ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ | ದಸರಾ ಹಬ್ಬ: ವಾಯವ್ಯ ಸಾರಿಗೆಯಿಂದ 500 ವಿಶೇಷ ಬಸ್ ವ್ಯವಸ್ಥೆ

Published 15 ಅಕ್ಟೋಬರ್ 2023, 16:20 IST
Last Updated 15 ಅಕ್ಟೋಬರ್ 2023, 16:20 IST
ಅಕ್ಷರ ಗಾತ್ರ

ಹುಬ್ಬಳ್ಳಿ: ದಸರಾ ಹಬ್ಬಕ್ಕೆ ರಾಜ್ಯ ಹಾಗೂ ಹೊರ ರಾಜ್ಯಗಳ ವಿವಿಧ ಸ್ಥಳಗಳಿಂದ ಆಗಮಿಸುವ ಹಾಗೂ ಹಬ್ಬ ಮುಗಿಸಿಕೊಂಡು ಹಿಂದಿರುಗುವ ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ 500ಕ್ಕೂ ಹೆಚ್ಚು ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.

ಅ.21ರಂದು ವಾರಾಂತ್ಯ ಶನಿವಾರ, 22 ಹಾಗೂ 23 ರಂದು ಮಹಾನವಮಿ, ಆಯುಧಪೂಜೆ ಹಾಗೂ 24ರಂದು ವಿಜಯದಶಮಿ ಇದೆ. ಹಬ್ಬ ಆಚರಿಸಲು ಅ. 20ರಂದು ಶುಕ್ರವಾರ ಮತ್ತು 21 ರಂದು ಶನಿವಾರ ಬೆಂಗಳೂರು, ಮಂಗಳೂರು, ಗೋವಾ, ಮಹಾರಾಷ್ಟ್ರದ ಪುಣೆ ಸೇರಿದಂತೆ ರಾಜ್ಯದ ಮತ್ತು ನೆರೆಯ ರಾಜ್ಯಗಳ ವಿವಿಧ ಭಾಗಗಳಿಂದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಸ್ವಂತ ಊರುಗಳಿಗೆ ಬರುವ ನಿರೀಕ್ಷೆ ಇದೆ.

ಅ.20, 21 ಹಾಗೂ 22ರಂದು ಬೆಂಗಳೂರು, ಮಂಗಳೂರು, ಪುಣೆ, ಗೋವಾ ಮತ್ತಿತರ ಸ್ಥಳಗಳಿಂದ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಚಿಕ್ಕೋಡಿ, ಉತ್ತರ ಕನ್ನಡ, ಹಾವೇರಿ, ಬಾಗಲಕೋಟೆ ಮತ್ತಿತರ ಪ್ರಮುಖ ಸ್ಥಳಗಳಿಗೆ ಹೆಚ್ಚುವರಿ ಬಸ್ ಗಳನ್ನು ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಸ್ಥಳೀಯ ಬಸ್ ನಿಲ್ದಾಣಗಳಿಂದ ಜಿಲ್ಲೆಯೊಳಗೆ ಹಾಗೂ ನೆರೆಯ ಜಿಲ್ಲೆಗಳಿಗೆ ಪ್ರಯಾಣಿಕರ ದಟ್ಟಣೆಗೆ ತಕ್ಕಂತೆ ಹೆಚ್ಚುವರಿ ಬಸ್‌ಗಳನ್ನು ಓಡಿಸಲಾಗುತ್ತದೆ. ಇದಕ್ಕಾಗಿ ಮಲ್ಟಿ ಅ್ಯಕ್ಸಲ್ ವೋಲ್ವೊ, ಸ್ಲೀಪರ್, ರಾಜಹಂಸ  ಮುಂತಾದ 50  ಐಶಾರಾಮಿ ಬಸ್‌ಗಳು ಹಾಗೂ 200 ವೇಗದೂತ ಸಾರಿಗೆಗಳು ಸೇರಿದಂತೆ 250ಕ್ಕೂ ಹೆಚ್ಚು ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆ ಮಾಡಲು ಯೋಜಿಸಲಾಗಿದೆ.

ಹಬ್ಬ ಮುಗಿಸಿಕೊಂಡು ಸ್ವಂತ ಊರುಗಳಿಂದ ಹಿಂದಿರುವ ಪ್ರಯಾಣಿಕರ ಅನುಕೂಲಕ್ಕಾಗಿ ಅ.24 ಹಾಗೂ 25ರಂದು ಸಂಸ್ಥೆಯ ವ್ಯಾಪ್ತಿಯ ಪ್ರಮುಖ ಬಸ್ ನಿಲ್ದಾಣಗಳಿಂದ ಬೆಂಗಳೂರು, ಮಂಗಳೂರು, ಗೋವಾ, ಮಹಾರಾಷ್ಟ್ರದ ಪುಣೆ ಸೇರಿದಂತೆ ರಾಜ್ಯದ ಮತ್ತು ನೆರೆಯ ರಾಜ್ಯಗಳ ವಿವಿಧ ಸ್ಥಳಗಳಿಗೆ ಜನದಟ್ಟಣೆಗೆ ಅನುಗುಣವಾಗಿ 250 ಕ್ಕೂ ಹೆಚ್ಚು ವಿಶೇಷ ಬಸ್‌ಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ.

ಮುಂಗಡ ಬುಕ್ಕಿಂಗ್ ರಿಯಾಯಿತಿ: ಸಂಸ್ಥೆಯ ವೆಬ್ ಸೈಟ್  www.ksrtc.in ಅಥವಾ KSRTC Mobile App  ಅಧಿಕೃತ ಫ್ರಾಂಚೈಸಿಗಳು ಹಾಗೂ ಪ್ರಮುಖ ಬಸ್ ನಿಲ್ದಾಣಗಳಲ್ಲಿರುವ ಟಿಕೆಟ್ ಕೌಂಟರ್‌ಗಳಲ್ಲಿ ಮುಂಗಡ ಟಿಕೆಟ್ ಬುಕ್ಕಿಂಗ್ ಮಾಡಲು ಅವಕಾಶ ಕಲ್ಪಿಸಲಾಗಿದೆ. 

ನಾಲ್ಕು ಅಥವಾ ಹೆಚ್ಚು ಆಸನಗಳನ್ನು ಒಂದೇ ಟಿಕೆಟ್‌ನಲ್ಲಿ ಕಾಯ್ದಿರಿಸಿದರೆ ಪ್ರಯಾಣ ದರದಲ್ಲಿ ಶೇ 5ರಷ್ಟು ರಿಯಾಯಿತಿ ನೀಡಲಾಗುತ್ತದೆ. ಹೋಗುವ ಹಾಗೂ ಬರುವ ಪ್ರಯಾಣಕ್ಕೆ ಒಂದೇ ಟಿಕೆಟ್ ಪಡೆದರೆ ಹಿಂದಿರುಗುವ ಪ್ರಯಾಣ ದರದಲ್ಲಿ ಶೇ 10ರಷ್ಟು ರಿಯಾಯಿತಿ ನೀಡಲಾಗುತ್ತದೆ  ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT