸಾಲವಾಡಗಿ, ಬಸವರಾಜ ಪೂಜಾರಿ, ರಾಜಶೇಖರ ಕೂಚಬಾಳ, ಮನೋಹರ ಕಾಂಬಳೆ, ಮತ್ತಣ್ಣ ಸಾಸನೂರ, ವಿನಾಯಕ ಗುಣಸಾಗೆ, ಅಶೋಕ ಕರಿಕಲ್, ಗಣಪತಿ ಬಾಣೇಕೀಲ ಇದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು