ಮಂಗಳವಾರ, ಜನವರಿ 31, 2023
27 °C
ಎಐಡಿಎಸ್‌ಒ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ

ಧಾರವಾಡ | ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಒದಗಿಸಲು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಧಾರವಾಡ: ಶೈಕ್ಷಣಿಕ ನಗರಿ ಧಾರವಾಡದಲ್ಲಿ ವಿದ್ಯಾಭ್ಯಾಸಕ್ಕಾಗಿ ಬರುವ ಎಲ್ಲಾ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿ ಎಐಡಿಎಸ್‌ಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ಸೋಮವಾರ ಧರಣಿ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಮಹಾಂತೇಶ ಬೀಳೂರ, ‘ಕರ್ನಾಟಕ ವಿಶ್ವವಿದ್ಯಾಲಯ, ಕೃಷಿ ವಿಶ್ವವಿದ್ಯಾಲಯ, ಐಐಟಿ ಸೇರಿದಂತೆ ಪ್ರತಿಷ್ಠಿತ ವಿಶ್ವವಿದ್ಯಾಲಯಗಳು ಮತ್ತು ಹಲವಾರು ಶಿಕ್ಷಣ ಸಂಸ್ಥೆಗಳನ್ನು ಹೊಂದಿರುವ ಧಾರವಾಡದಲ್ಲಿ ವಸತಿ ಸಮಸ್ಯೆ ತೀವ್ರವಾಗಿ ಭಾದಿಸುತ್ತಿದೆ. ಸರ್ಕಾರ ಮತ್ತು ಸ್ಥಳೀಯ ಆಡಳಿತ ಈ ಕುರಿತು ಗಮನ ಹರಿಸದಿರುವುದು ವಿಪರ್ಯಾಸ’ ಎಂದು ಆರೋಪಿಸಿದರು.

‘ಜಿಲ್ಲೆಯಲ್ಲಿ ಬಿಸಿಎಂ ಹಾಸ್ಟೆಲ್‌ಗಾಗಿ ಪಿಯುಸಿಯಿಂದ ಸ್ನಾತಕೋತ್ತರ ಪದವಿವರೆಗೆ 5,618 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಆದರೆ, 492 ವಿದ್ಯಾರ್ಥಿಗಳಿಗೆ ಮಾತ್ರ ಹಾಸ್ಟೆಲ್‌ ದೊರೆತಿದೆ. ಅರ್ಜಿ ಸಲ್ಲಿಸಿದ 3,252 ಪದವಿ ವಿದ್ಯಾರ್ಥಿಗಳಲ್ಲಿ 320 ವಿದ್ಯಾರ್ಥಿಗಳಿಗೆ ಪ್ರವೇಶ ಲಭಿಸಿದೆ. ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‌ಗಳಲ್ಲಿ ಹಲವರಿಗೆ ಊಟ ಮಾತ್ರ ದೊರೆಯುತ್ತಿದೆ’ ಎಂದು ಅಲವತ್ತುಕೊಂಡರು.

‘ಪದವಿ ತರಗತಿಗಳು ಆರಂಭವಾಗಿ ಎರಡು ತಿಂಗಳು ಕಳೆದಿದೆ. ಆಂತರಿಕ ಪರೀಕ್ಷೆಗಳೂ ಆರಂಭವಾಗಿವೆ. ಆದರೆ, ನಿತ್ಯ ಹಾಸ್ಟೆಲ್ ಪ್ರವೇಶಕ್ಕೆ ಅಲೆದಾಡಬೇಕಿದ್ದು, ತರಗತಿಗೆ ಹಾಜರಿರಲು ಸಾಧ್ಯವಾಗುತ್ತಿಲ್ಲ. ಇದರಿಂದ ಬಡಕುಟುಂಬದ ವಿದ್ಯಾರ್ಥಿಗಳು ವಿದ್ಯಾಭ್ಯಾಸ ತೊರೆಯಲು ಮುಂದಾಗಿದ್ದಾರೆ. ಜಿಲ್ಲಾಧಿಕಾರಿ ಮಧ್ಯಪ್ರವೇಶಿಸಿ ಈ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಮನವಿ ಸ್ವೀಕರಿಸಿದರು. ಸಿಂಧೂ ಕೌದಿ, ಶಶಿಕಲಾ ಮೇಟಿ, ವೀರೇಶ, ಹರೀಶ, ನರೇಶ, ರಮೇಶ, ಪೂರ್ಣಿಮಾ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.