ಹುಬ್ಬಳ್ಳಿ: 'ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬಾರದು. ಅವರಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಲು ರಾಷ್ಟ್ರೀಯ ಅಹಿಂದ ಸಂಘಟನೆ ವತಿಯಿಂದ ಅಕ್ಟೋಬರ್ 3,4ರಂದು ಹುಬ್ಬಳ್ಳಿಯಿಂದ ಬೆಂಗಳೂರಿನ ವಿಧಾನಸೌಧದವರೆಗೆ ಜಾಥಾ ನಡೆಸಲಾಗುವುದು' ಎಂದು ಸಂಘಟನೆ ಅಧ್ಯಕ್ಷ ಮುತ್ತಣ್ಣ ಶಿವಳ್ಳಿ ಹೇಳಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಅ. 3ರಂದು ಮಧ್ಯಾಹ್ನ 12 ಗಂಟೆಗೆ ಹುಬ್ಬಳ್ಳಿಯ ಇಂದಿರಾ ಗಾಜಿನ ಮನೆಯಿಂದ ಜಾಥಾ ಆರಂಭಿಸಲಾಗುವುದು. ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ ಹಾಗೂ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಹಾವೇರಿ ದಾವಣಗೆರೆ ಮಾರ್ಗವಾಗಿ ತೆರಳಲಾಗುವುದು. ಚಿತ್ರದುರ್ಗದಲ್ಲಿ ವಾಸ್ತವ್ಯ ಮಾಡಿ, ಮರುದಿನ ಬೆಂಗಳೂರಿನ ವಿಧಾನಸೌಧಕ್ಕೆ ತಲುಪಿ ಜಾಥಾ ಕೊನೆಗೊಳಿಸಲಾಗುವುದು ಎಂದು ತಿಳಿಸಿದರು.
'ಅಹಿಂದ ನಾಯಕರಾಗಿರುವ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಬಿಜೆಪಿ, ಜೆಡಿಎಸ್ ನಾಯಕರು ಪ್ರಯತ್ನಿಸುತ್ತಿದ್ದಾರೆ. ಇದಕ್ಕೆ ಸಿದ್ದರಾಮಯ್ಯ ಸೊಪ್ಪು ಹಾಕಬಾರದು' ಎಂದರು.
'ಬಿಜೆಪಿಯೇತರ ಸರ್ಕಾರ ಇರುವ ರಾಜ್ಯಗಳಲ್ಲಿ ಬಿಜೆಪಿಯು ರಾಜ್ಯಪಾಲರ ಮೂಲಕ ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರ ಪ್ರಾಸಿಕ್ಯೂಷನ್ ನಡೆಸಲು ನ್ಯಾಯಾಲಯ ನೀಡಿರುವ ತೀರ್ಪಿಗೆ ನಾವು ವಿರೋಧಿಸುತ್ತಿಲ್ಲ. ಬಿಜೆಪಿ, ಜೆಡಿಎಸ್ ಮುಖಂಡರ ಷಡ್ಯಂತ್ರ ವಿರೋಧಿಸುತ್ತಿದ್ದೇವೆ ಎಂದು ಹೇಳಿದರು.
ಜಾಥಾ ಕಾರ್ಯಕ್ರಮವು ಪಕ್ಷಾತೀತವಾಗಿದೆ. ಸಿದ್ದರಾಮಯ್ಯ ಅವರಿಗೆ ಬೆಂಬಲ ನೀಡಲು ಜಾಥಾ ಹಮ್ಮಿಕೊಳ್ಳಲಾಗಿದೆ ಎಂದರು.
ಸಿದ್ದರಾಮಯ್ಯ ಪರವಾಗಿ ನಿಂತಿರುವ ಎಐಸಿಸಿ, ಕೆಪಿಸಿಸಿ ಹಾಗೂ ಕಾಂಗ್ರೆಸ್ ಪಕ್ಷದ 135 ಶಾಸಕರ ಕ್ರಮವನ್ನು ಸ್ವಾಗತಿಸುತ್ತೇವೆ ಎಂದು ಹೇಳಿದರು.