ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಚೂಣಿ ಸಿಬ್ಬಂದಿಗೆ ಇಂದಿನಿಂದ ‘ಬೂಸ್ಟರ್‌’

ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ 3,153 ಹಾಸಿಗೆಗಳು ಸಿದ್ಧ; ಅಗತ್ಯ ಕ್ರಮಕ್ಕೆ ಸೂಚನೆ
Last Updated 9 ಜನವರಿ 2022, 15:27 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಕೊರೊನಾ ಸೋಂಕು ನಿಯಂತ್ರಿಸುವಲ್ಲಿ ಮುಂಚೂಣಿಯಲ್ಲಿದ್ದು ಕೆಲಸ ಮಾಡುವ ವಿವಿಧ ಇಲಾಖೆ ಸಿಬ್ಬಂದಿಗೆ ಸೋಮವಾರದಿಂದ ನಗರದ ಕಾರವಾರ ರಸ್ತೆಯ ಹಳೇ ಸಶಸ್ತ್ರ ಮೀಸಲು ಪಡೆ ಮೈದಾನದಲ್ಲಿ ಬೂಸ್ಟರ್‌ ಡೋಸ್‌ ನೀಡಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಂಕರಪಾಟೀಲ ಮುನೇನಕೊಪ್ಪ ಹೇಳಿದರು.

ಮಹಾನಗರ ಪಾಲಿಕೆಯ ಆಯುಕ್ತರ ಭವನದಲ್ಲಿ ಭಾನುವಾರ ನಡೆದ ಕೋವಿಡ್‌–19 ಮೂರನೇ ಅಲೆಯ ನಿಯಂತ್ರಣ ಕುರಿತು ಚರ್ಚಿಸಲು ನಡೆದ ಸಭೆಯ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

‘ಮುಂಜಾಗ್ರತಾ ಕ್ರಮವಾಗಿ ಕಿಮ್ಸ್‌, ಜಿಲ್ಲಾಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 3,153 ಹಾಸಿಗೆಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ 1,374, ಖಾಸಗಿ ಆಸ್ಪತ್ರೆಗಳಲ್ಲಿ 878 ಆಮ್ಲಜನಕ ಸಹಿತ ಹಾಸಿಗೆಗಳನ್ನು ಹಾಗೂ 208 ವೆಂಟಿಲೇಟರ್‌ ಸಹಿತ ಹಾಸಿಗೆಗಳನ್ನು ಸಿದ್ಧಮಾಡಿಟ್ಟುಕೊಳ್ಳಲಾಗಿದೆ. ಮೂರನೇ ಅಲೆ ನಿಯಂತ್ರಣಕ್ಕೆ ಜಿಲ್ಲಾಡಳಿತ ಸಕಲ ರೀತಿಯಲ್ಲಿ ಸಿದ್ಧವಾಗಿದೆ’ ಎಂದರು.

‘ಜಿಲ್ಲೆಯಲ್ಲಿ ಕಳೆದವಾರ 269 ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದವು. ಈ ಹಿಂದೆ ತಾಲ್ಲೂಕು ಮಟ್ಟದಲ್ಲಿ ಕೈಗೊಳ್ಳಲಾದ ಕೋವಿಡ್ ನಿಯಂತ್ರಣ ಕ್ರಮಗಳನ್ನು ಮುಂದುವರಿಸಲಾಗುವುದು’ ಎಂದರು.

ಸೂಚನೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪೊಲೀಸ್‌ ಇಲಾಖೆ, ತಾಲ್ಲೂಕು ಆಡಳಿತ, ಆರೋಗ್ಯ ಇಲಾಖೆ, ಕಂದಾಯ ಇಲಾಖೆ, ಮಹಾನಗರ ಪಾಲಿಕೆ ಸಹಯೋಗದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಸಚಿವ ಶಂಕರಪಾಟೀಲ ಮನೇನಕೊಪ್ಪ ಅಧಿಕಾರಿಗಳಿಗೆ ಹಲವು ಸೂಚನೆಗಳನ್ನು ನೀಡಿದರು.

‘ರಾತ್ರಿ ಕರ್ಫ್ಯೂ ಹಾಗೂ ವಾರಾಂತ್ಯ ಕರ್ಫ್ಯೂ ಘೋಷಿಸಲಾಗಿದ್ದು, ಸಾರ್ವಜನಿಕರಿಗೆ ಹಾಗೂ ವ್ಯಾಪಾರಸ್ಥರಿಗೆ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಆಸ್ಪತ್ರೆಗಳಲ್ಲಿ ಅಗತ್ಯ ಸಾಮಗ್ರಿ ಸಂಗ್ರಹಿಸಿಟ್ಟುಕೊಂಡು, ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡುವಲ್ಲಿ ಮುತುವರ್ಜಿ ವಹಿಸಬೇಕು. ಕೋವಿಡ್‌ ಲಸಿಕೆ ಪಡೆಯದವರ ಮಾಹಿತಿ ಸಂಗ್ರಹಿಸಿ, ಅವರಿರುವ ಸ್ಥಳಕ್ಕೇ ತೆರಳಿ ಲಸಿಕೆ ನೀಡಬೇಕು’ ಎಂದರು.

ಶಾಸಕ ಜಗದೀಶ್ ಶೆಟ್ಟರ್ ‘ಕೋವಿಡ್ ಮೊದಲ ಎರಡು ಅಲೆಗಳ ಸಮಯದಲ್ಲಿ ಎದುರಿಸಿದ ತೊಂದರೆಗಳು, ಮೂರನೇ ಅಲೆಯಲ್ಲಿ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕಾಗಿದೆ. ಬೇರೆ ಜಿಲ್ಲೆಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಯಾವೆಲ್ಲ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಮಾಹಿತಿ ಸಂಗ್ರಹಿಸಿ, ಅಗತ್ಯವಿದ್ದರೆ ಅವುಗಳನ್ನೂ ಜಾರಿಗೊಳಿಸಬೇಕು. ಲಾಕ್‌ಡೌನ್‌ ಭಯದಲ್ಲಿ ಜನರು ಜೀವನ ಸಾಗಿಸುತ್ತಿದ್ದಾರೆ. ಬೀದಿಬದಿ ವ್ಯಾಪಾರಸ್ಥರಿಗೆ, ಬಡ ವರ್ಗದವರಿಗೆ ಹಾಗೂ ಕಾರ್ಮಿಕರಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕಾಗಿದೆ’ ಎಂದು ತಿಳಿಸಿದರು.

ಶಾಸಕ ಪ್ರಸಾದ ಅಬ್ಬಯ್ಯ ಮಾತನಾಡಿ ‘ಮೊದಲ ಅಲೆಯ ಸಂದರ್ಭದಲ್ಲಿ ಸರ್ಕಾರ ಕಾರ್ಮಿಕರಿಗೆ ಪ್ಯಾಕೇಜ್ ಘೋಷಿಸಿತ್ತು. ಈಗ ಯಾವುದೇ ಪ್ಯಾಕೇಜ್ ಘೋಷಣೆಯಾಗಿಲ್ಲ. ಕಳೆದ ಬಾರಿ ಕೈಗೊಂಡ ಕ್ರಮಗಳಲ್ಲಿನ ತಪ್ಪುಗಳನ್ನು ಸರಿಪಡಿಸಿಕೊಂಡು ಮುನ್ನೆಡಬೇಕಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗೆ ಸೂಕ್ತ ಚಿಕಿತ್ಸೆ ದೊರೆಯುವಂತಾಗಬೇಕು’ ಎಂದು ಹೇಳಿದರು.

ವಿಧಾನ ಪರಿಷತ್‌ ಸದಸ್ಯ ಪ್ರದೀಪ ಶೆಟ್ಟರ್, ಶಹರ ತಹಶೀಲ್ದಾರ್‌ ಶಶಿಧರ್ ಮಾಡ್ಯಾಳ, ಗ್ರಾಮೀಣ ತಹಶೀಲ್ದಾರ್‌ ಪ್ರಕಾಶ ನಾಶಿ ಇದ್ದರು.

ಎರಡು ದಿನದಲ್ಲಿ ಎರಡು ಪಟ್ಟು ಸೋಂಕು ಹೆಚ್ಚಳ: ಡಿ.ಸಿ

‘ಈ ಮೊದಲು ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ವಾರಕ್ಕೆ ಎರಡು ಪಟ್ಟು ಹೆಚ್ಚಳವಾಗುತ್ತಿತ್ತು. ಇದೀಗ ಎರಡು ದಿನಗಳಲ್ಲಿ ಎರಡು ಪಟ್ಟು ಹೆಚ್ಚಳವಾಗಿದೆ. ಗ್ರಾಮೀಣ ಭಾಗದಲ್ಲಿ ಸೋಂಕು ನಿಯಂತ್ರಣಕ್ಕೆ ಬಂದಿದ್ದು, ಅಲ್ಲಿ ಪ್ರತಿದಿನ ನಾಲ್ಕು ಸಾವಿರಕ್ಕಿಂತ ಹೆಚ್ಚು ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ತಾಲ್ಲೂಕು ಆಸ್ಪತ್ರೆಗಳಲ್ಲಿ ಆಮ್ಲಜನಕ ಕೊರತೆಯಾಗದಂತೆ ಎಚ್ಚರ ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಬೇರೆ ಜಿಲ್ಲೆಗಳಿಂದ ಕಿಮ್ಸ್‌ಗೆ ಬರುವ ಕೋವಿಡ್ ರೋಗಿಗಳು ಮೊದಲೇ ನೋಂದಣಿ ಮಾಡಿಸಬೇಕು. ಇದರ ಮೇಲೆ ನಿಗಾ ವಹಿಸಲು ಆಸ್ಪತ್ರೆಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಸಭೆ, ಸಮಾರಂಭ ಹಾಗೂ ಜಾತ್ರೆಗಳಿಗೆ ಅವಕಾಶವಿಲ್ಲ. ಮದುವೆಗಳಿಗೆ ಆನ್‌ಲೈನ್‌ ಮೂಲಕ ನೋಂದಣಿ ವ್ಯವಸ್ಥೆ ಮಾಡಲಾಗಿದೆ’ ಎಂದು ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ತಿಳಿಸಿದರು.

ಸಹಾಯವಾಣಿ ಆರಂಭ

ಸಾರ್ವಜನಿಕರಿಗೆ ಮಾಹಿತಿ ನೀಡಲು ಹಾಗೂ ಜಾಗೃತಿ ಮೂಡಿಸಲು ಮಿನಿ ವಿಧಾನಸೌಧದಲ್ಲಿ ಕೋವಿಡ್‌–19 ಕಂಟ್ರೋಲ್‌ ರೂಂ (ಸಹಾಯವಾಣಿ ಕೇಂದ್ರ) ತೆರೆಯಲಾಗಿದೆ. ದಿನದ 24 ಗಂಟೆ ಕಾರ್ಯ ನಿರ್ವಹಿಸುವ ಕೇಂದ್ರದಲ್ಲಿ, ಆರೋಗ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಕರ್ತವ್ಯ ನಿರ್ವಹಿಸಲಿದ್ದಾರೆ. ಅಗತ್ಯ ಸಂದರ್ಭದಲ್ಲಿ ಸಾರ್ವಜನಿಕರು 0836–2358035 ಕರೆ ಮಾಡಬಹುದು ಎಂದು ಹುಬ್ಬಳ್ಳಿ ಶಹರ ತಹಶೀಲ್ದಾರ್‌ ಶಶಿಧರ ಮಾಡ್ಯಾಳ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT