ಗುರುವಾರ , ಫೆಬ್ರವರಿ 25, 2021
30 °C

2022ರೊಳಗೆ ಎಲ್ಲರಿಗೂ ಸೂರು: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ‘ದೇಶದಲ್ಲಿ ಸೂರು ಇಲ್ಲದೆ ಬದುಕುತ್ತಿರುವವರಿಗೆ 2022ರೊಳಗೆ ಸ್ವಂತ ಸೂರು ಒದಗಿಸಲು ಹಾಗೂ ಜತೆಗೆ, 2024ರೊಳಗೆ ಪ್ರತಿ ಮನೆಗೂ ನಲ್ಲಿ ನೀರು ಪೂರೈಕೆ ಮಾಡಲು ಕೇಂದ್ರ ಸರ್ಕಾರ ಯೋಜನೆ ರೂಪಿಸಿದೆ’ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಹುಬ್ಬಳ್ಳಿಯ ರಾಮನಗರದಲ್ಲಿ 50 ಮನೆಗಳ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ‘ಮನೆ ಇಲ್ಲದವರಿಗೆ ಮನೆ ನಿರ್ಮಿಸಿ ಕೊಡುವ ಯೋಜನೆಯನ್ನು ದೇಶದಲ್ಲಿ ಮೊದಲಿಗೆ ಜಾರಿ ತಂದಿದ್ದು ಅಟಲ್ ಬಿಹಾರಿ ವಾಜಪೇಯಿ. ಅವರ ಮಾರ್ಗದಲ್ಲಿ ದೇಶ ಗುಡಿಸಲು ಮುಕ್ತವಾಗಬೇಕು ಎನ್ನುವ ಉದ್ದೇಶವನ್ನು ಪ್ರಧಾನಿ ನರೇಂದ್ರ ಮೋದಿ ಹೊಂದಿದ್ದಾರೆ’ ಎಂದರು.

‘ಮನೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ₹1.5 ಲಕ್ಷ ಮತ್ತು ರಾಜ್ಯ ಸರ್ಕಾರ ₹2 ಲಕ್ಷ ನೀಡುತ್ತಿವೆ. ಇದಕ್ಕೆ ಪೂರಕವಾಗಿ ಎಸ್‌ಸಿ ಮತ್ತು ಎಸ್‌ಟಿ ಫಲಾನುಭವಿಗಳು ₹48 ಸಾವಿರ ಹಾಗೂ ಸಾಮಾನ್ಯ ವರ್ಗದವರು ₹50 ಸಾವಿರ ತುಂಬಬೇಕು’ ಎಂದು ತಿಳಿಸಿದರು.

ಸಚಿವ ಜಗದೀಶ ಶೆಟ್ಟರ್ ಮಾತನಾಡಿ, ‘ರಾಮನಗರದಲ್ಲಿ ಮತ್ತೆ 50 ಮನೆಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, ಸುಳ್ಳದಲ್ಲಿ 50 ಎಕರೆ ಜಮೀನು ಖರೀದಿಸಿ, ವಸತಿ ಇಲ್ಲದವರಿಗೆ ಮನೆ ನಿರ್ಮಿಸಿ ಕೊಡುವ ಯೋಜನೆ ಇದೆ. ಇದಕ್ಕಾಗಿ ಭೂಮಿ ನೀಡಲು ಅಲ್ಲಿನ ರೈತರು ಕೂಡ ಮುಂದೆ ಬಂದಿದ್ದಾರೆ’ ಎಂದರು.

ಪ್ರಸ್ತಾವಿಕವಾಗಿ ಮಾತನಾಡಿದ ಬಿಜೆಪಿ ಮುಖಂಡ ಮಹೇಂದ್ರ ಕೌತಾಳ, ‘ಸಚಿವರಾದ ಪ್ರಹ್ಲಾದ ಜೋಶಿ ಹಾಗೂ ಜಗದೀಶ ಶೆಟ್ಟರ್ ಅವರು ಕೊಳಗೇರಿ ರಾಮನಗರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಮೂಲಕ, ಇಲ್ಲಿನ ಚಿತ್ರಣವನ್ನು ಬದಲಿಸಿದ್ದಾರೆ’ ಎಂದು ಹೇಳಿದರು.

ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಆರ್.ಕೆ‌. ಕೃಷ್ಣಮೂರ್ತಿ, ಕಾರ್ಯನಿರ್ವಾಹಕ ಎಂಜಿನಿಯರ್ ಎಸ್.ಪಿ. ಹಿರೇಮಠ, ಮಹಾನಗರ ಬಿಜೆಪಿ ಘಟಕದ ಅಧ್ಯಕ್ಷ ನಾಗೇಶ ಕಲಬುರ್ಗಿ, ಸೆಂಟ್ರಲ್ ಕ್ಷೇತ್ರದ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಮುಖಂಡರಾದ ಮಲ್ಲಿಕಾರ್ಜುನ ಸಾವಕಾರ, ಲಕ್ಷ್ಮಣ ಉಪ್ಪಾರ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.