ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಕೆಶಿ ಬಂಧನ: ಕಾಂಗ್ರೆಸ್‌ ಪ್ರತಿಭಟನೆ

Last Updated 4 ಸೆಪ್ಟೆಂಬರ್ 2019, 15:14 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಶಾಸಕ ಡಿ.ಕೆ. ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿರುವುದನ್ನು ಖಂಡಿಸಿನಗರದ ಚನ್ನಮ್ಮ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿದ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು, ಬಿಡುಗಡೆ ಮಾಡಿದರು.

ಶಾಸಕ ಪ್ರಸಾದ ಅಬ್ಬಯ್ಯ ಹಾಗೂ ಕಾಂಗ್ರೆಸ್‌ ಮುಖಂಡ ಎ.ಎಂ. ಹಿಂಡಸಗೇರಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾರ್ಯಕರ್ತರು ವಾಹನಗಳನ್ನು ತಡೆದು, ಟೈರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಘೋಷಣೆ ಕೂಗಿದರು. ಬಿಜೆಪಿ ವಿರುದ್ಧ ಮಾತನಾಡುವವರ ಮೇಲೆ ಸೇಡಿನ ರಾಜಕೀಯ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಈ ವೇಳೆ ಮಾತನಾಡಿದ ಶಾಸಕ ಪ್ರಸಾದ ಅಬ್ಬಯ್ಯ, 'ಕೇಂದ್ರ ಸರ್ಕಾರವು ತನಿಖಾ ಸಂಸ್ಥೆಗಳನ್ನು ತನ್ನ ಸ್ವಾರ್ಥಕ್ಕೆ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಬಿಜೆಪಿ ಏಜೆಂಟ್‌ರಂತೆ ಇಡಿ ಅಧಿಕಾರಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ' ಎಂದು ಆರೋಪಿಸಿದರು.

‘ದೇಶದ ಅಭಿವೃದ್ಧಿಗೆ ಗಮನಕೊಡಿ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಸಲಹೆ ನೀಡಿದ್ದಾರೆ. ಆದರೆ, ಬಿಜೆಪಿ ರಾಜಕೀಯ ಮಾಡುವುದರಲ್ಲಿಯೇ ಕಾಲ ಕಳೆಯುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಖಂಡರಾದ ಅಲ್ತಾಫ್ ಹಳ್ಳೂರು, ಅನಿಲಕುಮಾರ ಪಾಟೀಲ, ಮಹೇಂದ್ರ ಸಿಂಘಿ, ಸದಾನಂದ ಡಂಗನವರ, ರಾಜಶೇಖರ ಮೆಣಸಿನಕಾಯಿ ಸೇರಿದಂತೆ ನೂರಾರು ಕಾರ್ಯಕರ್ತರಿದ್ದರು.

ಸಂಚಾರ ದಟ್ಟಣೆ: ಒಂದು ಗಂಟೆಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದ್ದರಿಂದ ಬಸವ ವನದಿಂದ ಚನ್ನಮ್ಮ ವೃತ್ತದ ವರೆಗೆ ವಾಹನಗಳ ಸಂಚಾರ ದಟ್ಟಣೆ ಉಂಟಾಗಿತ್ತು. ದ್ವಿಚಕ್ರ ವಾಹನ ಹೊರತು ಪಡಿಸಿ ಉಳಿದ ಎಲ್ಲ ವಾಹನಗಳ ಮಾರ್ಗ ಬದಲಿಸಿ ಹೋಗಲು ಅವಕಾಶ ಮಾಡಿಕೊಡುವ ಮೂಲಕ ಪೊಲೀಸರು ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT