ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Karnataka Elections | ಧಾರವಾಡ: ಸಂಚಲನ ಮೂಡಿಸಿದ ಪಕ್ಷಾಂತರ ವದಂತಿ

ಬೆಜೆಪಿ ತೊರೆದು ಬರಲಿರುವವರನ್ನು ಕಣಕ್ಕಿಳಿಸಲಿದೆಯೇ ಕಾಂಗ್ರೆಸ್?
Last Updated 11 ಫೆಬ್ರುವರಿ 2023, 4:48 IST
ಅಕ್ಷರ ಗಾತ್ರ

ಧಾರವಾಡ: ಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಕೆಲ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಬರಲಿರುವ ವ್ಯಕ್ತಿಗಳನ್ನು ಅಭ್ಯರ್ಥಿಗಳನ್ನಾಗಿ ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ ಎಂಬ ಮಾತುಗಳು ಇದೀಗ ಆಕಾಂಕ್ಷಿಗಳ ವಲಯದಲ್ಲಿ ಸಂಚಲನ ಮೂಡಿಸಿದೆ.

ಸದ್ಯ ಬಿಜೆಪಿಯಲ್ಲಿರುವ ಮೋಹನ ಲಿಂಬಿಕಾಯಿ ಹಾಗೂ ಎಸ್‌.ಐ.ಚಿಕ್ಕನಗೌಡರ ಅವರು ಕಾಂಗ್ರೆಸ್ ಸೇರಲಿದ್ದಾರೆ ಹಾಗೂ ಇವರಿಗೆ ಕ್ರಮವಾಗಿ ಹುಬ್ಬಳ್ಳಿ ಧಾರವಾಡ ಪಶ್ಚಿಮ ಹಾಗೂ ಕುಂದಗೋಳ ಕ್ಷೇತ್ರದ ಟಿಕೆಟ್ ಖಚಿತಗೊಂಡಿದೆ ಎಂಬ ಮಾತುಗಳು ಇದೀಗ ಕೇಳಿಬರುತ್ತಿವೆ. ಈ ಎರಡೂ ಕ್ಷೇತ್ರಗಳಿಗೆ 11ಕ್ಕೂ ಹೆಚ್ಚು ಆಕಾಂಕ್ಷಿಗಳು ಈಗಾಗಲೇ ಟಿಕೆಟ್‌ಗಾಗಿ ತೀವ್ರ ಪೈಪೋಟಿ ನಡೆಸಿದ್ದಾರೆ. ಕ್ಷೇತ್ರದ ಉದ್ದಗಲಕ್ಕೂ ಓಡಾಡಿ ಮತದಾರರ ಮನವೊಲಿಸುವ ಕಸರತ್ತು ನಡೆಸಿದ್ದಾರೆ. ಇದರ ಬೆನ್ನಲ್ಲೇ ಹೊರಬಿದ್ದಿರುವ ಈ ಸುದ್ದಿ ಇದೀಗ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ಬಿಜೆಪಿಯ ಈ ಇಬ್ಬರು ನಾಯಕರು ಬಿ.ಎಸ್.ಯಡಿಯೂರಪ್ಪ ಅವರ ಆಪ್ತರು. ಈ ಹಿಂದೆ ಕೆಜೆಪಿಯಲ್ಲಿದ್ದರು. ವಿಧಾನಪರಿಷತ್ ಚುನಾವಣೆ ಟಿಕೆಟ್‌ ಆಕಾಂಕ್ಷಿಯೂ ಆಗಿದ್ದ ಲಿಂಬಿಕಾಯಿ ಅವರು 2013ರಲ್ಲಿ ಕೆಜೆಪಿಯಿಂದ ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಕಳೆದ ವಿಧಾನಪರಿಷತ್ ಚುನಾವಣೆ ಸಂದರ್ಭದಲ್ಲೂ ಕಾಂಗ್ರೆಸ್ ಕದ ತಟ್ಟಿದ್ದು ಸುದ್ದಿಯಾಗಿತ್ತು. ಪಂಚಮಸಾಲಿ ಸಮುದಾಯದ ಲಿಂಬಿಕಾಯಿ ಅವರನ್ನು ಪಶ್ಚಿಮ ಕ್ಷೇತ್ರದ ಅಭ್ಯರ್ಥಿಯನ್ನಾಗಿಸುವ ಮೂಲಕ ಕ್ಷೇತ್ರವನ್ನು ತನ್ನದಾಗಿಸುವ ಯೋಜನೆ ಕಾಂಗ್ರೆಸ್ ಹೊಂದಿದೆ ಎಂದೆನ್ನಲಾಗಿದೆ.

ಕುಂದಗೋಳ ಶಾಸಕ ಸಿ.ಎಸ್.ಶಿವಳ್ಳಿ ಅವರ ನಿಧನ ನಂತರ ತೆರವಾಗಿದ್ದ ಸ್ಥಾನಕ್ಕೆ ಸ್ಪರ್ಧಿಸಿದ್ದ ಕುಸುಮಾವತಿ ಶಿವಳ್ಳಿ ಅವರ ವಿರುದ್ಧ ಬಿಜೆಪಿಯಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು. ಆದರೆ ಈ ಬಾರಿ ಕಾಂಗ್ರೆಸ್‌ನಿಂದ ಟಿಕೆಟ್ ಬಯಸಿದ್ದಾರೆ ಎಂಬ ವದಂತಿಗಳು ದಟ್ಟವಾಗಿವೆ.

ಇದರ ನಡುವೆಯೇ ಕಾಂಗ್ರೆಸ್‌ನ ಟಿಕೆಟ್‌ ಆಕಾಂಕ್ಷಿಗಳು ಶನಿವಾರ ಜಂಟಿ ಸುದ್ದಿಗೋಷ್ಠಿ ಆಯೋಜಿಸಿದ್ದಾರೆ. ಇದು ಪಕ್ಷದ ವಲಯದಲ್ಲೂ ತೀವ್ರ ಕುತೂಹಲ ಮೂಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT