ಹುಬ್ಬಳ್ಳಿ: ‘ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ದಾರ್ಥ ಅವರಿಗೆ ಸೇರಿದ, ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿರುವ 4,430 ಎಕರೆ ಜಮೀನನ್ನು ಹೆಚ್ಚಿನ ಬೆಲೆಗೆ ಖರೀದಿಸುವ ಪ್ರಯತ್ನವನ್ನು ಸರ್ಕಾರ ಕೂಡಲೇ ನಿಲ್ಲಿಸಬೇಕು. ಇಲ್ಲದಿದ್ದರೆ, ಕಾನೂನು ಹೋರಾಟ ನಡೆಸಲಾಗುವುದು’ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್. ಹಿರೇಮಠ ಎಚ್ಚರಿಕೆ ನೀಡಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯ ಅರಣ್ಯ ಇಲಾಖೆ ಸಿದ್ಧಪಡಿಸಿರುವ ಜಮೀನು ಖರೀದಿಯ ಈ ಪ್ರಸ್ತಾವದ ಹಿಂದೆ ಎನ್‌ಜಿಒಗಳು, ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ ಎಸ್.ವಿ. ರಂಗನಾಥ್, ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಹಾಗೂ ಅರಣ್ಯ ಇಲಾಖೆಯ ಕೆಲ ಅಧಿಕಾರಿಗಳು ಇದ್ದಾರೆ’ ಎಂದು ಆರೋಪಿಸಿದರು.
‘ರಾಮನಗರ ತಾಲ್ಲೂಕಿನ ಕೇತಿಗಾನಹಳ್ಳಿಯಲ್ಲಿ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ, ಡಿ.ಸಿ. ತಮ್ಮಣ್ಣ ಹಾಗೂ ಇತರರು ಒತ್ತುವರಿ ಮಾಡಿಕೊಂಡಿರುವ ಗೋಮಾಳ ಭೂಮಿಯನ್ನು ವಶಪಡಿಸಿಕೊಳ್ಳಲು ವಿಫಲವಾಗಿರುವ ಉನ್ನತ ಮಟ್ಟದ ಅಧಿಕಾರಿಗಳ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ, ಹೈಕೋರ್ಟ್ ನೀಡಿರುವ ಆದೇಶ ಸ್ವಾಗತಾರ್ಹ’ ಎಂದರು ಹೇಳಿದರು.
ರಾಷ್ಟ್ರಪತಿಗೆ ಪತ್ರ: ‘ಸಂವಿಧಾನ ಉಳಿಸಿ, ಪ್ರಜಾಪ್ರಭುತ್ವ ರಕ್ಷಿಸಿ ಅಭಿಯಾನವನ್ನು ಸಿಟಿಜನ್ ಫಾರ್ ಡೆಮಾಕ್ರಸಿ (ಸಿಎಫ್‌ಡಿ) ಮತ್ತು ಸಮಾನ ಮನಸ್ಕ ಸಂಘಟನೆಗಳು ತೀವ್ರಗೊಳಿಸಲಿವೆ. ಪ್ರಜಾಪ್ರಭುತ್ವದ ಮೇಲೆ ನಡೆಯುತ್ತಿರುವ ದಾಳಿ ತಡೆಯಲು ಮಧ್ಯಪ್ರವೇಶಿಸುವಂತೆ ರಾಷ್ಟ್ರಪತಿ ಹಾಗೂ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆಯಲಾಗುವುದು’ ಎಂದು ತಿಳಿಸಿದರು.
‘ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು, ಉಪ ರಾಷ್ಟ್ರಪತಿ ಜಗದೀಪ್ ಧನ್‌ಕರ್ ಸೇರಿದಂತೆ ಕೆಲವರು ನ್ಯಾಯಾಂಗದ ಸ್ವಾತಂತ್ರ್ಯ ಮತ್ತು ಸಂವಿಧಾನ ಮೂಲ ರಚನೆ ಕುರಿತು ಆಕ್ರಮಣಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ನ್ಯಾಯಾಂಗ ನಿಂದನೆ ಸ್ವರೂಪದ ಇಂತಹ ಹೇಳಿಕೆಗಳನ್ನು ಸುಪ್ರೀಂ ಕೋರ್ಟ್ ಗಮನಿಸಬೇಕು’ ಎಂದು ಒತ್ತಾಯಿಸಿದರು.
‘ಕೇಂದ್ರ ಸರ್ಕಾರ ಮತ್ತು ಸಂಘ ಪರಿವಾರ ದೇಶದಲ್ಲಿ ಹಿಂದೂ ರಾಷ್ಟ್ರ ಸ್ಥಾಪನೆಗೆ ಮುಂದಾಗಿರುವುದು, ತುರ್ತು ಪರಿಸ್ಥಿತಿಗಿಂತ ಗಂಭೀರವಾದ ವಿಷಯವಾಗಿದೆ. ಸದ್ಯದ ಅಘೋಷಿತ ತುರ್ತು ಪರಿಸ್ಥಿತಿ ಹಾಗೂ ಜನವಿರೋಧಿ ನೀತಿಗಳನ್ನು ಎಲ್ಲರೂ ವಿರೋಧಿಸಬೇಕು. ಎರಡನೇ ಸ್ವಾತಂತ್ರ್ಯಸಂಗ್ರಾಮಕ್ಕೆ ಅಣಿಯಾಗಬೇಕು’ ಎಂದು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.