ಶುಕ್ರವಾರ, ಜನವರಿ 28, 2022
23 °C

ಮಹಿಳಾ ಸಬಲೀಕರಣಕ್ಕೆ ಕಾಂಗ್ರೆಸ್ ಕೊಡುಗೆ ದೊಡ್ಡದು: ಸಲೀಂ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ‘ಮಹಿಳಾ ಸಬಲೀಕರಣಕ್ಕೆ ಕಾಂಗ್ರೆಸ್ ಕೊಡುಗೆ ದೊಡ್ಡದು. ದೇಶವನ್ನು ಹದಿನಾರು ವರ್ಷ ಆಳಿದ ಇಂದಿರಾ ಗಾಂಧಿ ಅವರು ಮಹಿಳೆಯರ ಅಭಿವೃದ್ಧಿಗಾಗಿ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದು ಸಬಲೀಕರಣಕ್ಕೆ ಬುನಾದಿ ಹಾಕಿದರು. ಹಾಗಾಗಿಯೇ, ಇಂದಿಗೂ ಜನರ ಮನಸ್ಸಿನಲ್ಲಿ ಅವರು ಅಜರಾಮರವಾಗಿ ಉಳಿದಿದ್ದಾರೆ’ ಎಂದು ವಿಧಾನ ಪರಿಷತ್ ಕಾಂಗ್ರೆಸ್ ಅಭ್ಯರ್ಥೀ ಸಲೀಂ ಅಹ್ಮದ್ ಹೇಳಿದರು.

ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ನಡೆದ ಮಹಿಳಾ ಕಾಂಗ್ರೆಸ್ ಸಮಿತಿಯ ಸಭೆಯಲ್ಲಿ ಮಾತನಾಡಿದ ಅವರು, ‘ವಿಧವಾ ವೇತನ, ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿಯನ್ನು ಇಂದಿರಾ ಗಾಂಧಿ ಜಾರಿಗೆ ತಂದರು. ಬ್ಯಾಂಕುಗಳನ್ನು ರಾಷ್ಟ್ರೀಕರಣಗೊಳಿಸುವ ಜೊತೆಗೆ, ಉಳುವವನೇ ಭೂಮಿಯ ಒಡೆಯನನ್ನಾಡಿ ಮಾಡಿದರು. ದೇಶದ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿದರು’ ಎಂದು ನೆನೆದರು.

‘ವಿಧಾನ ಪರಿಷತ್ ಚುನಾವಣೆ ಅಂಗವಾಗಿ, ಸ್ಥಳೀಯ ಸಂಸ್ಥೆಗಳ ಮಹಿಳಾ ಪ್ರತಿನಿಧಿಗಳು ತಮ್ಮ ವ್ಯಾಪ್ತಿಯಲ್ಲಿ ಪ್ರಚಾರ ನಡೆಸಬೇಕು. ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ತಿಳಿಸುವ ಜೊತೆಗೆ, ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಾಗೂ ಆಡಳಿತ ವೈಫಲ್ಯಗಳನ್ನು ಮತದಾರರ ಗಮನಕ್ಕೆ ತರಬೇಕು. ಹೆಚ್ಚಿನ ಮತಗಳ ಅಂತರದಲ್ಲಿ ನನ್ನನ್ನು ಗೆಲ್ಲಿಸಬೇಕು’ ಎಂದು ಮನವಿ ಮಾಡಿದರು.

ಸಂವಿಧಾನ ಉಳಿಸಲು ಹೋರಾಟ:

ಇದೇ ಸಂದರ್ಭದಲ್ಲಿ ನಡೆದ ಸಂವಿಧಾನ ದಿನಾಚರಣೆಯಲ್ಲಿ ಮಾತನಾಡಿದ ಸಲೀಂ, ‘ದೇಶದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದ ಸಂವಿಧಾನ ಬದಲಿಸುವ ಹುನ್ನಾರ ನಡೆಯುತ್ತಿದೆ. ಇದರ ವಿರುದ್ಧ ದನಿ ಎತ್ತಲಿರುವ ಪಕ್ಷವು, ಸಂವಿಧಾನದ ಉಳಿವಿಗಾಗಿ ಹೋರಾಟ ಮಾಡಲಿದೆ. ಸರ್ಕಾರ ಸಂವಿಧಾನವನ್ನು ಯಥಾವತ್ ಜಾರಿ ಮಾಡುವ ಮೂಲಕ, ಡಾ.ಬಿ.ಆರ್. ಅಂಬೇಡ್ಕರ್ ಅವರ ಆಶಯಗಳನ್ನು ಈಡೇರಿಸಬೇಕು’ ಎಂದು ಒತ್ತಾಯಿಸಿದರು.

ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ದೀಪಾ ಗೌರಿ, ಗ್ರಾಮೀಣ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಶಾಂತಮ್ಮ ಗುಜ್ಜಳ, ಮುಖಂಡರಾದ ಅನಿಲಕುಮಾರ ಪಾಟೀಲ, ಅಲ್ತಾಫ ಹಳ್ಳೂರ, ಸ್ವಾತಿ ಮಾಳಗಿ ಹಾಗೂ ಇತರ ಪದಾಧಿಕಾರಿಗಳು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು