ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಅಧಿಕಾರವೆಂದು ಬೀಗಬೇಡಿ; ಜನರಿಗೆ ತಲೆಬಾಗಿ’

ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಗೆದ್ದ ಬಿಜೆಪಿ ಬೆಂಬಲಿತ ಸದಸ್ಯರಿಗೆ ಅಭಿನಂದನಾ ಸಮಾರಂಭ
Last Updated 10 ಜನವರಿ 2021, 15:05 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಅಧಿಕಾರಸಿಕ್ಕಿದೆಯೆಂದುಬೀಗದೆ ಅದನ್ನು ಸಮರ್ಥವಾಗಿ ಬಳಸಿಕೊಂಡು ಗ್ರಾಮಗಳನ್ನು ಅಭಿವೃದ್ಧಿ ಮಾಡಬೇಕು. ಅಧಿಕಾರದ ಮದದಲ್ಲಿ ಜನರನ್ನು ಕಡೆಗಣಿಸಿದರೆ ಮುಂದಿನ ಚುನಾವಣೆಯಲ್ಲಿ ಅವರೇ ಪಾಠ ಕಲಿಸುತ್ತಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಗ್ರಾಮ ಪಂಚಾಯ್ತಿ ಸದಸ್ಯರಿಗೆ ಕಿವಿಮಾತು ಹೇಳಿದರು.

ನಗರದಲ್ಲಿ ಭಾನುವಾರ ಬಿಜೆಪಿ ಧಾರವಾಡ ಜಿಲ್ಲಾ ಗ್ರಾಮಾಂತರ ಘಟಕ ಹಮ್ಮಿಕೊಂಡಿದ್ದಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಗೆದ್ದ ಬಿಜೆಪಿ ಬೆಂಬಲಿತ ಸದಸ್ಯರಿಗೆ ಅಭಿನಂದನಾ ಸಮಾರಂಭ ಜನಸೇವಕ್‌ ಸಮಾವೇಶದಲ್ಲಿ ಅವರು ಮಾತನಾಡಿದರು.

‘ಅನೇಕ ಕಡೆ ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದವರೂ ಗ್ರಾಮ ಪಂಚಾಯ್ತಿ ಚುನಾವಣೆಗೆ ಸ್ಪರ್ಧಿಸಿದ್ದರು. ಹಳ್ಳಿಗಳಿಂದಲೇ ಅಭಿವೃದ್ಧಿ ಎಂಬುದು ಎಲ್ಲರಿಗೂ ಮನದಟ್ಟಾಗಿದೆ. ನಿಮಗೆ ಸಿಕ್ಕ ಅವಕಾಶ ಸರಿಯಾಗಿ ಬಳಸಿಕೊಂಡರೆ ಪಕ್ಷದ ಸಾಮಾನ್ಯ ಕಾರ್ಯಕರ್ತ ಕೂಡ ಸಂಸತ್ತಿಗೆ ಹೋಗಬಹುದು. ಸಾರ್ವಜನಿಕ ಬದುಕಿನಲ್ಲಿ ನಾವು ಸೌಜನ್ಯದಿಂದ ಇದ್ದಷ್ಟು ಜನ ನಮ್ಮನ್ನು ಪ್ರೀತಿಸುತ್ತಾರೆ. ಜನ ಕೊಟ್ಟ ಈ ಗೌರವವನ್ನು ಉಳಿಸಿಕೊಂಡು ಹೋಗುವ ಜವಾಬ್ದಾರಿ ನಮ್ಮ ಮೇಲಿದೆ’ ಎಂದರು.

‘ಗ್ರಾಮಗಳಲ್ಲಿ ಶೌಚಾಲಯಗಳನ್ನು ನಿರ್ಮಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ₹61,500 ಕೋಟಿ ಕೊಟ್ಟಿದೆ. ಶುದ್ಧ ಕುಡಿಯುವ ನೀರು ಒದಗಿಸಲು ಯೋಜನೆ ರೂಪಿಸಿದೆ. ಗ್ರಾಮ ಪಂಚಾಯ್ತಿ ಸದಸ್ಯರು ಜನರಿಗೆ ಶುದ್ಧ ನೀರು ಕೊಟ್ಟರೆ, ಅವರು ನಮಗೆ ಪನ್ನೀರು ಕೊಡುತ್ತಾರೆ. ಸಿಕ್ಕ ಅಧಿಕಾರವನ್ನು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಮಾತನಾಡಿ ‘ನರೇಂದ್ರ ಮೋದಿ ಗುಡಿ ಕೈಗಾರಿಕೆಗಳಿಗೆ, ಕಂಬಾರರು, ಕುಂಬಾರರು, ಚಮ್ಮಾರರಿಗೆ ಉತ್ತೇಜನ ನೀಡುತ್ತಿದ್ದಾರೆ. ಇದರಿಂದ ಮಹಾತ್ಮ ಗಾಂಧೀಜಿ ಅವರ ರಾಮರಾಜ್ಯ ಮತ್ತು ಗ್ರಾಮ ಸ್ವರಾಜ್ಯದ ಕನಸು ಈಗ ಈಡೇರುತ್ತಿದೆ. ಗ್ರಾಮ ಪಂಚಾಯ್ತಿಗಳಿಗೆ ಸ್ಥಳೀಯವಾಗಿಯೇ ಉದ್ಯೋಗ ಸೃಷ್ಟಿಸಲು ಅವಕಾಶಗಳಿವೆ. ಪಂಚಾಯ್ತಿಗಳಿಂದಲೇ ಸಂಕೀರ್ಣ ನಿರ್ಮಿಸಿ ಕಾಯಂ ಆಗಿ ಆದಾಯ ಬರುವಂತೆ ಮಾಡಿದರೆ ಅಭಿವೃದ್ಧಿಗೆ ಹಣವೂ ಲಭಿಸುತ್ತದೆ’ ಎಂದು ಸಲಹೆ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್‌ ‘ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಿದ್ದಕ್ಕೆ ಜಿಲ್ಲೆಯಲ್ಲಿ ನಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಅಧಿಕ ಸಂಖ್ಯೆಯಲ್ಲಿ ಗೆದ್ದಿದ್ದಾರೆ. ಮುಂಬರುವ ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯ್ತಿ ಚುನಾವಣೆಗೆ ಇದರಿಂದ ಅನುಕೂಲವಾಗಲಿದೆ’ಎಂದರು.

ವಸತಿ ಸಚಿವ ವಿ. ಸೋಮಣ್ಣ ಮಾತನಾಡಿ ‘ಸರ್ಕಾರ ನೀಡುವ ಸೌಲಭ್ಯಗಳನ್ನು ಫಲಾನುಭವಿಗಳಿಗೆ ತಲುಪಿಸುವ ಜವಾಬ್ದಾರಿ ಗ್ರಾಮ ಪಂಚಾಯ್ತಿ ಸದಸ್ಯರದ್ದು. ಗ್ರಾ.ಪಂ.ಗೆ ಹೆಬ್ಬಟ್ಟಿನ ಅಧ್ಯಕ್ಷರಾಗಬಾರದು.ಪಿಡಿಒಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬೇಕು. 15ನೇ ಹಣಕಾಸು ಯೋಜನೆಯಲ್ಲಿ ಗ್ರಾ.ಪಂ.ಗಳಿಗೆ ಬರುವ ₹1 ಕೋಟಿಯನ್ನು ಸದ್ಬಳಕೆ ಮಾಡಿಕೊಳ್ಳಬೇಕು.ದೇಶವನ್ನು ಬಯಲು ಶೌಚ ಮುಕ್ತ ಮಾಡಬೇಕು ಎನ್ನುವ ನರೇಂದ್ರ ಮೋದಿ ಆಸೆಗೆ ಕೈ ಜೋಡಿಸಬೇಕು’ ಎಂದರು.

ಶಾಸಕರಾದ ಸಿ.ಎಂ. ನಿಂಬಣ್ಣನವರ, ಶಂಕರಪಾಟೀಲ ಮುನೇನಕೊಪ್ಪ, ಅಮೃತ ದೇಸಾಯಿ, ದುರ್ಯೋಧನ ಐಹೊಳೆ,ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎನ್‌. ರವಿಕುಮಾರ್, ಮಹೇಶ ಟೆಂಗಿನಕಾಯಿ, ವಿಧಾನಪರಿಷತ್‌ ಸದಸ್ಯ ಎಸ್‌.ವಿ. ಸಂಕನೂರ, ಮುಖಂಡರಾದ ತಿಪ್ಪರಾಜ ಹವಾಲ್ದಾರ್‌, ಎಸ್‌.ಐ. ಚಿಕ್ಕನಗೌಡ್ರು, ಸೀಮಾ ಮಸೂತಿ, ಸದಾನಂದ ಚಿಂತಾಮಣಿ, ತುಳಸಿ ಮುನಗೌಡರ, ಲಿಂಗರಾಜ ಪಾಟೀಲ ಸೇರಿದಂತೆ ವಿವಿಧ ನಾಯಕರು ಇದ್ದರು. ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಗೆಲುವು ಪಡೆದ ಬಿಜೆಪಿ ಬೆಂಬಲಿತ ಸದಸ್ಯರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT