ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿಯಲ್ಲಿ ನಿರ್ಬಂಧ; ಧಾರವಾಡದಲ್ಲಿ ಭಾಗಶಃ

ತಾಲ್ಲೂಕು ಕೇಂದ್ರ, ಗ್ರಾಮೀಣ ಭಾಗಗಳಲ್ಲಿ ಕೃಷಿ, ವ್ಯಾಪಾರ ಚಟುವಟಿಕೆಗಳಿಗೆ ವಿನಾಯಿತಿ
Last Updated 29 ಏಪ್ರಿಲ್ 2020, 13:57 IST
ಅಕ್ಷರ ಗಾತ್ರ

ಧಾರವಾಡ: ಕೋವಿಡ್‌–19 ಸೋಂಕು ವ್ಯಾಪಿಸಿರುವ ಪ್ರದೇಶಗಳಲ್ಲಿ ಕಿತ್ತಳೆ ವರ್ಣದ ವಲಯದಲ್ಲಿರುವ ಜಿಲ್ಲೆಯಲ್ಲಿ ಹುಬ್ಬಳ್ಳಿ ನಗರ ಹೊರತುಪಡಿಸಿ, ಉಳಿದ ಭಾಗಗಳಲ್ಲಿ ವ್ಯಾಪಾರ ವಹಿವಾಟಿಗೆ ಒಂದಷ್ಟು ರಿಯಾಯಿತಿಯನ್ನು ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ತಿಳಿಸಿದರು.

ಲಾಕ್‌ಡೌನ್ ವಿನಾಯಿತಿಗಳ ಕುರಿತು ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಬುಧವಾರ ಸಭೆ ನಡೆಸಿದ ಅವರು ನಂತರ ಮಾತನಾಡಿ, ‘ಧಾರವಾಡದಲ್ಲಿ ಕೆಲ ಷರತ್ತುಗಳೊಂದಿಗೆ ವಾರದಲ್ಲಿ ನಾಲ್ಕು ಅಗತ್ಯ ವಸ್ತುಗಳ ಅಂಗಡಿಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ. ತಾಲ್ಲೂಕು ಕೇಂದ್ರ ಮತ್ತು ಗ್ರಾಮೀಣ ಪ್ರದೇಶಗಳಲ್ಲೂ ವ್ಯಾಪಾರ ವಹಿವಾಟಿಗೂ ಅವಕಾಶ ಕಲ್ಪಿಸಲಾಗಿದೆ. ಆರೋಗ್ಯ ಮುಂಜಗ್ರತಾ ಕ್ರಮಗಳೊಂದಿಗೆ ಇದರ ಪ್ರಯೋಜನ ಪಡೆಯಬಹುದು’ ಎಂದರು.

‘ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಜರುಗಿದ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರದಂತೆ ಲಾಕ್‌ಡೌನ್ ವಿನಾಯಿತಿಗಳ ಕುರಿತು ನಿರ್ಧರಿಸಿ ಸೂಚಿಸಲಾಗಿತ್ತು. ಹುಬ್ಬಳ್ಳಿ ನಗರದಲ್ಲಿ ಕೋವಿಡ್–19 ಪ್ರಕರಣಗಳು ಇರುವುದರಿಂದ ಅಲ್ಲಿ ಎಲ್ಲಾ ನಿರ್ಬಂಧಗಳು ಯಥಾರೀತಿ ಮುಂದುವರಿಯಲಿವೆ’ ಎಂದರು.

‘ಧಾರವಾಡದಲ್ಲಿದ್ದ ಒಂದು ಪ್ರಕರಣ ಗುಣಮುಖರಾಗಿದ್ದರಿಂದ ನಿಯಮಾನುಸಾರ ಕಂಟೇನ್ಮೆಂಟ್ ಪ್ರದೇಶವನ್ನೂ ನಿರ್ಬಂಧ ಮುಕ್ತಗೊಳಿಸಲಾಗಿದೆ. ಹೀಗಾಗಿ ಸೋಮವಾರ, ಮಂಗಳವಾರ, ಬುಧವಾರ ಹಾಗೂ ಗುರುವಾರದಂದು ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ಕೃಷಿ ಮತ್ತು ಕೈಗಾರಿಕೆಗಳಿಗೆ ಪೂರಕವಾದ ಅಂಗಡಿಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ’ ಎಂದು ಶೆಟ್ಟರ್ ತಿಳಿಸಿದರು.

‘ಜಿಲ್ಲೆಯ ಕುಂದಗೋಳ, ನವಲಗುಂದ, ಅಣ್ಣಿಗೇರಿ, ಕಲಘಟಗಿ ಹಾಗೂ ಅಳ್ನಾವರ ತಾಲ್ಲೂಕು ಕೇಂದ್ರಗಳು ಮತ್ತು ಅಲ್ಲಿನ ಗ್ರಾಮೀಣ ಪ್ರದೇಶಗಳಲ್ಲಿ ಯಾವುದೇ ಪ್ರಕರಣಗಳು ಇಲ್ಲದಿರುವುದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೂಚಿಸಿರುವ ನಿಯಮಾನುಸಾರ ಎಲ್ಲಾ ರೀತಿಯ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಂಡು ಈ ಹಿಂದಿನಂತೆ ಮುಕ್ತವಾಗಿ ವ್ಯಾಪಾರ ವಹಿವಾಟು ನಡೆಸಬಹುದು’ ಎಂದರು.

‘ಸರ್ಕಾರದ ಸೂಚನೆಯಂತೆ ಜಿಲ್ಲೆಯ ಪರಿಸ್ಥಿತಿಯನ್ನು ಅವಲೋಕಿಸಿ, ಹಲವಾರು ವಿನಾಯಿತಿಗಳನ್ನು ಸಾರ್ವಜನಿಕರಿಗೆ ನೀಡಲಾಗಿದೆ. ಮುಂಗಾರು ಪ್ರಾರಂಭವಾಗುವುದರಿಂದ ಕೃಷಿ ಮತ್ತು ಪೂರಕ ಚಟುವಟಿಕೆಗಳು, ಆಸ್ಪತ್ರೆ, ಕಟ್ಟಡ ನಿರ್ಮಾಣ ಕಾರ್ಯ ಸೇರಿದಂತೆ ವಿವಿಧ ಕಾರಣಗಳಿಗಾಗಿ ಗ್ರಾಮೀಣ ಜನರು ನಗರ ಪ್ರದೇಶಗಳಿಗೆ ಬರುವ ಅಗತ್ಯವಿರುತ್ತದೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಜನ, ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಸಾರ್ವಜನಿಕರು ಜಿಲ್ಲಾಡಳಿತ ಮತ್ತು ಪೊಲೀಸರೊಂದಿಗೆ ಸಂಯಮದಿಂದ ವರ್ತಿಸಿ ಸಹಕಾರ ನೀಡಬೇಕು’ ಎಂದು ಶೆಟ್ಟರ್ ಮನವಿ ಮಾಡಿದರು.

ಶಾಸಕರಾದ ಪ್ರಸಾದ ಅಬ್ಬಯ್ಯ, ಅಮೃತ ದೇಸಾಯಿ, ಸಿ.ಎಂ.ನಿಂಬಣ್ಣವರ, ಕುಸುಮಾವತಿ ಶಿವಳ್ಳಿ, ಜಿಲ್ಲಾಧಿಕಾರಿ ದೀಪಾ ಚೋಳನ್, ಪೊಲೀಸ್ ಆಯುಕ್ತ ಆರ್.ದಿಲೀಪ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕ ಕಟಿಯಾರ್, ಜಿಲ್ಲಾ ಪಂಚಚಾಯ್ತಿ ಸಿಇಒ ಡಾ.ಬಿ.ಸಿ.ಸತೀಶ, ಮಹಾನಗರಪಾಲಿಕೆ ಆಯುಕ್ತ ಡಾ.ಸುರೇಶ ಇಟ್ನಾಳ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT