ಶುಕ್ರವಾರ, ಫೆಬ್ರವರಿ 3, 2023
23 °C

ವಿವಿಧ ಬೇಡಿಕಗಳ ಈಡೇರಿಕೆಗೆ ರೈತರ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಧಾರವಾಡ: ರಾಷ್ಟ್ರೀಕೃತ ಬ್ಯಾಂಕ್, ಸಹಕಾರಿ ಸಂಘಗಳಲ್ಲಿರುವ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವುದು ಮತ್ತು ಪಂಪಸೆಟ್‌ಗಳಿಗೆ ವಿದ್ಯುತ್ ಮೀಟರ್ ಅಳವಡಿಸುವುದನ್ನು ನಿಲ್ಲಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸದಸ್ಯರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕಲಾಭವನದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಜಾಥಾ ನಡೆಸಿದ ರೈತರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಈ ವೇಳೆ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಕುನ್ನೂರ, ‘ಸತತವಾಗಿ ಸುರಿದ ಮಳೆಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಗೊಳಿಸಬೇಕು. ಅತಿವೃಷ್ಟಿಯಿಂದ ಹಾಳಾದ ಬೆಳೆಗಳಿಗೆ ಹಾಗೂ ಬಿದ್ದ ಮನೆಗಳಿಗೆ ಹೆಚ್ಚಿನ ಪರಿಹಾರ ಒದಗಿಸಬೇಕು. ಅಲ್ಲದೇ ಬೆಣ್ಣೆ ಹಳ್ಳ ಪ್ರವಾಹಕ್ಕೆ ಶಾಶ್ವತ ಪರಿಹಾರ ಕಲ್ಪಿಸಬೇಕು’ ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

‘ಈ ಹಿಂದೆ ಕೇಂದ್ರ ಸರ್ಕಾರ ಹಿಂಪಡೆದಂತೆ ರಾಜ್ಯ ಸರ್ಕಾರ ಕೂಡ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು. ಶೀಘ್ರವಾಗಿ ಕಳಸಾ ಬಂಡೂರಿ ನಾಲಾ ಜೋಡಣೆ ಮಾಡಿ, ರೈತರಿಗೆ ಅನುಕೂಲ ಕಲ್ಪಿಸಬೇಕು. ಆಲಮಟ್ಟಿ ಜಲಾಶಯದ ಎತ್ತರವನ್ನು 512 ರಿಂದ 526ಕ್ಕೆ ಏರಿಸುವುದು, ಪ್ರತಿ ಹೊಬಳಿ ಮಟ್ಟದಲ್ಲಿ ರೈತರ ಬೆಳೆಗಳಿಗೆ ಉಗ್ರಾಣ ನಿರ್ಮಿಸುವುದು ಸೇರಿದಂತೆ ಎಲ್ಲ ಬೇಡಿಕೆಗಳನ್ನು ಶೀಘ್ರದಲ್ಲಿ ಈಡೇರಿಸಬೇಕು. ಇಲ್ಲದಿದ್ದರೆ ಹೋರಾಟ ಅನಿವಾರ್ಯವಾಗಲಿ’ ಎಂದು ಎಚ್ಚರಿಸಿ, ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ವಾಸುದೇವ ಮೇಟಿ, ಶೃಣಪ್ಪ ಕುರಿಯವರ, ಶಿವಾನಂದ ತಳವಾರ, ಶಂಕರಗೌಡ ದೊಡಮನಿ, ಭೀಮರಾಯಪ್ಪ ರಾಯಪೂರ, ಖಲಂದರ ನದಾಫ, ವೆಂಕನಗೌಡ ಕಂಟೆಪ್ಪಗೌಡ್ರ, ಶಾಂತಾ ಮಡಿವಾಳರ, ರಾಜೇಶ್ವರಿ ಹೊಂಡದ ಹಾಗೂ ಸಂಘದ ಸದಸ್ಯರು, ರೈತರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.