ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಘಟಗಿ | ಎರಡೇ ದಿನದಲ್ಲಿ ಜಿನ್ನೂರು ಕೊಲೆ ಪ್ರಕರಣ ಭೇದಿಸಿದ ಪೊಲೀಸರು

Published 5 ಜೂನ್ 2023, 6:54 IST
Last Updated 5 ಜೂನ್ 2023, 6:54 IST
ಅಕ್ಷರ ಗಾತ್ರ

ಕಲಘಟಗಿ: ತಾಲ್ಲೂಕಿನ ಜಿನ್ನೂರ ಗ್ರಾಮದಲ್ಲಿ ನಡೆದಿದ್ದ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಆರೋಪಿಗಳನ್ನು ಕಲಘಟಗಿ ಪೊಲೀಸರು ಬಂಧಿಸಿದ್ದಾರೆ.

ಜಿನ್ನೂರಿನ ನಿಂಗಪ್ಪ ಬೂದಪ್ಪ ನವಲೂರು (33) ಗ್ರಾಮದ ಹೊರವಲಯದ ಹೊಲದ ಮನೆಯಲ್ಲಿ ಗುರುವಾರ ರಾತ್ರಿ ಕೊಲೆಯಾಗಿದ್ದರು. ಎರಡೇ ದಿನದಲ್ಲಿ ಆರೋಪಿಗಳನ್ನು ಪತ್ತೆ ಹಚ್ಚಿ, ಬಂಧಿಸುವಲ್ಲಿ ಸಿಪಿಐ ಶ್ರೀಶೈಲ ಕೌಜಲಗಿ ನೇತೃತ್ವದ ತಂಡ ಯಶಸ್ವಿಯಾಗಿದೆ. ಮಹಿಳೆಯೊಬ್ಬರ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದೇ ನಿಂಗಪ್ಪ ಕೊಲೆಗೆ ಕಾರಣ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ಅವರು  ಭಾನುವಾರ  ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಜೂನ್ 7ರಂದು ಯುವಕನ ಮದುವೆಗೆ ಕುಟುಂಬದವರು ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದರು. ಹಸೆಮಣೆ ಏರಬೇಕಿದ್ದವನನ್ನು ಗುರುವಾರ ರಾತ್ರಿ ಆರೋಪಿಗಳು ಕೊಲೆ ಮಾಡಿದ್ದರು. ಹೊಲದ ಮನೆಯಲ್ಲಿ ಮಲಗಿದಾಗ ಕಣ್ಣಿಗೆ ಕಾರದ ಪುಡಿ ಎರಚಿ, ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದರು ಎಂದರು.

ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ ಎಂದರು.

ಕಲಘಟಗಿ ಪೊಲೀಸ್ ಠಾಣೆಗೆ ಭೇಟಿ ನೀಡಿದ ಅವರು, ಪೊಲೀಸರ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿ ಬಹುಮಾನ ಘೋಷಿಸಿದರು.

ವೃದ್ಧೆ ಕೊಲೆ ಪ್ರಕರಣದ ತನಿಖೆ: ಆಲದಕಟ್ಟಿ ಗ್ರಾಮದ ಹೊರ ವಲಯದಲ್ಲಿ ನಡೆದ ವೃದ್ಧೆಯ ಕೊಲೆ ಪ್ರಕರಣ ತನಿಖೆ ಹಂತದಲ್ಲಿದೆ. ಆರೋಪಿಗಳ ಪತ್ತೆಗಾಗಿ ಪೊಲೀಸರ ತಂಡ ರಚಿಸಲಾಗಿದೆ. ಶೀಘ್ರವೇ ಬಂಧಿಸಲಾಗುವುದು ಎಂದು ಎಸ್‌.ಪಿ ಜಗಲಾಸರ ತಿಳಿಸಿದರು.

ಪಟ್ಟಣದಲ್ಲಿ ನಡೆಯುವ ವಾರದ ಸಂತೆಯಲ್ಲಿ ಕಿಸೆಗಳ್ಳರ ಹಾವಳಿ ತಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಸಿಪಿಐ ಶ್ರೀಶೈಲ ಕೌಜಲಗಿ ಹಾಗೂ ಪೊಲೀಸ್ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT