ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ: ಶಾಸಕ ಮಹೇಶ ಟೆಂಗಿನಕಾಯಿ

ಪ್ರಗತಿ ಪರಿಶೀಲನಾ ಸಭೆ: ಶಾಸಕ ಮಹೇಶ ಟೆಂಗಿನಕಾಯಿ ಸೂಚನೆ
Published 19 ಡಿಸೆಂಬರ್ 2023, 16:17 IST
Last Updated 19 ಡಿಸೆಂಬರ್ 2023, 16:17 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಹುಬ್ಬಳ್ಳಿ– ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಿಧಾನಗತಿಯಲ್ಲಿ ಸಾಗುತ್ತಿದ್ದು, ಅಧಿಕಾರಿಗಳ ಹಾಗೂ ಗುತ್ತಿಗೆದಾರರ ನಿರ್ಲಕ್ಷ್ಯವೇ ಇದಕ್ಕೆ ಕಾರಣ’ ಎಂದು ಶಾಸಕ ಮಹೇಶ ಟೆಂಗಿನಕಾಯಿ ಬೇಸರ ವ್ಯಕ್ತಪಡಿಸಿದರು.

ಇಲ್ಲಿನ ಪ್ರವಾಸ ಮಂದಿರದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ‘ನಿಗದಿತ ಸಮಯದೊಳಗೆ ಸಿ.ಸಿ ರಸ್ತೆ ಹಾಗೂ ಒಳಚರಂಡಿ ನಿರ್ಮಾಣ ಕಾಮಗಾರಿಗಳನ್ನು ಪೂರ್ಣಗೊಳಿಸದೆ ಎಲ್‌ ಆ್ಯಂಡ್ ಟಿ ಕಂಪನಿಯವರು ಕಾಲಹರಣ ಮಾಡುತ್ತಿದ್ದಾರೆ. ಕಾಮಗಾರಿಗಳು ಗುಣಮಟ್ಟದಿಂದ ಮಾಡಬೇಕು. ರಸ್ತೆ ಗುಂಡಿಗಳನ್ನು ಭದ್ರಾಪುರ ಮರಳು ಬಳಸಿಯೇ ಮುಚ್ಚಬೇಕು. ಮುಂದಿನ ದಿನಗಳಲ್ಲಿ ರಸ್ತೆ ಕುಸಿದರೆ, ಹಾಳಾದರೆ ಗುತ್ತಿಗೆದಾರರೇ ಹೊಣೆ’ ಎಂದು ಎಚ್ಚರಿಕೆ ನೀಡಿದರು.

‘ಅಶೋಕ ನಗರ ಸೇತುವೆಯಿಂದ ನೃಪತುಂಗ ಬೆಟ್ಟದವರೆಗಿನ ರಸ್ತೆ ನಿರ್ಮಾಣ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಸಾರ್ವಜನಿಕರು ಧೂಳಿನಿಂದ ಬೇಸತ್ತಿದ್ದು, ಕಾಮಗಾರಿ ಯಾವಾಗ ಪೂರ್ಣಗೊಳ್ಳುತ್ತದೆ ಎಂದು ಪ್ರಶ್ನಿಸುತ್ತಿದ್ದಾರೆ. ಅವರಿಗೆ ಏನೆಂದು ಉತ್ತರಿಸಲಿ? ಈಗಾಗಲೇ ಸಾಕಷ್ಟು ವಿಳಂಬವಾಗಿದೆ. ಗುಣಮಟ್ಟದ ಕಾಮಗಾರಿ ಕೈಗೊಂಡು ಆದಷ್ಟು ಬೇಗ ಮುಗಿಸಬೇಕು’ ಎಂದು ಸೂಚಿಸಿದರು.

‘ಆರ್.ಎನ್.ಶೆಟ್ಟಿ ರಸ್ತೆಯಿಂದ ಸಿದ್ಧಾರೂಢ ಮಠ ದ್ವಾರದವರೆಗಿನ ರಸ್ತೆ ವಿಸ್ತರಣೆ ಮಾಡಬೇಕು. ಸಾಯಿನಗರ ರಸ್ತೆಯಿಂದ ಚರ್ಚ್‌ವರೆಗಿನ ರಸ್ತೆಯ ಸಮಸ್ಯೆ ಇತ್ಯರ್ಥಗೊಳಿಸಬೇಕು. ಫ್ಲೈಓವರ್‌ ಕಾಮಗಾರಿ ವಿಳಂಬದಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಕಾಮಗಾರಿ ಶೀಘ್ರ  ಪೂರ್ಣಗೊಳಿಸಬೇಕು’ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾತನಾಡಿ, ‘ಒಬ್ಬರ ಮೇಲೋಬ್ಬರು ಬೊಟ್ಟು ಮಾಡುವುದನ್ನು ಬಿಟ್ಟು, ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ’ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಪಾಲಿಕೆ ಆಯುಕ್ತರಾದ ಈಶ್ವರ ಉಳ್ಳಾಗಡ್ಡಿ, ಸದಸ್ಯರಾದ ವೀರಣ್ಣ ಸವಡಿ, ರಾಜಣ್ಣ ಕೊರವಿ, ಸಂತೋಷ ಚವ್ಹಾಣ, ಸೀಮಾ ಮೊಗಲಿಶೆಟ್ಟರ, ಮೀನಾಕ್ಷಿ ವಂಟಮೂರಿ, ಸಿದ್ದು ಮೊಗಲಿಶೆಟ್ಟರ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT