ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ಕೊರೊನಾ ಪತ್ತೆ ಪರೀಕ್ಷಾ ಕೇಂದ್ರ: ಜಗದೀಶ್‌ ಶೆಟ್ಟರ್‌

ಅಧಿಕಾರಿಗಳ ಜೊತೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್‌ ಸಭೆ
Last Updated 26 ಮಾರ್ಚ್ 2020, 12:42 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಕೊರೊನೊ ಸೋಂಕು ಹರಡುವ ತುರ್ತು ಪರಿಸ್ಥಿತಿಯನ್ನು ಎದುರಿಸಲು ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ಕಿಮ್ಸ್‌ನಲ್ಲಿ ಶೀಘ್ರದಲ್ಲಿ ಕೊರೊನೊ ಪತ್ತೆ ಪರೀಕ್ಷಾ ಕೇಂದ್ರ ಆರಂಭಿಸಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್‌ ಹೇಳಿದರು.

ನಗರದ ಸರ್ಕಿಟ್ ಹೌಸ್‍ನಲ್ಲಿ ಬುಧವಾರ ಕೋವಿಡ್‌–19 ಎದುರಿಸಲು ಕೈಗೊಂಡಿರುವ ಅಗತ್ಯ ಕ್ರಮಗಳ ಬಗ್ಗೆ ಅಧಿಕಾರಿಗಳ ಜೊತೆ ಅವರು ಸಭೆ ನಡೆಸಿದರು.

'ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಕಿಮ್ಸ್‌ನಲ್ಲಿ ಕೊರೊನೊಪತ್ತೆ ಪರೀಕ್ಷಾ ಕೇಂದ್ರ ಆರಂಭಿಸುವುದಾಗಿ ತಿಳಿಸಿದ್ದಾರೆ. ಸರ್ಕಾರದ ನಿರ್ದೇಶನದಂತೆ ಫೀವರ್ ಕ್ಲಿನಿಕ್, ಕ್ವಾರೆಂಟೈನ್‌ ಕೇಂದ್ರದಲ್ಲಿ ಉಪಕರಣಗಳನ್ನು ಸಿದ್ಧತೆ ಮಾಡಿಟ್ಟುಕೊಳ್ಳಬೇಕು. ಪ್ರಧಾನಿ ನರೇಂದ್ರ ಮೋದಿ ಅವರು 21 ದಿನ ಮನೆಯಲ್ಲೇ ಇರುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಇದಕ್ಕೆ ಎಲ್ಲರೂ ಸ್ಪಂದಿಸಬೇಕು'ಎಂದು ಕೋರಿದರು.

'ಜನರಿಗೆ ಅಗತ್ಯವಾದ ದಿನಸಿ ಹಾಗೂ ತರಕಾರಿಗಳು ಸುಲಭವಾಗಿ ಸಿಗುವಂತೆ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು. ವರ್ತಕರು ಹಾಗೂ ತರಕಾರಿ ಮಾರಾಟ ಸಂಘಗಳ ಪ್ರತಿನಿಧಿಗಳ ಜೊತೆ ಮಾತನಾಡಿ ಪ್ರತಿ ಬಡಾವಣೆಗಳಿಗೆ ತೆರಳಿ ಮಾರಾಟ ಮಾಡುವಂತೆ ಮನವೊಲಿಸಬೇಕು. ಎರಡು ತಿಂಗಳ ಪಡಿತರ ಹಾಗೂ ಎರಡು ತಿಂಗಳ ವೃದ್ಯಾಪ ವೇತನ ಸೇರಿದಂತೆ ಇನ್ನಿತರ ಸೌಕರ್ಯಗಳನ್ನು ಸರ್ಕಾರದಿಂದ ನೀಡಲಾಗುವುದು‘ ಎಂದರು.

’ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಲ್ಲಿ ಒಟ್ಟು 14 ಫೀವರ್ ಕ್ಲಿನಿಕ್, 11 ಕ್ವಾರೆಂಟೈನ್ ಕೇಂದ್ರ ಹಾಗೂ ಕಿಮ್ಸ್‌ನಲ್ಲಿ ಕೋವಿಡ್‌–19 ಆಸ್ಪತ್ರೆ ತೆರೆಯಲಾಗಿದೆ. ಕಿಮ್ಸ್‌ನ 250 ಹಾಸಿಗೆಗಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಕೋವಿಡ್ ಸೋಂಕಿತರಿಗೆ ಮೀಸಲಿಡಲಾಗಿದೆ. ಅಲ್ಲಿ 35 ವೆಂಟಿಲೇಟರ್‌ಗಳಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ 80 ವೆಂಟಿಲೇಟರ್‌ಗಳು ಲಭ್ಯ ಇವೆ. ಅಗತ್ಯವಿದ್ದರೆ ಅವುಗಳನ್ನೂ ಬಳಸಿಕೊಳ್ಳಲಾಗುವುದು' ಎಂದು ತಿಳಿಸಿದರು.

ಜಿಲ್ಲಾಧಿಕಾರಿ ದೀಪಾ ಚೋಳನ್‌, ಶಾಸಕರಾದ ಅರವಿಂದ ಬೆಲ್ಲದ, ಸಿ.ಎಂ. ನಿಂಬಣ್ಣವರ, ಕುಸಮಾವತಿ ಶಿವಳ್ಳಿ, ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್‌ ಆರ್. ದಿಲೀಪ್, ಜಿಲ್ಲಾ ಪಂಚಾಯ್ತಿ ಸಿಇಒ ಬಿ.ಸಿ.ಸತೀಶ್, ಧಾರವಾಡ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್, ಪಾಲಿಕೆ ಆಯುಕ್ತ ಸುರೇಶ ಇಟ್ನಾಳ, ಉಪವಿಭಾಗಧಿಕಾರಿ ಮಹಮದ್ ಜುಬೇರ್, ಕಿಮ್ಸ್ ನಿರ್ದೇಶಕ ರಾಮಲಿಂಗಪ್ಪ ಅಂತರಟಾನಿ, ಜಿಲ್ಲಾ ಆರೋಗ್ಯ ಅಧಿಕಾರಿ ಯಶವಂತ ಮದೀನಕರ ಪಾಲ್ಗೊಂಡಿದ್ದರು.

ಜಿಲ್ಲಾಡಳಿತದ ಕಾರ್ಯವೈಖರಿಗೆ ಮೆಚ್ಚುಗೆ

ಅಗ್ನಿಶಾಮಕ ಇಲಾಖೆಯಿಂದ ಅವಳಿ ನಗರಗಳಲ್ಲಿ ಪ್ರತ್ಯೇಕವಾಗಿ ಅಗ್ನಿಶಾಮಕ ವಾಹನ ಬಳಸಿ ದೊಡ್ಡ ಪ್ರಮಾಣದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗುತ್ತಿದೆ. ಸೋಡಿಯಂ ಹೈಪೋಕ್ಲೋರೈಡ್ ಮಿಶ್ರಿತ ದ್ರಾವಣ ಸಿಂಪಡಿಸುವುದರಿಂದ ವೈರಾಣು ಹಾಗೂ ಬ್ಯಾಕ್ಟೀರಿಯಾಗಳಿಂದ ಹರಡುವ ಕಾಯಿಲೆ ನಿಯಂತ್ರಿಸಬಹುದಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಪಾಲಿಕೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಶೆಟ್ಟರ್ ಮೆಚ್ಚುಗೆ ವ್ಯಕ್ತಪಡಿಸಿದರು.

ಅವರು ಹಳೇ ಬಸ್‌ ನಿಲ್ದಾಣದಲ್ಲಿ ಕೈಗೊಂಡಿದ್ದ ಸ್ವಚ್ಛತಾ ಕಾರ್ಯ ಪರಿಶೀಲಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿ ’ಜನ ಸ್ವಯಂ ಪ್ರೇರಿತರಾಗಿ ಮನೆಯಲ್ಲಿದ್ದರೆ ಮಾತ್ರ ಸೋಂಕು ಹರಡುವುದನ್ನು ನಿಯಂತ್ರಿಸಬಹುದು. ಇದರಲ್ಲಿ ಸಣ್ಣ ನಿರ್ಲಕ್ಷ್ಯವೂ ಮಾಡಬಾರದು. ಆದ್ದರಿಂದ ಜನ ಪ್ರಜ್ಞಾವಂತಿಕೆಯಿಂದ ನಡೆದುಕೊಳ್ಳಬೇಕು‘ ಎಂದರು.

ಮುಖ್ಯ ಅಗ್ನಿಶಾಮಕ ಅಧಿಕಾರಿ ಈಶ್ವರನಾಯ್ಕ, ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ಶ್ರೀಕಾಂತ, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಚಂದ್ರಶೇರ್, ಹುಬ್ಬಳ್ಳಿ ಶಹರ ತಹಶೀಲ್ದಾರ್‌ ಶಶಿಧರ ಮಾಡ್ಯಾಳ, ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರ್‌ ಪ್ರಕಾಶ್ ನಾಸಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT