ಬುಧವಾರ, ಮಾರ್ಚ್ 3, 2021
30 °C

ಕುಮಾರಸ್ವಾಮಿ ಗೌರವದಿಂದ ರಾಜೀನಾಮೆ ನೀಡಲಿ: ಈಶ್ವರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ‘ಕಾಂಗ್ರೆಸ್‌ನ ಇಬ್ಬರು ಶಾಸಕರು ರಾಜೀನಾಮೆ ನೀಡುವ ಮೂಲಕ, ಸಮ್ಮಿಶ್ರ ಸರ್ಕಾರದ ಬುಡ ಅಲುಗಾಡುತ್ತಿದೆ. ಹಾಗಾಗಿ, ಎಚ್‌.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಹುದ್ದೆಗೆ ಈಗಲೇ ಗೌರವದಿಂದ ರಾಜೀನಾಮೆ ನೀಡುವುದು ಒಳ್ಳೆಯದು. ಇಲ್ಲದಿದ್ದರೆ, ಮುಂದೆ ತೀವ್ರ ಅವಮಾನ ಅನುಭವಿಸಬೇಕಾಗುತ್ತದೆ’ ಎಂದು ಬಿಜೆಪಿ ಶಾಸಕ ಕೆ.ಎಸ್. ಈಶ್ವರಪ್ಪ ಹೇಳಿದರು.

‘ತಮ್ಮ ಪಕ್ಷದ ಶಾಸಕರ ರಾಜೀನಾಮೆ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕರು ಬಿಜೆಪಿಯತ್ತ ಬೆರಳು ತೋರಿಸುತ್ತಿದ್ದಾರೆ. ಆಪರೇಷನ್ ಕಮಲ ಮಾಡುತ್ತಿದ್ದೇವೆ ಎಂದು ಬೊಬ್ಬೆ ಹಾಕುತ್ತಿದ್ದಾರೆ. ಆದರೆ, ಇದರಲ್ಲಿ ಬಿಜೆಪಿಯವರ ಕೈವಾಡವಿಲ್ಲ ಎಂದು ಸ್ವತಃ ಸರ್ಕಾರದ ಸಚಿವ ಜಿ.ಟಿ. ದೇವೇಗೌಡ ಸ್ಪಷ್ಟಪಡಿಸಿದ್ದಾರೆ’ ಎಂದು ಹುಬ್ಬಳ್ಳಿಯಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಮತ್ತಷ್ಟು ಶಾಸಕರು ರಾಜೀನಾಮೆ ನೀಡುವ ಮೂಲಕ, ಸರ್ಕಾರ ತಾನಾಗೇ ಬೀಳಲಿದೆ. ಆಗ, ಹೈಕಮಾಂಡ್ ನಿರ್ದೇಶನದಂತೆ ರಾಜ್ಯದಲ್ಲಿ ಬಿಜೆಪಿ ಹೆಜ್ಜೆ ಇಡಲಿದೆ. ಅಲ್ಲಿಯವರೆಗೆ ಕಾದು ನೋಡುವ ತಂತ್ರ ಅನುಸರಿಸಲಾಗುವುದು’ ಎಂದು ಹೇಳಿದರು.

‘ಎಲ್ಲರನ್ನೂ ಮುಗಿಸಿದ ಸಿದ್ದರಾಮಯ್ಯ!’:

‘ಮತ್ತೆ ಅಹಿಂದ ಸಂಘಟನೆ ಮಾಡುವುದಾಗಿ ಹೇಳುತ್ತಿರುವ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಅಹಿಂದ ಕಟ್ಟುವಾಗ ಜತೆಗಿದ್ದವರನ್ನೆಲ್ಲಾ ಮುಗಿಸಿದ್ದಾರೆ. ಕಾಂಗ್ರೆಸ್‌ಗೆ ಅವರನ್ನು ಕರೆತಂದ ಎಚ್. ವಿಶ್ವನಾಥ್, ಶ್ರೀನಿವಾಸ ಪ್ರಸಾದ್, ಮುಕುಡಪ್ಪ ಸೇರಿದಂತೆ ಅಂದು ಮುಂಚೂಣಿಯಲ್ಲಿದ್ದ ಯಾವ ನಾಯಕರೂ ಈಗ ಜತೆಗಿಲ್ಲ. ಅಲ್ಲದೆ, ರಾಜ್ಯದಲ್ಲಿ ಕಾಂಗ್ರೆಸ್‌ನ ಈ ಹೀನಾಯ ಸ್ಥಿತಿಗೆ ಸಿದ್ದರಾಮಯ್ಯ ಅವರೇ ಕಾರಣ’ ಎಂದು ವ್ಯಂಗ್ಯವಾಡಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ನಾಗೇಶ ಕಲಬುರ್ಗಿ, ಮುಖಂಡರಾದ ಮಹೇಶ ಟೆಂಗಿನಕಾಯಿ, ವೀರಭದ್ರಪ್ಪ ಹಾಲಹರವಿ, ರಂಗಾ ಬದ್ಧಿ ಹಾಗೂ ಹನುಮಂತಪ್ಪ ದೊಡ್ಡಮನಿ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು