ಅಭಿಪ್ರಾಯ ಪಡೆದು ಲಾಕ್‌ಡೌನ್ ಬಗ್ಗೆ ತೀರ್ಮಾನ: ಸಚಿವ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರಿಸುವ ಕುರಿತು ಜಿಲ್ಲಾಡಳಿತ, ಜನಪ್ರತಿನಿಧಿಗಳು ಹಾಗೂ ಸಂಘ ಸಂಸ್ಥೆಗಳು ಅಭಿಪ್ರಾಯ ಪಡೆದು ತೀರ್ಮಾನ ಕೈಗೊಳ್ಳಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ಹುಬ್ಬಳ್ಳಿ ಮಧುರ ಕಾಲೋನಿಯಲ್ಲಿರುವ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಮುಖ್ಯಮಂತ್ರಿ ಹಾಗೂ ಮುಖ್ಯಕಾರ್ಯದರ್ಶಿ ಅವರ ಒಪ್ಪಿಗೆ ಪಡೆದು ಜಿಲ್ಲೆಯಲ್ಲಿ ಜುಲೈ 24ರವರೆಗೆ ಲಾಕ್‌ಡೌನ್ ಮಾಡಲಾಗಿದೆ. ವೇಗವಾಗಿ ಹರಡುತ್ತಿರುವ ಕೊರೋನ ಸೋಂಕಿನ ಸರಪಳಿಯನ್ನು ಮುರಿಯುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದರು.
ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ಹೆಚ್ಚುವರಿಯಾಗಿ 250 ಹಾಸಿಗೆಗಳನ್ನು ಕೊರೋನಾ ಸೋಂಕಿತರ ಚಿಕಿತ್ಸೆಗಾಗಿ ಸಿದ್ಧ ಪಡಿಸಲಾಗುತ್ತಿದೆ. ಹಂತ ಹಂತವಾಗಿ ಕಿಮ್ಸ್‌ನಲ್ಲಿ ಕೋವಿಡ್ ಚಿಕಿತ್ಸೆಗಾಗಿ ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು. ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡಲು ಮುಂದೆ ಬಂದಿವೆ. ಧಾರವಾಡದ ಎಸ್.ಡಿ.ಎಂ. ಆಸ್ಪತ್ರೆಯಲ್ಲಿ ಈಗಾಗಲೇ 80 ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.
ಒಟ್ಟು 500 ಹಾಸಿಗೆಗಳನ್ನು ಕೋವಿಡ್ ರೋಗಿಗಳಿಗಾಗಿ ಸಿದ್ಧಪಡಿಸುವಂತೆ ಎಸ್‌ಡಿಎಂ ಆಸ್ಪತ್ರೆಗೆ ತಿಳಿಸಲಾಗಿದೆ. ಎಸ್‌ಡಿಎಂ ಎಂಜಿನಿಯರಿಂಗ್ ಹಾಸ್ಟೆಲ್ ಅನ್ನು ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಲಾಗುವುದು. ಸುಚಿರಾಯು, ತತ್ವದರ್ಶಿ ಸೇರಿದಂತೆ ಇತರೆ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗೆ ಈಗಾಗಲೇ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿಗಳು ಖಾಸಗಿ ಆಸ್ಪತ್ರೆಯ ಆಡಳಿತ ಮಂಡಳಿಗೆ ಜೊತೆ ಸಭೆ ನಡೆಸಿದ್ದಾರೆ. ಜಿಲ್ಲಾಡಳಿತ ಖಾಸಗಿ ಆಸ್ಪತ್ರೆಯ ವೈದ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೋವಿಡ್ ತುರ್ತುಪರಿಸ್ಥಿತಿಯನ್ನು ಎದುರಿಸಲಾಗುವುದು. ಜಿಲ್ಲಾ ಆಸ್ಪತ್ರೆಗೆ ಏಳು ಹೊಸ ಆಂಬುಲೆನ್ಸ್ ಗಳ ಖರೀದಿಗೆ ಒಪ್ಪಿಗೆ ನೀಡಲಾಗಿದೆ ಎಂದರು.
ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆಯಿಲ್ಲ
ಜಿಲ್ಲೆಯಲ್ಲಿ ಯೂರಿಯಾ ಸೇರಿದಂತೆ ಯಾವುದೇ ರಸಗೊಬ್ಬರದ ಕೊರತೆಯಿಲ್ಲ. ಸಾಕಷ್ಟು ಪ್ರಮಾಣದಲ್ಲಿ ರೈತರಿಗೆ ರಸಗೊಬ್ಬರ ಒದಗಿಸಲಾಗುವುದು. ಖಾಸಗಿ ರಸಗೊಬ್ಬರ ಅಂಗಡಿಗಳಲ್ಲಿ ರೈತರಿಗೆ ಅಧಿಕ ಬೆಲೆಯಲ್ಲಿ ರಸಗೊಬ್ಬರ ಮಾರಾಟ ಮಾಡದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.