ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹಸಿರು ಹೊದಿಕೆಗೆ ₹100 ಕೋಟಿ ಪ್ರಸ್ತಾವ

ಶೇ 10ರಷ್ಟು ಕಡಿಮೆ ಹಸಿರು ಇರುವ ಪ್ರದೇಶಗಳಲ್ಲಿ ಯೋಜನೆ ಅನುಷ್ಠಾನ: ಸಚಿವ ಈಶ್ವರ ಖಂಡ್ರೆ
Published : 21 ಸೆಪ್ಟೆಂಬರ್ 2024, 16:06 IST
Last Updated : 21 ಸೆಪ್ಟೆಂಬರ್ 2024, 16:06 IST
ಫಾಲೋ ಮಾಡಿ
Comments

ಹುಬ್ಬಳ್ಳಿ: ‘ಕೆನರಾ ವೃತ್ತ ಹೊರತು ಪಡಿಸಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಹಸಿರು ಹೊದಿಕೆ ಕಡಿಮೆ ಇರುವ ಪ್ರದೇಶಗಳಲ್ಲಿ ಸಸಿ ನೆಡುವ ಯೋಜನೆಗೆ ಸಮಗ್ರ ಯೋಜನೆ ರೂಪಿಸಲು ಮುಖ್ಯಮಂತ್ರಿ ಅವರಲ್ಲಿ ₹100 ಕೋಟಿ ಅನುದಾನ ನೀಡುವಂತೆ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದು ಅರಣ್ಯ ಖಾತೆ ಸಚಿವ ಈಶ್ವರ ಖಂಡ್ರೆ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ಬೆಳಗಾವಿ, ಧಾರವಾಡ ಮತ್ತು ಕೆನರಾ ವೃತ್ತದ ಅರಣ್ಯ ವಿಭಾಗದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ‘ಹಸಿರು ಹೊದಿಕೆ ಕಡಿಮೆ ಇರುವ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಪ್ರದೇಶಗಳಲ್ಲಿ ಹೆಚ್ಚಾಗಿ ಸಸಿಗಳನ್ನು ನೆಡಬೇಕಾಗಿದೆ. ವಿಜಯಪುರ, ಬಾಗಲಕೋಟೆ, ಗೋಕಾಕ, ಬೀದರ್ ಸೇರಿದಂತೆ ಶೇ 10ರಷ್ಟು ಕಡಿಮೆ ಹಸಿರು ಹೊದಿಕೆ ಪ್ರದೇಶವನ್ನು ಗುರುತಿಸಬೇಕು. ರಸ್ತೆ ಬದಿ, ಸರ್ಕಾರಿ ಜಮೀನು, ಉದ್ಯಾನಗಳಲ್ಲಿ ಸಸಿಗಳನ್ನು ನೆಟ್ಟು, ಹಸಿರು ಹೊದಿಕೆ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.

‘ಅರಣ್ಯ ಸಂರಕ್ಷಣೆ ಅಗತ್ಯವಾಗಿದ್ದು, ಇಲ್ಲಿಯ ಅರಣ್ಯ ವೃತ್ತಗಳಲ್ಲಿ ಲಕ್ಷಾಂತರ ಸಸಿಗಳನ್ನು ನೆಡಲಾಗಿದೆ. ಅವುಗಳ ಸಂರಕ್ಷಣೆ, ಪಾಲನೆ ಪೋಷಣೆ, ತಪಾಸಣೆ ನಡೆಸಿ ನಿಖರ ವರದಿ ಸಲ್ಲಿಸಬೇಕು. ಅರಣ್ಯ ಭೂ ಕಾಯ್ದೆಯಡಿ ಅರ್ಜಿ ಸಲ್ಲಿಸಿ, ಪ್ರಕರಣ ಇತ್ಯರ್ಥವಾಗದಿದ್ದರೆ ಅವುಗಳನ್ನು ತೆರವುಗೊಳಿಸಬಾರದು’ ಎಂದು ಹೇಳಿದರು.

‘ಅರಣ್ಯ ಒತ್ತುವರಿ ಪ್ರಕರಣಗಳು ಹೆಚ್ಚಾಗಿದ್ದು, ಸರ್ಕಾರದ ಸೂಚನೆಯಂತೆ ಮೂರು ಎಕರೆಗಿಂತ ಕಡಿಮೆ ಅರಣ್ಯ ಪ್ರದೇಶ ಒತ್ತುವರಿ ಮಾಡಿದವರಿಗೆ ಪುನರ್‌ ವಸತಿ ಕಲ್ಪಿಸುವ ಕುರಿತು ಚಿಂತನೆ ನಡೆಸಲಾಗುತ್ತಿದೆ. ಆದರೆ, ಶ್ರೀಮಂತ ವರ್ಗದವರಿಂದ ಒತ್ತುವರಿ ನಡೆದರೆ  ಕ್ರಮ ಕೈಗೊಳ್ಳಬೇಕು’ ಎಂದರು.

‘ಮಂಗಳಗಟ್ಟಿ ತರಬೇತಿ ಕೇಂದ್ರದಲ್ಲಿ ಅರಣ್ಯ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗೆ ತರಬೇತಿ ನೀಡಲಾಗುತ್ತಿದೆ. ಈ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿ ಆಧುನಿಕ ರೀತಿಯಲ್ಲಿ ತರಬೇತಿ ನೀಡುವ ಕೇಂದ್ರವನ್ನಾಗಿ ಮಾಡಲು ಯೋಜನೆ ರೂಪಿಸಬೇಕು. ಅರಣ್ಯದಂಚಿನ ನಿವಾಸಿಗಳಿಗೆ ತೊಂದರೆಯಾಗದಂತೆ ಸಿಬ್ಬಂದಿ ಕರ್ತವ್ಯ ನಿರ್ವಹಿಸಬೇಕು’ ಎಂದು ಕಿವಿಮಾತು ಹೇಳಿದರು.

‘ತೇಗ ಮರ ಕಡಿಯುವ ಪ್ರಕ್ರಿಯೆ ಕ್ಲಿಷ್ಟಕರವಾಗಿದ್ದು, ಸರಳೀಕರಣ ಮಾಡುವ ನಿಟ್ಟಿನಲ್ಲಿ ಉನ್ನತ ಮಟ್ಟದ ಅಧಿಕಾರಿಗಳ ಜೊತೆ 15 ದಿನಗಳಲ್ಲಿ ಸಭೆ ಕರೆಯಬೇಕು. ಅರಣ್ಯ ಕಾಯ್ದೆಗಳು ಬಹಳಷ್ಟು ಕಠಿಣವಾಗಿದ್ದು, ಅವುಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಬಾಕಿ ಇರುವ ಹಲವಾರು ಪ್ರಕರಣಗಳನ್ನು ಇತ್ಯರ್ಥ ಪಡಿಸಿ ಮೀಸಲು ಅರಣ್ಯ ಪ್ರದೇಶ ಎಂದು ಘೋಷಿಸಲು ತುರ್ತು ಕ್ರಮ ಕೈಗೊಳ್ಳಬೇಕು‘ ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಶಾಸಕ ಎನ್.ಎಚ್.ಕೋನರಡ್ಡಿ, ಅರಣ್ಯ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು

ಕೇಂದ್ರ ಸರ್ಕಾರ ಗೋವಾಕ್ಕೆ ಬೆಂಬಲ: ಖಂಡ್ರೆ ಆರೋಪ

ಹುಬ್ಬಳ್ಳಿ: ‘ಮಹದಾಯಿ, ಕಳಸಾ ಬಂಡೂರಿ ಯೋಜನೆ ಕುರಿತು ಕೇಂದ್ರ ವನ್ಯಜೀವಿ ಮಂಡಳಿ ವಿಧಿಸಿದ್ದ ಎಲ್ಲ ಷರತ್ತುಗಳನ್ನು ರಾಜ್ಯ ಸರ್ಕಾರ ಪೂರೈಸಿದೆ. ಆದರೆ, ಕೇಂದ್ರ ಸರ್ಕಾರ ರಾಜಕೀಯ ದುರುದ್ದೇಶಕ್ಕಾಗಿ ಗೋವಾ ಸರ್ಕಾರಕ್ಕೆ ಬೆಂಬಲ ನೀಡುತ್ತಿದೆ’ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಆರೋಪಿಸಿದ್ದಾರೆ.

ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಗೋವಾ ರಾಜ್ಯ ಸುಪ್ರೀಂ ಕೋರ್ಟ್‌‌ನಲ್ಲಿ ಪ್ರಕರಣ ದಾಖಲಿಸಿದೆ ಎಂದು, ಕೇಂದ್ರ ಸರ್ಕಾರ ಅನುಮತಿ ನೀಡಲು ವಿಳಂಬ ಮಾಡುತ್ತಿದೆ. ಅಂತರರಾಜ್ಯ ಜಲವಿವಾದದಂಥ ಪ್ರಕರಣದಲ್ಲಿ ರಾಜ್ಯ ಸರ್ಕಾರಗಳ ಸಹಕಾರ ಅಗತ್ಯ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಸುಳ್ಳು ಹೇಳುತ್ತ ಓಡಾಡುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT