ಹುಬ್ಬಳ್ಳಿ: ಗೌರಿ–ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಹೆಚ್ಚುವರಿ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್.ರಾಮನಗೌಡರ ತಿಳಿಸಿದ್ದಾರೆ.
‘ಸೆ.5 ಮತ್ತು 6ರಂದು ಬೆಂಗಳೂರು, ಮಂಗಳೂರು, ಪುಣೆ, ಗೋವಾ ಮತ್ತಿತರ ಪ್ರಮುಖ ಸ್ಥಳಗಳಿಂದ ಹುಬ್ಬಳ್ಳಿಗೆ ಹಾಗೂ ಸೆ.8 ಮತ್ತು 9ರಂದು ಹುಬ್ಬಳ್ಳಿಯಿಂದ ಬೆಂಗಳೂರು, ಪುಣೆ, ಗೋವಾ, ಮಂಗಳೂರು, ವಿಜಯಪುರ, ಬಾಗಲಕೋಟೆ ಮತ್ತಿತರ ಪ್ರಮುಖ ಸ್ಥಳಗಳಿಗೆ ಬಸ್ ಓಡಿಸಲಾಗುತ್ತದೆ’ ಎಂದು ತಿಳಿಸಿದ್ದಾರೆ.
‘ಸೆ.5 ರಿಂದ 10ರ ವರೆಗೆ ಜಿಲ್ಲೆಯೊಳಗೆ ವಿವಿಧ ಸ್ಥಳಗಳು ಹಾಗೂ ಪಕ್ಕದ ಜಿಲ್ಲೆಗಳ ಪ್ರಮುಖ ಸ್ಥಳಗಳ ನಡುವೆ ಹೆಚ್ಚಿನ ಜನರ ಓಡಾಟ ನಿರೀಕ್ಷಿಸಲಾಗಿದೆ. ಈ ಅವಧಿಯಲ್ಲಿ ಪ್ರಯಾಣಿಕರ ದಟ್ಟಣೆಗೆ ತಕ್ಕಂತೆ ಹೆಚ್ಚುವರಿ ವಿಶೇಷ ಬಸ್ ವ್ಯವಸ್ಥೆ ಮಾಡಲಾಗುವುದು’ ಎಂದು ಅವರು ಮಾಹಿತಿ ನೀಡಿದ್ದಾರೆ.
ವೋಲ್ವೊ, ಹವಾ ನಿಯಂತ್ರಿತ ಐರಾವತ, ಸ್ಲೀಪರ್, ಹವಾ ನಿಯಂತ್ರಣ ರಹಿತ ಸ್ಲೀಪರ್, ರಾಜಹಂಸ ಹಾಗೂ ವೇಗದೂತ ಸಾರಿಗೆಗಳು ಸೇರಿದಂತೆ ವಿವಿಧ ಮಾದರಿಯ ಬಸ್‌ಗಳನ್ನು ನಿಯೋಜಿಸಲಾಗಿದೆ.
ಮುಂಗಡ ಟಿಕೆಟ್: ‘ಈ ವಿಶೇಷ ಬಸ್‌ಗಳಿಗೆ www.ksrtc.in ವೆಬ್‌ಸೈಟ್, ಕೆಎಸ್ಆರ್‌ಟಿಸಿ ಮೊಬೈಲ್ ಆ್ಯಪ್ ಹಾಗೂ ಬಸ್ ನಿಲ್ದಾಣಗಳಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸಲು ವ್ಯವಸ್ಥೆ ಮಾಡಲಾಗಿದೆ. ಒಂದೇ ಟಿಕೆಟ್‌ನಲ್ಲಿ ನಾಲ್ಕು ಅಥವಾ ಹೆಚ್ಚಿನ ಆಸನಗಳನ್ನು ಕಾಯ್ದಿರಿಸಿದರೆ ಪ್ರಯಾಣ ದರದಲ್ಲಿ ಶೇ 5ರಷ್ಟು ರಿಯಾಯಿತಿ ಸಿಗಲಿದೆ. ದ್ವಿಮುಖ ಪ್ರಯಾಣಕ್ಕೆ ಒಂದೇ ಟಿಕೆಟ್ ಕಾಯ್ದಿರಿಸಿದರೆ ಶೇ 10ರಷ್ಟು ರಿಯಾಯಿತಿ ನೀಡಲಾಗುತ್ತದೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.