ಸೋಮವಾರ, 7 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸರ್ಕಾರಿ ಜಾಗ ಅತಿಕ್ರಮಣ; ತೆರವಿಗೆ ಕ್ರಮವಹಿಸಿ

Published : 21 ಸೆಪ್ಟೆಂಬರ್ 2024, 16:31 IST
Last Updated : 21 ಸೆಪ್ಟೆಂಬರ್ 2024, 16:31 IST
ಫಾಲೋ ಮಾಡಿ
Comments

ಧಾರವಾಡ: ‘ಒತ್ತುವರಿ ನಿರಂತರವಾಗಿ ನಡೆಯುತ್ತಿದೆ. ಒತ್ತುವರಿ ತೆರವುಗೊಳಿಸಿ ಸರ್ಕಾರದ ಆಸ್ತಿ ಸಂರಕ್ಷಣೆಗೆ ಅಧಿಕಾರಿಗಳು ಕ್ರಮ ವಹಿಸಬೇಕು’ ಎಂದು ಎಂದು ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ಕೋರ್ಟ್ ಅಧ್ಯಕ್ಷ ನ್ಯಾಯಮೂರ್ತಿ ಬಿ.ಎ.ಪಾಟೀಲ ಹೇಳಿದರು.

ಕರ್ನಾಟಕ ಭೂ ಕಬಳಿಕೆ ವಿಶೇಷ ಕೋರ್ಟ್, ಕಂದಾಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾಡಳಿತ ವತಿಯಿಂದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ ಮತ್ತು ಸಂಬಂಧಿಸಿದ ಕಾಯ್ದೆಗಳ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

‘ಸರ್ಕಾರಿ ಭೂಮಿ ಕಬಳಿಸಿದ್ದ ಒಟ್ಟು 84 ಜನರಿಗೆ ಶಿಕ್ಷೆ ಹಾಗೂ ದಂಡ ವಿಧಿಸಲಾಗಿದೆ. ಕೋರ್ಟ್ ಆರಂಭವಾದಾಗಿನಿಂದ ಇಲ್ಲಿವರೆಗೆ 23,646 ಪ್ರಕರಣಗಳು ದಾಖಲಾಗಿವೆ.ಈ ಪೈಕಿ 18,601 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. 5037 ಪ್ರಕರಣಗಳು ವಿಚಾರಣೆ ಹಂತದಲ್ಲಿವೆ’ ಎಂದು ತಿಳಿಸಿದರು.

‘ಸರ್ಕಾರಿ ಆಸ್ತಿ ಸಂರಕ್ಷಣೆಯಲ್ಲಿ ಕ್ಷೇತ್ರಮಟ್ಟದಲ್ಲಿ ಕಾರ್ಯನಿರ್ವಹಿಸುವ ಗ್ರಾಮ ಆಡಳಿತ ಅಧಿಕಾರಿಗಳ ಪಾತ್ರ ಬಹು ಮುಖ್ಯವಾಗಿದೆ. ಅವರಿಗೆ ಯಾವ ಗ್ರಾಮದಲ್ಲಿ ಎಷ್ಟು ಸರ್ಕಾರಿ ಭೂಮಿ ಇದೆ ಎಂಬುದು ತಿಳಿದಿರುತ್ತದೆ’ ಎಂದರು.

‘ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆ ನಿಯಮಗಳನ್ನು ಸರಿಯಾಗಿ ಅನುಷ್ಠಾನ ಮಾಡದಿದ್ದಲ್ಲಿ ಪ್ರಕರಣಕ್ಕೆ ಸಂಬಂಧಿಸಿದ ಅಧಿಕಾರಿಗಳು ಜವಾಬ್ದಾರರಾಗುತ್ತಾರೆ. ವಿಆದ್ದರಿಂದ ಸರ್ಕಾರದ ಆಸ್ತಿ, ಭೂಮಿ, ಖಾಲಿ ಜಾಗೆಗಳ ಬಗ್ಗೆ ಗ್ರಾಮ ಹಾಗೂ ವಾರ್ಡ್‌ ಮಟ್ಟದಲ್ಲಿ ಕೆಲಸ ಮಾಡುವ ಅಧಿಕಾರಿ ಸಿಬ್ಬಂದಿ ನಿಗಾ ವಹಿಸಬೇಕು’ ಎಂದು ಸೂಚಿಸಿದರು.

ಜಿಲ್ಲಾಧಿಕಾರಿ ದಿವ್ಯಪ್ರಭು ಮಾತನಾಡಿ, ‘ಜಿಲ್ಲೆಯಲ್ಲಿ ಲಭ್ಯವಿರುವ ಸರ್ಕಾರಿ ಜಮೀನು, ಆಸ್ತಿಗಳ ಪೈಕಿ ಶೇ 95ರಷ್ಟು ಆಸ್ತಿಗಳ ಸರ್ವೆಯನ್ನು ಲ್ಯಾಂಡ್ ಬಿಟ್ ಆ್ಯಪ್ ಮೂಲಕ ಮಾಡಲಾಗಿದೆ. ಇದರೊಂದಿಗೆ ಆರ್.ಟಿ.ಸಿ ಯೊಂದಿಗೆ ಆಧಾರ ಜೋಡಣೆ ಕಾರ್ಯವು ಶೇ 85 ಪೂರ್ಣಗೊಂಡಿದೆ. ಅನೇಕ ಕೆರೆಗಳ ಒತ್ತುವರಿ ತೆರವುಗೊಳಿಸಲಾಗಿದೆ’ ಎಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ರಮಾ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಕರ್ನಾಟಕ ಭೂ ಕಬಳಿಕೆ ವಿಶೇಷ ಕೋರ್ಟ್ ಕಂದಾಯ ಸದಸ್ಯ ಎಸ್.ಪಾಲಯ್ಯ, ಕೆ.ಎಚ್.ಅಶ್ವತನಾರಾಯಣಗೌಡ, ನ್ಯಾಯಿಕ ಸದಸ್ಯ ಪಾಟೀಲ ನಾಗಲಿಂಗನಗೌಡ, ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ ಪರಶುರಾಮ ದೊಡ್ಡಮನಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT