ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸೂಚನೆ

ಅಧಿಕಾರಿಗಳ ಜೊತೆ ವಿವಿಧ ಕಾಮಗಾರಿ ವೀಕ್ಷಿಸಿದ ಸಚಿವ; ಗುತ್ತಿಗೆದಾರರಿಗೆ ತಾಕೀತು
Last Updated 30 ಜೂನ್ 2021, 16:17 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಸ್ಮಾರ್ಟ್‌ ಸಿಟಿ ಯೋಜನೆಯಡಿ ಕೈಗೊಂಡಿರುವ ತೋಳನಕೆರೆ ಉದ್ಯಾನ ಹಾಗೂ ಉಣಕಲ್‌ ಕೆರೆ ಅಭಿವೃದ್ಧಿ ಕಾಮಗಾರಿಗಳನ್ನು ತಿಂಗಳೊಳಗೆ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಹೇಳಿದರು.

ಬುಧವಾರ ಬೆಳಿಗ್ಗೆ ಸ್ಮಾರ್ಟ್‌ಸಿಟಿ ಯೋಜನೆಯಡಿ ಕೈಗೊಂಡ ಕಾಮಗಾರಿಗಳನ್ನು ವೀಕ್ಷಿಸಿ, ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

‘ತೋಳನಕೆರೆ ಅಭಿವೃದ್ಧಿ ಕಾಮಗಾರಿ ಮುಕ್ತಾಯ ಹಂತದಲ್ಲಿದೆ. ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಕೆರೆಯ ಸುತ್ತ ಬೆಳೆದಿರುವ ಕಳೆ ಶುಚಿಗೊಳಿಸಿ, ಸಸಿಗಳನ್ನು ನೆಡುವಂತೆ ಸೂಚಿಸಲಾಗಿದೆ. ಬೆಂಗೇರಿ ಮಾರುಕಟ್ಟೆ ಅಭಿವೃದ್ಧಿ ಕಾಮಗಾರಿ ಸಹ ಮುಕ್ತಾಯದ ಹಂತದಲ್ಲಿದೆ. ಜನತಾ ಬಜಾರ್ ಮಾರುಕಟ್ಟೆ ಕಾಮಗಾರಿ ಡಿಸೆಂಬರ್ ಅಂತ್ಯದೊಳಗೆ ಹಾಗೂ ಮಂಟೂರ ರಸ್ತೆಯಲ್ಲಿ ಹೊಸ ಮೀನು ಮಾರುಕಟ್ಟೆ ನಿರ್ಮಾಣ ಕಾಮಗಾರಿ ಸೆಪ್ಟೆಂಬರ್‌ ಒಳಗೆ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ’ ಎಂದರು.

‘ಆಸ್ತಿ ಕರ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಮನವಿಗಳು ಬಂದಿದೆ. ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ ಮರುಪರಿಶೀಲನೆ ಮಾಡಲಾಗುವುದು. ₹140 ಕೋಟಿ ವೆಚ್ಚದ ಮಹಾತ್ಮಗಾಂಧಿ ನಗರ ವಿಕಾಸ ಯೋಜನೆ ಟೆಂಡರ್ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಶೀಘ್ರ ಕಾಮಗಾರಿಗೆ ಚಾಲನೆ ನೀಡಲಾಗುವುದು. ಪಾಲಿಕೆಗೆ ಬರಬೇಕಿರುವ ಬಾಕಿ ಪಿಂಚಣಿ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗುವುದು’ ಎಂದರು.

‘ಲಾಕ್‌ಡೌನ್‌ ಕಾರಣ ಕಾರ್ಮಿಕರ ಕೊರತೆಯಿಂದ ಕಾಮಗಾರಿಗಳು ನಿಧಾನಗತಿಯಲ್ಲಿ ಸಾಗುತ್ತಿವೆ. ನಗರದ ಪ್ರಮುಖ ಪ್ರದೇಶಗಳಲ್ಲಿ ಕಾಮಗಾರಿ ನಡೆಯುತ್ತಿರುವುದರಿಂದ ಸಂಚಾರದಟ್ಟಣೆ ಉಂಟಾಗುತ್ತಿದೆ. ಲಾಕ್‌ಡೌನ್‌ ಸಡಿಲವಾಗಿದ್ದು, ಕಾಮಗಾರಿಗಳು ವೇಗ ಪಡೆದುಕೊಂಡಿವೆ’ ಎಂದು ಹೇಳಿದರು.

ಅಸಮಾಧಾನ ವ್ಯಕ್ತಪಡಿಸಿದ ಸಚಿವ: ತೋಳನಕೆರೆ ಅಭಿವೃದ್ಧಿ ಕಾಮಗಾರಿ ವೀಕ್ಷಿಸಿದ ಸಚಿವ ಬೈರತಿ ಅವರು, ಗುತ್ತಿಗೆದಾರ ಹಾಗೂ ಅಧಿಕಾರಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಕಳೆದ ವರ್ಷ ಭೇಟಿ ನೀಡಿದಾಗಲೇ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಿದ್ದೆ. ಇನ್ನೂ ಪೂರ್ಣಗೊಳಿಸಿಲ್ಲ. ಅರೆಬರೆ ಕಾಮಗಾರಿ ನಡೆಸಿ ಸಾರ್ವಜನಿಕರಿಗೆ ಓಡಾಡಲಾಗದ ಸ್ಥಿತಿ ನಿರ್ಮಾಣ ಮಾಡಿದ್ದೀರಿ. ರೇಣುಕಾ ನಗರದ ಮುಖ್ಯ ರಸ್ತೆಗೆ ಹೊಂದಿಕೊಂಡಿರುವ ಮಾನಸಗಿರಿ ಕಾಲೊನಿಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ತಾತ್ಕಾಲಿಕವಾಗಿ ಸರಿಪಡಿಸಿ, ಅದರ ಫೋಟೊ ಕಳುಹಿಸಬೇಕು ಎಂದು ಎಂಜಿನಿಯರ್‌ಗೆ ತಾಕೀತು ಮಾಡಿದರು. ವಾಯುವಿಹಾರಿಗಳ ಜೊತೆ ಚರ್ಚಿಸಿ, ಸಲಹೆ ಸೂಚನೆ ಪಡೆದರು.

ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಕೆಯುಡಿಎಫ್‌ಸಿ ಕಾರ್ಯನಿರ್ವಾಹಕ ನಿರ್ದೇಶಕ ಶ್ರೀನಿವಾಸ, ನಗರ ಯೋಜನಾ ಇಲಾಖೆ ನಿರ್ದೇಶಕ ಮುರಳಿ, ಪಾಲಿಕೆ ಆಯುಕ್ತ ಸುರೇಶ ಇಟ್ನಾಳ್‌, ಸ್ಮಾರ್ಟ್ ಸಿಟಿ ಯೋಜನೆ ವ್ಯವಸ್ಥಾಪಕ ನಿರ್ದೇಶಕ ಶಕೀಲ್ ಅಹ್ಮದ್ ಇದ್ದರು.

ಶೀಘ್ರ ಭೂಮಿಪೂಜೆ: ‘ರೈತರ ಮನವೊಲಿಸಿ ಭೂಮಿ ಪಡೆದು, ಅಲ್ಲಿ ಬಡಾವಣೆ ರಚಿಸಿ ಸಾರ್ವಜನಿಕರಿಗೆ ನಿವೇಶನ ಹಂಚಿಕೆ ಮಾಡುವ ಯೋಜನೆಯಿದೆ. ₹30 ಕೋಟಿ ವೆಚ್ಚದಲ್ಲಿ ಹೊಸದಾಗಿ ಹಳೇ ಬಸ್‌ ನಿಲ್ದಾಣದಲ್ಲಿ ನಿರ್ಮಿಸಲಾಗುತ್ತಿರುವ ಬಸ್ ನಿಲ್ದಾಣ, ₹ 150 ಕೋಟಿ ವೆಚ್ಚದಲ್ಲಿ ಕ್ರೀಡಾ ಸಮುಚ್ಛಯ ನಿರ್ಮಾಣಕ್ಕೆ ಶೀಘ್ರ ಭೂಮಿ ಪೂಜೆ ನೆರವೇರಿಸಲಾಗುವುದು’ ಎಂದು ಸಚಿವ ಬೈರತಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT