ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಧ್ಯವಾಗದ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಪದ್ಧತಿ ನಿರ್ಮೂಲನೆ: ಎಂ.ಶಿವಣ್ಣ ಬೇಸರ

ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ.ಶಿವಣ್ಣ ಬೇಸರ
Last Updated 23 ಜೂನ್ 2021, 14:00 IST
ಅಕ್ಷರ ಗಾತ್ರ

ಧಾರವಾಡ: ‘ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಪದ್ಧತಿ ನಿರ್ಮೂಲನೆಗಾಗಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯ್ತಿ ಸಿಇಒ, ಗ್ರಾಮ ಮಟ್ಟದಲ್ಲಿ ಗ್ರಾಮ ಪಂಚಾಯ್ತಿ ಪಿಡಿಒಗಳು ಕಾರ್ಯ ಪ್ರವೃತ್ತರಾಗಬೇಕು. ಈ ಬಗ್ಗೆ ಸಾಕಷ್ಟು ಮನವರಿಕೆ ಮಾಡಿದರೂ ಈ ಪದ್ಧತಿ ನಿರ್ಮೂಲನೆ ಸಾಧ್ಯವಾಗುತ್ತಿಲ್ಲ’ ಎಂದು ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ. ಶಿವಣ್ಣ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪೌರ ಕಾರ್ಮಿಕರಿಗೆ ಸರಿಯಾದ ಸೌಲಭ್ಯಗಳು ದೊರೆಯುತ್ತಿಲ್ಲ ಎಂಬ ಬಗ್ಗೆ ಸಾಕಷ್ಟು ದೂರುಗಳು ಆಯೋಗಕ್ಕೆ ಬಂದಿದ್ದವು. ಅದರಂತೆ ಪಾಲಿಕೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೌಲಭ್ಯ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪೌರಕಾರ್ಮಿಕರಿಗೆ ಇನ್ನೂ ಒಂದು ತಿಂಗಳಲ್ಲಿ ಸಮವಸ್ತ್ರಗಳನ್ನು ಪೂರೈಸುವುದಾಗಿ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ. ಇಷ್ಟು ದಿನಗಳ ಕಾಲ ಪೌರ ಕಾರ್ಮಿಕರಿಗೆ ನಿತ್ಯ ₹20ರಲ್ಲಿ ಉಪಹಾರ ಪೂರೈಕೆ ಮಾಡಲಾಗುತ್ತಿದ್ದು, ಆ ದರವನ್ನು ₹50ಕ್ಕೆ ಹೆಚ್ಚಿಸುವಂತೆ ಆಯುಕ್ತರಿಗೆ ಸೂಚಿಸಲಾಗಿದೆ’ ಎಂದರು.

ರಾಜ್ಯದಾದ್ಯಂತ ಪೌರ ಕಾರ್ಮಿಕರು ಬೆಳಿಗ್ಗೆ 6ಕ್ಕೆ ಕೆಲಸ ಮಾಡಲು ಬಂದರೆ ಮಧ್ಯಾಹ್ನ 2ರವರೆಗೆ ಕೆಲಸ ಮಾಡುತ್ತಾರೆ. ಹೀಗಾಗಿ ವಲಯ ಕೇಂದ್ರಗಳಲ್ಲಿ ಪೌರ ಕಾರ್ಮಿಕರು ವಿಶ್ರಾಂತಿ ಪಡೆಯಲು, ಉಪಹಾರ ಸೇವಿಸಲು ವಿಶ್ರಾಂತಿ ಗೃಹಗಳನ್ನು ನಿರ್ಮಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 2224 ಪೌರ ಕಾರ್ಮಿಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರೆಲ್ಲರನ್ನೂ ಖಾಯಂ ಮಾಡಲು ಶೀರ್ಘದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಆಯೋಗದಿಂದ ಮನವಿ ಸಲ್ಲಿಸಲಾಗುವುದು. ಅಲ್ಲದೇ ಪೌರ ಕಾರ್ಮಿಕರಿಗೆ ಗ್ಲೌಸ್, ಗಮ್ ಬೂಟ್‌ಗಳನ್ನು ನೀಡದ ಗುತ್ತಿಗೆದಾರರನ್ನು ಪಟ್ಟಿ ಮಾಡಿ, ಅವರಿಗೆ ದಂಡ ಹಾಕಿ ವರದಿ ಸಲ್ಲಿಸುವಂತೆ ಪಾಲಿಕೆ ಆಯುಕ್ತ ಸುರೇಶ ಇಟ್ನಾಳ ಅವರಿಗೆ ಸೂಚಿಸಿದ್ದೇನೆ’ ಎಂದು ಶಿವಣ್ಣ ಹೇಳಿದರು.

‘ರಾಜ್ಯದ ಅನೇಕ ಕಡೆಗಳಲ್ಲಿ ಸಫಾಯಿ ಕರ್ಮಚಾರಿಗಳು, ಯುಜಿಡಿ ಕೆಲಸಗಾರರು, ಟಿಪ್ಪರ್, ಲೋಡರ್ಸ್, ಕ್ಲೀನರ್ಸ್‌ಗಳು ಗುತ್ತಿಗೆದಾರರ ಕಪಿಮುಷ್ಠಿಯಲ್ಲಿದ್ದಾರೆ. ಗುತ್ತಿಗೆ ಪದ್ದತಿಯನ್ನು ರದ್ದು ಮಾಡಲು ಕ್ರಮ ತೆಗೆದುಕೊಳ್ಳುತ್ತೆನೆ. ಅತ್ಯಾಧುನಿಕ ತಂತ್ರಜ್ಞಾನವುಳ್ಳ ಯಂತ್ರಗಳನ್ನು ಬಳಸಲು ಸಂಬಂಧಿಸಿದ ಇಲಾಖೆಗಳಿಗೆ ನಿರ್ದೇಶನ ನೀಡಿ ಅನುಷ್ಠಾನಗೊಳಿಸುವಂತೆ ಸೂಚಿಸಿ ಮೇಲ್ವಿಚಾರಣೆ ಮಾಡುತ್ತೇನೆ’ ಎಂದರು.

ಶಾಸಕ ಪ್ರಸಾದ ಅಬ್ಬಯ್ಯ, ಆಯೋಗದ ಕಾರ್ಯದರ್ಶಿ ಆರ್. ರಮಾ, ಪಾಲಿಕೆ ಆಯುಕ್ತ ಡಾ. ಸುರೇಶ ಇಟ್ನಾಳ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT