ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐ.ಟಿ ದಾಳಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

Last Updated 12 ಅಕ್ಟೋಬರ್ 2019, 13:09 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಶಾಸಕ ಜಿ. ಪರಮೇಶ್ವರ್ ಅವರ ಮನೆ ಹಾಗೂ ಶಿಕ್ಷಣ ಸಂಸ್ಥೆಗಳ ಮೇಲೆ ನಡೆದ ಆದಾಯ ತೆರಿಗೆ ಇಲಾಖೆ ದಾಳಿ ಖಂಡಿಸಿ, ಹುಬ್ಬಳ್ಳಿ–ಧಾರವಾಡ ಮಹಾನಗರ ಕಾಂಗ್ರೆಸ್ ಕಾರ್ಯಕರ್ತರು ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು, ಕಾಂಗ್ರೆಸ್ ನಾಯಕರ ವಿರುದ್ಧ ನಡೆಯುತ್ತಿರುವ ಐ.ಟಿ ಹಾಗೂ ಇ.ಡಿ ದಾಳಿಗಳನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

‘ಕೇಂದ್ರ ಸರ್ಕಾರವು ಆದಾಯ ತೆರಿಗೆ ಇಲಾಖೆ ಸೇರಿದಂತೆ, ಸರ್ಕಾರಿ ಇಲಾಖೆಗಳನ್ನು ತನ್ನ ರಾಜಕೀಯ ಹಿತಾಸಕ್ತಿಗೆ ಬಳಸಿಕೊಳ್ಳುತ್ತಿದೆ. ಎದುರಾಳಿಗಳನ್ನು ರಾಜಕೀಯವಾಗಿ ಎದುರಿಸಲಾಗದೆ ಹಿಂಬಾಗಿಲ ಮೂಲಕ ಇಂತಹ ಕೃತ್ಯಗಳನ್ನು ಮಾಡುತ್ತಿದೆ’ ಎಂದು ಹುಬ್ಬಳ್ಳಿ–ಧಾರವಾಡ ಮಹಾನಗರ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಲ್ತಾಫ ಹಳ್ಳೂರ ಆಕ್ರೋಶ ವ್ಯಕ್ತಪಡಿಸಿದರು.

‘ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ 8 ವರ್ಷ ಮುನ್ನಡೆಸಿರುವ ಜಿ. ಪರಮೇಶ್ವರ್ ಅವರು, ಸಜ್ಜನ ರಾಜಕಾರಣಿ. ಶಿಕ್ಷಣ ಸಂಸ್ಥೆಗಳ ಮೂಲಕ ಸಾಮಾಜಿಕ ಸೇವೆಯನ್ನೂ ಮಾಡಿಕೊಂಡು ಬರುತ್ತಿದ್ದಾರೆ. ಅವರ ಏಳಿಗೆ ಸಹಿಸದೆ ಆದಾಯ ತೆರಿಗೆ ಇಲಾಖೆಯಿಂದ ದಾಳಿ ನಡೆಸಿ, ಮಾನಸಿಕ ಕಿರುಕುಳ ನೀಡಲಾಗುತ್ತಿದೆ. ಇದರಿಂದಾಗಿ ಪರಮೇಶ್ವರ್ ಅವರ ಆ‍ಪ್ತ ಸಹಾಯಕ ರಮೇಶ್ ಆತ್ಮಹತ್ಯೆ ಮಾಡಿಕೊಳ್ಳುವಂತೆ ಮಾಡಿದ್ದಾರೆ’ ಎಂದು ಆರೋಪಿಸಿದರು.

ಮುಖಂಡ ಅನ್ವರ ಮುಧೋಳ ಮಾತನಾಡಿ, ‘ಕಾಂಗ್ರೆಸ್ ಮಟ್ಟ ಹಾಕಲು ಮುಂದಾಗಿರುವ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಈಗಾಗಲೇ ಪಿ. ಚಿದರಂಬರಂ, ಡಿ.ಕೆ. ಶಿವಕುಮಾರ್ ಅವರ ಮೇಲೆ ಇಲ್ಲದ ಆರೋಪ ಹೊರಿಸಿ ಜೈಲಿಗೆ ಕಳಿಸಿದ್ದಾರೆ. ಇದೀಗ ಶಾಸಕ ಜಿ. ಪರಮೇಶ್ವರ್ ಮತ್ತು ಮಾಜಿ ಕೇಂದ್ರ ಸಚಿವರಾದ ಆರ್.ಎಲ್. ಜಾಲಪ್ಪ ಅವರ ಮೇಲೂ ಆದಾಯ ತೆರಿಗೆ ಇಲಾಖೆಯನ್ನು ಛೂ ಬಿಡುವ ಮೂಲಕ, ಸೇಡಿನ ರಾಜಕಾರಣ ಮಾಡುತ್ತಿದ್ದಾರೆ’ ಎಂದರು.

ಮುಖಂಡರಾದ ರಾಜಶೇಖರ ಮೆಣಸಿನಕಾಯಿ, ಶೋಭಾ ಕಮತಕರ, ಮಹೇಶ ದಾಬಡೆ, ವಿರೂಪಾಕ್ಷಿ ಚಿಕ್ಕಮಠ, ಸಿದ್ದು ತೇಜಿ ಹಾಗೂ ಮಹಮದ ಕೂಳೂರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT