ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಮಿಕರ ಸ್ಥಿತಿ ಅಧ್ಯಯನ ಮಾಡಿ: ಸರ್ಕಾರಕ್ಕೆ ಬಸವರಾಜ ಹೊರಟ್ಟಿ ಸಲಹೆ

Last Updated 29 ಜೂನ್ 2021, 14:26 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಕೋವಿಡ್ ಲಾಕ್‌ಡೌನ್‌ನಿಂದ ಸಂಕಷ್ಟದಲ್ಲಿರುವ ಕಾರ್ಮಿಕರ ಸ್ಥಿತಿಗತಿಯನ್ನು ಸರ್ಕಾರ ಅಧ್ಯಯನ ಮಾಡಬೇಕು. ಅವರಿಗೆ ಇರುವ ಸೌಲಭ್ಯಗಳನ್ನು ತಲುಪಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದುವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸಲಹೆ ನೀಡಿದರು.

ನಗರದಲ್ಲಿ ಮಂಗಳವಾರ ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ಹಮ್ಮಿಕೊಂಡಿದ್ದ ಆಹಾರ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಕಾರ್ಮಿಕರು ತಮ್ಮ ಸಮಸ್ಯೆಗಳು ಹಾಗೂ ಬೇಡಿಕೆಗಳ ವಿವರವನ್ನೊಳಗೊಂಡ ಮನವಿಯನ್ನು ನನಗೆ ನೀಡಿದರೆ, ಸಂಬಂಧಪಟ್ಟ ಸಚಿವರ ಗಮನಕ್ಕೆ ತಂದು ಬೇಡಿಕೆ ಈಡೇರಿಸಲು ಪ್ರಯತ್ನಿಸುವೆ’ ಎಂದು ಭರವಸೆ ನೀಡಿದರು.

‘ಕೋವಿಡ್‌ನಿಂದಾಗಿ ಜನ ತಮ್ಮವರನ್ನು ಕಳೆದುಕೊಂಡಿದ್ದಾರೆ. ರಾಜ್ಯದಾದ್ಯಂತ 67 ಮಕ್ಕಳು ತಂದೆ–ತಾಯಿಯನ್ನು ಕಳೆದುಕೊಂಡು ಅನಾಥವಾಗಿದ್ದಾರೆ. ಅಂತಹವರಿಗೆ ಸ್ಪಂದಿಸುವ ಕೆಲಸವನ್ನು ಸರ್ಕಾರ ಮಾಡುತ್ತಿರುವುದು ಶ್ಲಾಘನೀಯ’ ಎಂದರು.

ಸಹಾಯಕ ಕಾರ್ಮಿಕ ಆಯುಕ್ತ (ಪ್ರಭಾರ) ಮಲ್ಲಿಕಾರ್ಜುನ ಜಗೂರ ಮಾತನಾಡಿ, ‘ಲಾಕಡೌನ್‌ ಸಂದರ್ಭದಲ್ಲಿ ಕಟ್ಟಡ ಮತ್ತು ವಲಸೆ ಕಾರ್ಮಿಕರು ತೀವ್ರ ತೊಂದರೆ ಅನುಭವಿಸಿದರು.ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ರಾಜ್ಯದಾದ್ಯಂತ ಕಾರ್ಮಿಕರಿಗೆ ಆಹಾರ ಕಿಟ್‌ಗಳನ್ನು ವಿತರಿಸಲಾಗುತ್ತಿದೆ. ಇದರೊಂದಿಗೆ ಕೋವಿಡ್ ಸುರಕ್ಷಾ ಸಾಧನಗಳ ಕಿಟ್ ಸಹ ನೀಡಲಾಗುತ್ತಿದೆ’ ಎಂದು ಹೇಳಿದರು.

‘ಜಿಲ್ಲೆಯಲ್ಲಿ ನೋಂದಾಯಿತ 84 ಸಾವಿರ ಕಟ್ಟಡ ಹಾಗೂ ಇತರ ನಿರ್ಮಾಣ ಕಾರ್ಮಿಕರಿದ್ದಾರೆ. ಸದ್ಯ 60 ಸಾವಿರ ಕಿಟ್‌ಗಳು ಬಂದಿವೆ. ಉಳಿದ ಕಿಟ್‌ಗಳು ಸದ್ಯದಲ್ಲೇ ಬರಲಿವೆ. ಸ್ಥಳೀಯ ಜನಪ್ರತಿನಿಧಿಗಳು, ಕಾರ್ಮಿಕ ಮುಖಂಡರು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲೂ ಕಿಟ್‌ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

50 ಮಂದಿಗೆ ಕಿಟ್ ವಿತರಿಸಲಾಯಿತು.ಕಾರ್ಮಿಕ ಅಧಿಕಾರಿಮಾರಿಕಾಂಬ ಎಚ್. ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT