ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಿಂಗಾಯತ ಧರ್ಮ: ಕಾಂಗ್ರೆಸ್–ಜೆಡಿಎಸ್ ನಿಲುವೇನು?: ಪ್ರಹ್ಲಾದ ಜೋಶಿ

Last Updated 16 ಏಪ್ರಿಲ್ 2019, 12:55 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಪ್ರತ್ಯೇಕ ಲಿಂಗಾಯತ ಧರ್ಮ ವಿಷಯದ ಬಗ್ಗೆ ಕಾಂಗ್ರೆಸ್ ಮತ್ತು ಜೆಡಿಎಸ್ ತಮ್ಮ ನಿಲುವು ಸ್ಪಷ್ಟಪಡಿಸಬೇಕು’ ಎಂದು ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಹೇಳಿದರು.

ಹುಬ್ಬಳ್ಳಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ’ಪ್ರತ್ಯೇಕ ಧರ್ಮಕ್ಕೆ ಸಂಬಂಧಿಸಿದಂತೆ, ಹೋರಾಟದ ಮುಂಚೂಣಿಯಲ್ಲಿದ್ದ ನಾಯಕರ ಹಾಗೂ ಕಾಂಗ್ರೆಸ್‌ ಮುಖಂಡರು ಈಗ ನೀಡುತ್ತಿರುವ ಹೇಳಿಕೆಗಳನ್ನು ಗಮನಿಸಿದರೆ, ಹೋರಾಟದ ಹಿಂದೆ ನಿಜವಾಗಿಯೂ ಒಳ್ಳೆಯ ಉದ್ದೇಶವಿಲ್ಲದಿರುವುದು ಸ್ಪಷ್ಟವಾಗಿದೆ’ ಎಂದರು.

‘ಕಾಂಗ್ರೆಸ್ ಮೊದಲಿನಿಂದಲೂ ಎಡಬಿಡಂಗಿ ಹಾಗೂ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಚುನಾವಣೆ ಹೊತ್ತಿನಲ್ಲಿ ಅದು ಬಹಿರಂಗವಾಗಿದೆ. ಧರ್ಮಕ್ಕೆ ಸಂಬಂಧಿಸಿದ ವಿಷಯವನ್ನು ಧಾರ್ಮಿಕ ಮುಖಂಡರು ನಿರ್ಧರಿಸುತ್ತಾರೆ. ಅದರಲ್ಲಿ ರಾಜಕೀಯ ಪಕ್ಷಗಳು ಮೂಗು ತೂರಿಸಬಾರದು’ ಎಂದು ಹೇಳಿದರು.

ಶಾಸಕ ಜಗದೀಶ ಶೆಟ್ಟರ್ ಮಾತನಾಡಿ, ‘ಧರ್ಮ ಒಡೆಯುವ ಕೆಲಸ ಮಾಡಿದ್ದಕ್ಕೆ ಮತದಾರರು ಹಿಂದಿನ ಚುನಾವಣೆಯಲ್ಲಿ ತಕ್ಕ ಉತ್ತರ ಕೊಟ್ಟಿದ್ದಾರೆ. ಆದರೆ, ಎಂ.ಬಿ. ಪಾಟೀಲರು ಮಾತ್ರ ಇನ್ನೂ ಪಾಠ ಕಲಿತಿಲ್ಲ’ ಎಂದರು.

ಅವರಿಗೇ ಮುಳುವಾಯ್ತು:

‘ಪ್ರತ್ಯೇಕ ಲಿಂಗಾಯತ ಧರ್ಮದ ಹೆಸರಿನಲ್ಲಿ ಜನರ ಭಾವನೆಯೊಂದಿಗೆ ಆಟವಾಡಿದವರಿಗೆ, ಮತದಾರರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿದ್ದಾರೆ. ಈಗ ಮತ್ತೆ ಅದೇ ವಿಷಯ ಪ್ರಸ್ತಾಪಿಸಿದರೆ, ಮತ್ತೆ ಮುಳುವಾಗುವುದರಲ್ಲಿ ಯಾವುದೇ ಅನುಮಾನವಿಲ್ಲ’ ಎಂದು ಶಾಸಕ ಅಮೃತ ದೇಸಾಯಿ ಹೇಳಿದರು.

ಮೂರ್ಖತನದಿಂದ ಜೆಡಿಎಸ್‌ ಸೋಲಲಿದೆ: ಅಮಿತ್ ಶಾ

‘ಜೆಡಿಎಸ್ ತನ್ನ ಮೂರ್ಖತನದಿಂದಿಂದಾಗಿ ತುಮಕೂರು, ಹಾಸನ ಮತ್ತು ಮಂಡ್ಯ ಕ್ಷೇತ್ರಗಳಲ್ಲಿ ಹೀನಾಯವಾಗಿ ಸೋಲು ಅನುಭವಿಸಲಿದೆ’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹುಬ್ಬಳ್ಳಿಯಲ್ಲಿ ಬಿಜೆಪಿ ಮುಖಂಡರೊಂದಿಗೆ ನಡೆಸಿದ ಸಭೆಯಲ್ಲಿ ಹೇಳಿದ್ದಾರೆ.

‘ರಾಷ್ಟ್ರದಾದ್ಯಂತ ಬಿಜೆಪಿಗೆ ಉತ್ತಮ ವಾತಾವರಣ ಇದೆ. ಕರ್ನಾಟಕದಲ್ಲಿ 20ರಿಂದ 22 ಸ್ಥಾನಗಳನ್ನು ಗೆಲ್ಲಲ್ಲಿದ್ದು, ಉತ್ತರ ಕರ್ನಾಟಕ ಭಾಗದ ಕ್ಷೇತ್ರಗಳ ಕಡೆಗೆ ಹೆಚ್ಚು ಗಮನ ಹರಿಸಬೇಕು. ಧಾರವಾಡದಲ್ಲಿ ಗೆಲುವು ನಿಶ್ಚಿತ. ಇಲ್ಲಿ ರಾಷ್ಟ್ರೀಯ ಮುಖಂಡರಿಗೆ ಹೆಚ್ಚಿನ ಪ್ರಚಾರದ ಅಗತ್ಯವಿಲ್ಲ ಎಂಬುದಾಗಿ ಹೇಳಿದರು’ ಎಂದು ಬಿಜೆಪಿ ಮುಖಂಡರು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT