ಭಾನುವಾರ, ನವೆಂಬರ್ 29, 2020
24 °C
ಅಂಚಟಗೇರಿಯಲ್ಲಿ ಪಶು ಆಸ್ಪತ್ರೆ ಉದ್ಘಾಟಿಸಿದ ಸಚಿವ ಪ್ರಭು ಚವ್ಹಾಣ್

ಪಶು ವೈದ್ಯರ ನೇಮಕಾತಿ; ಆರ್ಥಿಕ ಇಲಾಖೆಗೆ ಪ್ರಸ್ತಾವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಪಶು ಇಲಾಖೆಯ ಒಟ್ಟು 18 ಸಾವಿರ ಹುದ್ದೆಗಳ ಪೈಕಿ ಒಂಬತ್ತು ಸಾವಿರ ಹುದ್ದೆಗಳು ಖಾಲಿಯಿದ್ದು, ಸದ್ಯಕ್ಕೆ ಇಲಾಖೆಗೆ ಅಗತ್ಯವಿರುವ ಪಶು ವೈದ್ಯರ ನೇಮಕಾತಿ ಕುರಿತು ಆರ್ಥಿಕ ಇಲಾಖೆಗೆ ಪ್ರಸ್ತಾವ ಕಳುಹಿಸಲಾಗಿದೆ ಎಂದು ಪಶು ಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್ ಹೇಳಿದರು.

ಹುಬ್ಬಳ್ಳಿ ತಾಲ್ಲೂಕಿನ ಅಂಚಟಗೇರಿ ಗ್ರಾಮದಲ್ಲಿ ₹29.60 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಪಶು ಆಸ್ಪತ್ರೆ ಉದ್ಘಾಟಿಸಿ ಮಾಧ್ಯಮದವರ ಜೊತೆ ಮಾತನಾಡಿದ ಅವರು ‘ಕೋವಿಡ್-19 ಹಿನ್ನೆಲೆಯಲ್ಲಿ ಪಶು ವೈದ್ಯರ ನೇಮಕಾತಿಯನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ. ಆರ್ಥಿಕ ಇಲಾಖೆಯ ಅನುಮತಿ ಸಿಕ್ಕ ತಕ್ಷಣ ಪ್ರಕ್ರಿಯೆ ಆರಂಭವಾಗಲಿದೆ’ ಎಂದರು.

‘ಪ್ರಾಣಿ ಹಿಂಸೆ ತಡೆಯುವ ಕಾನೂನುಗಳನ್ನು ಬಿಗಿಗೊಳಿಸಲು ರಾಜ್ಯದಲ್ಲಿ ಮೊದಲ ಬಾರಿಗೆ ಕರ್ನಾಟಕ ಪ್ರಾಣಿಕಲ್ಯಾಣ ಮಂಡಳಿ ಸ್ಥಾಪಿಸಲಾಗಿದೆ. ಪಶುಪಾಲಕರು ಮತ್ತು ಜಾನುವಾರು ಸಾಕಣೆಯಲ್ಲಿ ತೊಡಗಿಕೊಂಡವರಿಗೆ ಇನ್ನೂ ಹೆಚ್ಚಿನ ಪಶುವೈದ್ಯ ಸೇವೆಯನ್ನು ಕಾಲಮಿತಿಯೊಳಗೆ ಕೈಗೊಳ್ಳಲು ವಾರ್‌ರೂಮ್‌ ತಯಾರಿ ಮಾಡಿಕೊಳ್ಳಲಾಗುತ್ತಿದೆ. ರೈತರು ಸಹಾಯವಾಣಿ 1962 ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು’ ಎಂದರು.

‘ರಾಜ್ಯದಲ್ಲಿ 15 ಪಶು ಸಂಜೀವಿನಿ ವಾಹನಗಳನ್ನು ವಿವಿಧ ಜಿಲ್ಲೆಗಳಿಗೆ ನೀಡಲಾಗಿದೆ. ಇನ್ನೂ 15 ವಾಹನಗಳನ್ನು ಖರೀದಿಸಲಾಗುವುದು. ಗುಜರಾತ್ ಮಾದರಿಯಲ್ಲಿ ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿಗೊಳಿಸಲಾಗುವುದು. ಶೀಘ್ರದಲ್ಲಿ ಅಥಣಿ ಪಶು ವೈದ್ಯಕೀಯ ಕಾಲೇಜು ಆರಂಭಿಸಲಾಗುವುದು’ ಎಂದು ಭರವಸೆ ನೀಡಿದರು.

ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಚನ್ನಮ್ಮ ಗೊರ್ಲ, ಸದಸ್ಯ ಲಕ್ಷ್ಮಿ ಶಿವಳ್ಳಿ, ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ. ಪರಮೇಶ್ವರ ನಾಯಕ್, ಧಾರವಾಡ ಹಾಲು ಒಕ್ಕೂಟ ವ್ಯವಸ್ಥಾಪಕ ನಿರ್ದೇಶಕ ಸುರೇಶನಾಯ್ಕ, ಕೆಎಂಎಫ್ ತರಬೇತಿ ಕೇಂದ್ರದ ಜಂಟಿ ನಿರ್ದೇಶಕ ಮಂಜು ನಾಯಕ್, ಸಹಾಯಕ ನಿರ್ದೇಶಕ ಸುಭಾಷ್ ಪಡಗಣ್ಣನವರ, ಪಶು ವೈದ್ಯಾಧಿಕಾರಿ ಉಮೇಶ್ ತಿರ್ಲಾಪರ ಪಾಲ್ಗೊಂಡಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು