ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರವಾಡ ಕ್ಷೇತ್ರ: ಮತಗಟ್ಟೆ ಅಧಿಕಾರಿಗಳಿಗೆ ಪರಿಸರ ಸ್ನೇಹಿ ಸಾಮಗ್ರಿ

Last Updated 22 ಏಪ್ರಿಲ್ 2019, 12:24 IST
ಅಕ್ಷರ ಗಾತ್ರ

ಧಾರವಾಡ: ಲೋಕಸಭಾ ಚುನಾವಣೆ ಧಾರವಾಡ ಕ್ಷೇತ್ರದ ಮತಗಟ್ಟೆ ಸಿಬ್ಬಂದಿಗೆ ಮತ ಯಂತ್ರಗಳು ಹಾಗೂ ಚುನಾವಣಾ ಸಾಮಾಗ್ರಿಗಳನ್ನುವಿತರಿಸುವ ಮಸ್ಟರಿಂಗ್ ಕಾರ್ಯ ನಗರದ ಆರ್‌ಎಲ್‌ಎಸ್‌ ಪದವಿಪೂರ್ವ ಕಾಲೇಜು ಮತ್ತು ಬಾಸೆಲ್ ಮಿಷನ್ ಇಂಗ್ಲಿಷ್ ಮಾಧ್ಯಮ ಶಾಲೆ ಆವರಣದಲ್ಲಿ ಸೋಮವಾರ ಜರುಗಿತು.

ಈ ಬಾರಿಯ ಚುನಾವಣೆಯಲ್ಲಿ ಮತಗಟ್ಟೆಗೆ ಸಾಗಿಸಬೇಕಾದ ಸಾಮಗ್ರಿಗಳಲ್ಲಿ ಪ್ಲಾಸ್ಟಿಕ್‌ ಬದಲು ಬಟ್ಟೆಯ ಚೀಲಗಳನ್ನು, ಪೇಪರ್ ಕವರ್‌ಗಳನ್ನು ನಿಡುವ ಮೂಲಕ ಪರಿಸರ ಸ್ನೇಹಿ ಚುನಾವಣೆಗೆ ಒತ್ತು ನೀಡಲಾಗಿತ್ತು.

ಮಸ್ಟರಿಂಗ್ ಕಾರ್ಯ ನಡೆಯುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ದೀಪಾ ಚೋಳನ್ ವಿವರ ಪಡೆದರು. ಚುನಾವಣಾ ಸಾಮಗ್ರಿಗಳನ್ನು ಜೋಡಿಸಿಕೊಳ್ಳಲು ಸಿಬ್ಬಂದಿಗೆ ಕೊಠಡಿಗಳಲ್ಲಿ ಅವಕಾಶ ಕಲ್ಪಿಸಲಾಗಿತ್ತು. ಈ ಕೊಠಡಿಗಳಿಗೆ ಭೇಟಿ ನೀಡಿದ ಅವರು ಮತಗಟ್ಟೆ ಅಧಿಕಾರಿ, ಸಿಬ್ಬಂದಿಯೊಂದಿಗೆ ಮಾತನಾಡಿದರು. ಯಾವುದೇ ಆತಂಕವಿಲ್ಲದೆ, ದೈರ್ಯದಿಂದ ಮತ್ತು ಪ್ರಾಮಾಣಿಕತೆಯಿಂದ ಚುನಾವಣಾ ಕರ್ತವ್ಯ ನಿರ್ವಹಿಸುವಂತೆ ನೈತಿಕ ಸ್ಥೈರ್ಯ ತುಂಬಿದರು.

ಪ್ರತಿ ಮತಗಟ್ಟೆಗಳಿಗೆ ಮತಗಟ್ಟೆ ಅಧಿಕಾರಿ, ಸಹಾಯಕ ಮತಗಟ್ಟೆ ಅಧಿಕಾರಿ, ಮತದಾನ ಸಹಾಯಕರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಸೋಮವಾರ ಬೆಳಿಗ್ಗೆ 6ರಿಂದಲೇ ಈ ಎರಡು ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡವರುಒಬ್ಬೊಬ್ಬರಾಗಿ ಬರಲಾರಂಭಿಸಿದರು.ಮತದಾನ ಪ್ರಕ್ರಿಯೆಗೆ ತೆರಳುವ ಅಧಿಕಾರಿ, ಸಿಬ್ಬಂದಿ ಹಾಗೂ ಪೊಲೀಸರನ್ನು ಕರೆದುಕೊಂಡು ಹೋಗಲು ಬಸ್ ಹಾಗೂ ಜೀಪ್‍ಗಳು ಕಾಲೇಜು ಆವರಣದಲ್ಲಿ ಸಾಲಾಗಿ ಜಮಾವಣೆಗೊಂಡಿದ್ದವು.

ಧಾರವಾಡ ಜಿಲ್ಲೆಯಾದ್ಯಂತ ಇದಕ್ಕಾಗಿ 363 ಮಾರ್ಗಗಳನ್ನು ಗುರುತಿಸಲಾಗಿದೆ. 180 ಬಸ್‍ಗಳು, 184 ಮ್ಯಾಕ್ಸಿಕ್ಯಾಬ್, 167 ಜೀಪ್‍ ಹಾಗೂ 21 ಇತರ ವಾಹನಗಳು ಸೇರಿ ಒಟ್ಟು 552 ವಾಹನಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಎಲ್ಲಾ ವಾಹನಗಳಿಗೆ ಜಿಪಿಎಸ್ ಅಳವಡಿಸಲಾಗಿದೆ.

ಕಾಲೇಜು ಆವರಣದಲ್ಲಿ ಅಧಿಕಾರಿ, ಸಿಬ್ಬಂದಿಗಳಿಗೆ ತಾವು ತೆರಳಬೇಕಿರುವ ಮತಗಟ್ಟೆಯ ವಿವರ ಹಾಗೂ ಬಸ್ ಗಳ ವಿವರವನ್ನು ಧ್ವನಿವರ್ಧಕ ಮೂಲಕ ತಿಳಿಸುವ ವ್ಯವಸ್ಥೆ ಮಾಡಲಾಗಿತ್ತು. ಇನ್ನೊಂದೆಡೆ, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳಿಗೆ ಚುನಾವಣಾ ಸಾಮಗ್ರಿ, ಇವಿಎಂ ಯಂತ್ರಗಳ ಪೆಟ್ಟಿಗೆ, ವಿವಿ ಪ್ಯಾಟ್ ಯಂತ್ರದ ಪೆಟ್ಟಿಗೆ ಹಾಗೂ ವಿಶೇಷ ಕಿಟ್ ಬ್ಯಾಗ್ ಅನ್ನು ವಿತರಿಸಲು ಸೆಕ್ಟರ್‌ವಾರು ಕೊಠಡಿಗಳನ್ನು ಸ್ಥಾಪಿಸಲಾಗಿತ್ತು.

ಅನಿವಾರ್ಯ ಕಾರಣಗಳಿಗಾಗಿ ಕರ್ತವ್ಯದಲ್ಲಿ ಬದಲಾವಣೆ ಬಯಸಿದವರಿಗೂ, ಇದಕ್ಕಾಗಿ ಪ್ರತ್ಯೇಕ ವ್ಯವಸ್ಥೆ ಕೈಗೊಳ್ಳಲಾಗಿತ್ತು. ಪರ್ಯಾಯವಾಗಿ ಕಾಯ್ದರಿಸಿದ ಸಿಬ್ಬಂದಿಗಳಿಗೆ ಕರ್ತವ್ಯ ನಿಯೋಜಿಸುವ ಕಾರ್ಯವೂ ವ್ಯವಸ್ಥಿತವಾಗಿತ್ತು. ಚುನಾವಣಾ ಕರ್ತವ್ಯಕ್ಕೆ ತೆರಳಲು ಆಗಮಿಸಿದ್ದ ಅಧಿಕಾರಿ, ಸಿಬ್ಬಂದಿಗಳಿಗೆ ಕಾಲೇಜು ಆವರಣದಲ್ಲಿ ಕುಡಿಯುವ ನೀರು, ನೆರಳಿನ ವ್ಯವಸ್ಥೆ ಹಾಗೂ ಉಪಹಾರದ ವ್ಯವಸ್ಥೆ ಕೈಗೊಳ್ಳಲಾಯಿತು. ಮತಗಟ್ಟೆಗಳತ್ತ ತೆರಳುವ ಮುನ್ನ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿತ್ತು.ಮತದಾನ ಕಾರ್ಯಕ್ಕೆ ನೇಮಕಗೊಂಡಿರುವ ಹಲವು ಅಧಿಕಾರಿ, ಸಿಬ್ಬಂದಿಗಳೂ ಕೂಡ ಮಸ್ಟರಿಂಗ್ ಕಾರ್ಯಕ್ಕೆ ಕೈಗೊಂಡ ವ್ಯವಸ್ಥೆ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು.

ಹಾಗೆಯೇ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡ ಪೊಲೀಸರು ತಮಗೆ ನೀಡಿದ ಕಿಟ್‌ಗಳೊಂದಿಗೆ ಸೂಚಿಸಿದ ಮತಗಟ್ಟೆಗಳಿಗೆ ನಿಯೋಜನೆಗೊಂಡ ಬಸ್ಸುಗಳನ್ನು ಏರಿ ಹೊರಟರು.

ಧಾರವಾಡ ಸಹಾಯಕ ಚುನಾವಣಾಧಿಕಾರಿಯೂ ಆಗಿರುವ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸುರೇಶ ಇಟ್ನಾಳ, ಉಪವಿಭಾಗಾಧಿಕಾರಿ ಮಹ್ಮದ್ ಜುಬೇರ್ ಅವರು ಮಸ್ಟರಿಂಗ್ ಕಾರ್ಯದ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT