ಶನಿವಾರ, ಡಿಸೆಂಬರ್ 7, 2019
22 °C
‘ಉನ್ನತ ಅನುಷ್ಠಾನ ತಾಲ್ಲೂಕು’ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ: ಡಿಸಿ ದೀಪಾ ಚೋಳನ್

‘ಕೊಟ್ಪಾ’ ಅನುಷ್ಠಾನ: ಕುಂದಗೋಳಕ್ಕೆ ಅಗ್ರಸ್ಥಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಧಾರವಾಡ: ‘ಜಿಲ್ಲೆಯ ಕುಂದಗೋಳ ತಾಲ್ಲೂಕು ಕೊಟ್ಪಾ–2003 ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ್ದು, ತಾಲ್ಲೂಕನ್ನು ‘ಉನ್ನತ ಅನುಷ್ಠಾನ ತಾಲ್ಲೂಕು’ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ’ ಎಂದು ಜಿಲ್ಲಾ ತಂಬಾಕು ನಿಯಂತ್ರಣ ಸಮನ್ವಯ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದರು.

ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮದ ತ್ರೈಮಾಸಿಕ ಸಮನ್ವಯ ಸಮಿತಿ ಸಭೆಯನ್ನು ಶನಿವಾರ ಜರುಗಿಸಿ ಮಾತನಾಡಿದ ಅವರು, ‘ತಂಬಾಕು ಉತ್ಪನ್ನಗಳ ಉತ್ಪಾದನೆ, ಸರಬರಾಜು ಹಾಗೂ ಮಾರಾಟದ ಮೇಲೆ ನಿಯಂತ್ರಣ ಹೇರಲು ಜಾರಿಯಾಗಿರುವ ಕೊಟ್ಪಾ–2003 ಕಾಯ್ದೆಯನ್ನು ಜಿಲ್ಲೆಯಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಜಿಲ್ಲೆಯ ಇತರ ಪ್ರದೇಶಗಳಲ್ಲೂ ಈ ಕಾಯ್ದೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

‘ಕೊಟ್ಪಾ ಕಾಯ್ದೆ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ತಂಬಾಕು ತನಿಖಾ ದಳದ ಸದಸ್ಯರಿಗೆ ಗುರುತಿನ ಪತ್ರ ನೀಡಲಾಗುವುದು. ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಸಮನ್ವಯ ಸಮಿತಿ ರಚಿಸಿ, ಕಾಯ್ದೆ ಅನ್ವಯ ಕಾನೂನು ಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವಂತೆ ಮತ್ತು ಬಸ್‌ನಿಲ್ದಾಣ, ಪೊಲೀಸ್ ಆಯುಕ್ತರ ಕಚೇರಿ, ಸರ್ಕಾರಿ ಕಚೇರಿ, ಶಾಲಾ ಕಾಲೇಜು ಆವರಣ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಫಲಕಗಳನ್ನು ಸಾರ್ವಜನಿಕರಿಗೆ ಕಾಣುವಂತೆ ಕಡ್ಡಾಯವಾಗಿ ಅಳವಡಿಸಬೇಕು’ ಎಂದು ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ಸುಜಾತಾ ಹಸವಿಮಠ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ‘ಪ್ರಸಕ್ತ ಸಾಲಿನಲ್ಲಿ ವಿವಿಧ ರೀತಿಯ ತಂಬಾಕು ಸೇವನೆ ಮಾಡುತ್ತಿರುವ 696 ಜನರಿಗೆ ಆಪ್ತ ಸಮಾಲೋಚನೆ ಮಾಡಲಾಗಿದ್ದು, 195 ಜನ ಚಿಕಿತ್ಸೆ ಪಡೆದಿದ್ದಾರೆ. ಒಟ್ಟು 95 ಜನ ತಂಬಾಕು ಸೇವನೆ, 18 ಜನ ಸೀಗರೇಟ್ ಸೇದುವುದನ್ನು ಮತ್ತು 70 ಜನ ಗುಟಕಾ ತಿನ್ನುವುದನ್ನು ಬಿಟ್ಟಿದ್ದಾರೆ. ಸಿಗರೇಟು ಸೇದುವುದರೊಂದಿಗೆ ತಂಬಾಕು ಸೇವನೆ ಮಾಡುತ್ತಿದ್ದ ಏಳು ಜನ ವ್ಯಸನ ಮುಕ್ತರಾಗಿದ್ದಾರೆ’ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಯಶವಂತ ಮದಿನಕರ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಎಸ್.ಎಂ.ಹೊನಕೇರಿ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಶಿವಕುಮಾರ ಮಾನಕರ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಗಜಾನನ ಮನ್ನಿಕೇರಿ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ತನುಜಾ ಕೆ.ಎನ್, ಡಿ.ಸಿ.ಆರ್.ಬಿ.ಯ ಡಿವಾಯ್‌ಎಸ್‌ಪಿ ಗುರು ಮತ್ತೂರ, ರಾಜ್ಯ ತಂಬಾಕು ನಿಯಂತ್ರಣ ಘಟಕದ ವಿಭಾಗೀಯ ಸಂಯೋಜಕ ಮಹಾಂತೇಶ ಉಳ್ಳಾಗಡ್ಡಿ, ಘಟಕದ ಜಿಲ್ಲಾ ಸಲಹೆಗಾರ ಎಂ.ವೈ.ಕಲ್ಲಪ್ಪನವರ, ಸಹಾಯಕ ಔಷಧಿ ನಿಯಂತ್ರಣಾಧಿಕಾರಿ ಮಲ್ಲಿಕಾರ್ಜುನ ಕೆ.ಎಸ್, ಧಾರವಾಡ ತಾಲ್ಲೂಕು ವೈದ್ಯಾಧಿಕಾರಿ ಡಾ.ಅಯ್ಯನಗೌಡ ಪಾಟೀಲ ಇದ್ದರು.

ಪ್ರತಿಕ್ರಿಯಿಸಿ (+)