ಹುಬ್ಬಳ್ಳಿ: 78ನೇ ಸ್ವಾತಂತ್ರೋತ್ಸವ ಸಂಭ್ರಮ ಅಂಗವಾಗಿ ಜಿಲ್ಲಾಡಳಿತ, ತಾಲ್ಲೂಕಾಡಳಿತ, ಶಾಲಾ ಶಿಕ್ಷಣ ಇಲಾಖೆ ಹಾಗೂ ಹು–ಧಾ ಮಹಾನಗರ ಪಾಲಿಕೆ ಸಹಯೋಗದಲ್ಲಿ ನಗರದಲ್ಲಿ ಮಂಗಳವಾರ ‘ಪಾರಂಪರಿಕೆ ನಡಿಗೆ’ ಹಮ್ಮಿಕೊಳ್ಳಲಾಗಿತ್ತು.
ವಿದ್ಯಾನಗರದ ಮಹಿಳಾ ವಿದ್ಯಾಪೀಠದಲ್ಲಿರುವ ಮಹಾತ್ಮ ಗಾಂಧಿ ಅವರ ಸ್ಮಾರಕಕ್ಕೆ ಗೌರವ ಸಲ್ಲಿಸುವ ಮೂಲಕ ಆರಂಭಗೊಂಡ ಪಾರಂಪರಿಕ ನಡಿಗೆ, ಹೊಸೂರು ವೃತ್ತ, ಚನ್ನಮ್ಮ ವೃತ್ತ, ಸಿದ್ದಪ್ಪ ಕಂಬಳಿ ರಸ್ತೆ, ಅಂಬೇಡ್ಕರ್ ವೃತ್ತ, ಕೊಪ್ಪಿಕರ್ ರಸ್ತೆ ಮೂಲಕ ಬ್ರಾಡ್‌ವೇ ರಸ್ತೆಯವರೆಗೆ ಸಾಗಿ, ಹುತಾತ್ಮ ನಾರಾಯಣ ಡೋಣಿ ಸ್ಮಾರಕಕ್ಕೆ ಗೌರವ ಸಲ್ಲಿಸುವ ಮೂಲಕ ಮುಕ್ತಾಯಗೊಂಡಿತು. ಮಾರ್ಗದುದ್ದಕ್ಕೂ ವಿವಿಧ ಮಹಾತ್ಮರ ಪುತ್ಥಳಿ, ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.
ಪಾರಂಪರಿಕ ನಡಿಗೆಯಲ್ಲಿ ನಗರದ ವಿವಿಧ ಶಾಲೆಗಳ ಸುಮಾರು 5 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು, ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಿದ್ದರು. ರಾಷ್ಟ್ರಧ್ವಜ, ನಾಡಧ್ವಜ ಹಿಡಿದು ಸ್ವಾತಂತ್ರ್ಯ ಹೋರಾಟಗಾರರ ಪರ ವಿವಿಧ ಘೋಷಣೆಗಳನ್ನು ಕೂಗಿದರು.
ನಾರಾಯಣ ಡೋಣಿ ಅವರ ಸ್ಮಾರಕಕ್ಕೆ ನಮನ ಸಲ್ಲಿಸಿ ಮಾತನಾಡಿದ ಜಿಲ್ಲಾಧಿಕಾರಿ ದಿವ್ಯಪ್ರಭು, ‘ಜಿಲ್ಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ವಿನೂತನವಾಗಿ ಆಚರಣೆ ಮಾಡಲಾಗುತ್ತಿದೆ. ದೇಶದ ಹೆಮ್ಮೆ, ಪರಂಪರೆಯ ಬಗ್ಗೆ ಯುವಪೀಳಿಗೆಗೆ ತಿಳಿಸುವ ನಿಟ್ಟಿನಲ್ಲಿ ಪಾರಂಪರಿಕ ನಡಿಗೆ ಹಮ್ಮಿಕೊಳ್ಳಲಾಗಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಾಣ ತ್ಯಾಗ ಮಾಡಿದ ಹೋರಾಟಗಾರರನ್ನು ಪ್ರತಿಯೊಬ್ಬರೂ ಸ್ಮರಿಸಬೇಕಿದೆ’ ಎಂದು ತಿಳಿಸಿದರು.
ಶಾಸಕ ಎನ್.ಎಚ್. ಕೋನರಡ್ಡಿ ಮಾತನಾಡಿ, ‘ಧಾರವಾಡ ಜಿಲ್ಲೆಯು ಸ್ವಾತಂತ್ರ್ಯ ಹೋರಾಟಕ್ಕೆ ತನ್ನದೇ ಆದ ಕೊಡುಗೆ ನೀಡಿದೆ. ಎಲ್ಲರೂ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗಹಿಸಬೇಕು. ಆ ಮೂಲಕ ಸ್ವಾತಂತ್ರ್ಯದ ಹಿರಿಮೆ, ಗರಿಮೆಗಳ ಬಗ್ಗೆ ತಿಳಿದುಕೊಳ್ಳಬೇಕು’ ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪಾ ಟಿ.ಕೆ., ಹು–ಧಾ ಮಹಾನಗರ ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ, ಪಾಲಿಕೆ ಮಹಾಪೌರ ರಾಮಪ್ಪ ಬಡಿಗೇರ ಮಾತನಾಡಿದರು.
ಹುತಾತ್ಮ ನಾರಾಯಣ ಡೋಣಿ ಅವರ ಮನೆತನದ ಖಂಡೋಬಾ ಡೋಣಿ ಅವರಿಗೆ ಗಣ್ಯರು ಸನ್ಮಾನಿಸಿ ಗೌರವಿಸಿದರು.
ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ, ಹುಬ್ಬಳ್ಳಿ ಶಹರ ತಹಶೀಲ್ದಾರ್ ಕೆ.ಆರ್.ಪಾಟೀಲ, ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರ್ ಪ್ರಕಾಶ ನಾಶಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ ಬೊಮ್ಮಕ್ಕನವರ, ಹುಬ್ಬಳ್ಳಿ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಚನ್ನಪ್ಪಗೌಡ್ರ, ಪಾಲಿಕೆ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.
ಗ್ಯಾಲರಿ ನಿರ್ಮಾಣಕ್ಕೆ ಮನವಿ
‘ಇಲ್ಲಿನ ಲ್ಯಾಮಿಂಗ್ಟನ್ ಶಾಲೆಯ ವಿದ್ಯಾರ್ಥಿಯಾಗಿದ್ದ ನಾರಾಯಣ ಡೋಣಿ ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿ ಹುತಾತ್ಮರಾಗಿದ್ದಾರೆ. ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು. ನಾರಾಯಣ ಡೋಣಿ ಅವರ ಕುರಿತು ಹೆಚ್ಚು ಪ್ರಚಾರ ಮಾಡಬೇಕಿದೆ. ಲ್ಯಾಮಿಂಗ್ಟನ್ ಶಾಲೆಯಲ್ಲಿ ಅವರ ಜೀವನ ಹೋರಾಟದ ಕುರಿತು ಗ್ಯಾಲರಿ ನಿರ್ಮಾಣ ಮಾಡಬೇಕು’ ಎಂದು ಜಿಲ್ಲಾಧಿಕಾರಿ ಬಳಿ ಶಾಸಕ ಮಹೇಶ ಟೆಂಗಿನಕಾಯಿ ಮನವಿ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.