ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಮಗಾರಿ ಕಳಪೆಯಾಗದಂತೆ ಭೈರತಿ ಸೂಚನೆ

Last Updated 8 ಜೂನ್ 2020, 13:39 IST
ಅಕ್ಷರ ಗಾತ್ರ

ಧಾರವಾಡ: ‘ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರದೇಶಗಳ ಅಭಿವೃದ್ಧಿ ಕಾರ್ಯಗಳು ಹಾಗೂ ಉತ್ತಮ ನಾಗರಿಕ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಜಾರಿಗೆ ತಂದ ಯೋಜನೆಗಳು ಕಳಪೆಯಾಗದಂತೆ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು’ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಕಾಮಗಾರಿಗಳು, ಸ್ಮಾರ್ಟ್ ಸಿಟಿ, ಜಲಮಂಡಳಿ ಮತ್ತು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯನ್ನು ಸೋಮವಾರ ನಡೆಸಿದ ಅವರು ಮಾತನಾಡಿದರು.

‘ಮಹಾನಗರ ಪಾಲಿಕೆಗೆ ಬಿಡುಗಡೆಯಾದ ಅನುದಾನ, ಅನುಮೋದಿತ ಕಾಮಗಾರಿಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು. ನಗರೋತ್ಥಾನ ಯೋಜನೆ, ಎಸ್‌ಎಫ್‌ಸಿ ಅನುದಾನ, 14ನೇ ಹಣಕಾಸು ಯೋಜನೆಯ ಅನುದಾನಗಳನ್ನು ಸಮರ್ಪಕವಾಗಿ ಬಳಸಿಕೊಂಡು ಅಗತ್ಯ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು’ ಎಂದು ಸೂಚಿಸಿದರು.

‘ಹುಬ್ಬಳ್ಳಿಗೆ ದಿನದ 24 ತಾಸು ಕುಡಿಯುವ ನೀರು ಪೂರೈಕೆಯ ₹1200ಕೋಟಿ ವೆಚ್ಚದ ಯೋಜನೆ ಸಿದ್ಧಗೊಂಡಿದ್ದು, ಆಡಳಿತಾತ್ಮಕ ಅನುಮೋದನೆ ಪಡೆದು ಕಾಮಗಾರಿ ಆರಂಭಿಸಬೇಕು. ಪೌರಕಾರ್ಮಿಕರಗೃಹಭಾಗ್ಯ ಯೋಜನೆಯನ್ನು ಶೀಘ್ರದಲ್ಲಿ ಪೂರ್ಣಗೊಳಿಸಿ ಕಾರ್ಮಿಕರಿಗೆ ವಿತರಿಸಲು ಕ್ರಮ ಕೈಗೊಳ್ಳಬೇಕು. ಅಮೃತ ಯೋಜನೆ, ಸ್ವಚ್ಛ ಭಾರತ ಅಭಿಯಾನ ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕು’ ಎಂದು ಸಚಿವರು ತಿಳಿಸಿದರು.

ಮಧ್ಯಮ ಮತ್ತು ಬೃಹತ್ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ್ ಮಾತನಾಡಿ, ‘ಮಳೆಗಾಲ ಆರಂಭವಾಗಿರುವುದರಿಂದ ನಗರ ಪ್ರದೇಶದಲ್ಲಿ ಅನುಷ್ಠಾನಗೊಳ್ಳುತ್ತಿರುವ ಕಾಮಗಾರಿಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕು. ಮುಖ್ಯವಾಗಿ ರಸ್ತೆ, ಒಳಚರಂಡಿ ಹಾಗೂ ಸೇತುವೆ ನಿರ್ಮಾಣದ ಕಾಮಗಾರಿಗಳಿಗೆ ಆಧ್ಯತೆ ನೀಡಬೇಕು’ ಎಂದರು.

ಮಹಾನಗರಪಾಲಿಕೆಯ ಕಾಮಗಾರಿಗಳ ಕುರಿತು ಆಯುಕ್ತ ಡಾ. ಸುರೇಶ್ ಇಟ್ನಾಳ, ಜಲಮಂಡಳಿ ಮುಖ್ಯ ಎಂಜಿನಿಯರ್ ಜಿ.ಎಂ. ಮಾದೇಗೌಡ, ಸ್ಮಾರ್ಟ್‌ಸಿಟಿ ಯೋಜನೆಯ ಪ್ರಧಾನ ವ್ಯವಸ್ಥಾಪಕ ಶಕೀಲ್‌ಅಹ್ಮದ್ ಪ್ರಗತಿವರದಿ ನೀಡಿದರು.

ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹಾಗೂ ಪ್ರದೀಪ ಶೆಟ್ಟರ್, ಶಾಸಕರಾದ ಅರವಿಂದ ಬೆಲ್ಲದ, ಅಮೃತ ದೇಸಾಯಿ, ಜಿಲ್ಲಾಧಿಕಾರಿ ದೀಪಾ ಚೊಳನ್, ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ರಾಜ್ಯ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕಿ ಬಿ.ವಿ.ಕಾವೇರಿ ಇದ್ದರು.

ಸಭೆಯ ನಂತರ ಇಲ್ಲಿನ ಕೇಶವನಗರದಲ್ಲಿ ಜಲಮಂಡಳಿ ಕೈಗೊಂಡಿರುವ ಒಳಚರಂಡಿ ಕಾಮಗಾರಿ ಹಾಗೂ ಟೋಲ್‌ನಾಕಾ ಬಳಿಯ ಬಿಆರ್‌ಟಿಎಸ್ ರಸ್ತೆಯ ದುರಸ್ತಿ ಕಾಮಗಾರಿಗಳನ್ನು ಸಚಿವ ಭೈರತಿ ಬಸವರಾಜ ಪರಿಶೀಲಿಸಿದರು. ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸಲು ನಿರ್ದೇಶಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT