ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ: ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

ಶಾಸಕ ಪ್ರಸಾದ ಅಬ್ಬಯ್ಯ ಎಚ್ಚರಿಕೆ
Published 12 ಫೆಬ್ರುವರಿ 2024, 13:38 IST
Last Updated 12 ಫೆಬ್ರುವರಿ 2024, 13:38 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಸರ್ಕಾರದಲ್ಲಿ ಅನುದಾನದ ಕೊರತೆ ಇಲ್ಲ. ಅಧಿಕಾರಿಗಳು ಜನರಿಗೆ ಸೌಲಭ್ಯ ಒದಗಿಸುವ ಕಾರ್ಯ ಮಾಡಬೇಕು. ಅದರಲ್ಲೂ ಕೊಳಚೆ ಪ್ರದೇಶಗಳಲ್ಲಿ ಯಾವುದೇ ಸೌಲಭ್ಯಗಳ ಕೊರತೆಯಾಗದಂತೆ ನೋಡಿಕೊಳ್ಳಬೇಕು. ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಶಿಫಾರಸು ಮಾಡಲಾಗುವುದು ಎಂದು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ, ಪೂರ್ವ ಕ್ಷೇತ್ರದ ಶಾಸಕರಾದ ಪ್ರಸಾದ ಅಬ್ಬಯ್ಯ ಅವರು ಹೇಳಿದರು.

ಇಲ್ಲಿನ ತಮ್ಮ ಗೃಹ ಕಚೇರಿಯಲ್ಲಿ ಸೋಮವಾರ ಹು–ಧಾ ಮಹಾನಗರ ಪಾಲಿಕೆ ಆಯುಕ್ತರ ಸಮ್ಮುಖದಲ್ಲಿ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಮುಖ್ಯಮಂತ್ರಿಗಳು ಇದೇ 24ರಂದು ಆಶ್ರಯ ಮನೆಗಳ ಲೋಕಾರ್ಪಣೆ ಮಾಡುವ ಬಗ್ಗೆ ಮಾಹಿತಿ ಇದೆ. ಇಲ್ಲಿನ ಮಂಟೂರು ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಆಶ್ರಯ ಮನೆಗಳ ಕಾಮಗಾರಿ ಇನ್ನು ಪೂರ್ಣಗೊಂಡಿಲ್ಲ. ಈಗಾಗಲೇ ಅನೇಕ ಬಾರಿ ಸೂಚನೆ ನೀಡಿದ್ದರೂ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಕಾಮಗಾರಿ ವಿಳಂಬವಾಗುತ್ತಲೇ ಇದೆ. ಇನ್ನು ಸಹಿಸಲಾಗದು. ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು. ಅಧಿಕಾರಿಗಳ ವಿರುದ್ಧವೂ ಸಹ ಕ್ರಮಕೈಗೊಳ್ಳಲಾಗುವುದು ಎಂದು ತರಾಟೆಗೆ ತೆಗೆದುಕೊಂಡರು.

ಶೀಘ್ರದಲ್ಲೆ ಮೊದಲ ಹಂತದ 1,300 ಮನೆಗಳನ್ನು ಪೂರ್ಣಗೊಳಿಸಬೇಕು. ಅವುಗಳಿಗೆ ಅವಶ್ಯವಿರುವ ರಸ್ತೆ, ವಿದ್ಯುತ್ ಸಂಪರ್ಕ ಮತ್ತು ನೀರು ಪೂರೈಕೆಗೆ ಮೊದಲ ಆದ್ಯತೆ ನೀಡಬೇಕು. ಸಮರೋಪಾದಿಯಲ್ಲಿ ಕಾಮಗಾರಿ ಕೈಗೊಂಡು ಫಲಾನುಭವಿಗಳಿಗೆ ಹಂಚಿಕೆಗೆ ಅನುಕೂಲ ಮಾಡಿಕೊಡಬೇಕೆಂದು ಸ್ಲಮ್ ಬೋರ್ಡ್ ಅಧಿಕಾರಿಗಳಿಗೆ ಸೂಚಿಸಿದರು.

₹ 80 ಕೋಟಿ ಅನುದಾನ:
ಪೂರ್ವ ಕ್ಷೇತ್ರದಲ್ಲಿ ಭವಿಷ್ಯದ ಯೋಜನೆ ಇಟ್ಟುಕೊಂಡು ಒಳಚರಂಡಿ ಸಮಸ್ಯೆ ಇನ್ಯಾವತ್ತು ತಲೆದೊರದಂತೆ ದೊಡ್ಡ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಸಿದ್ಧವಾಗಿದೆ. ಅಂದಾಜು ₹ 80 ಕೋಟಿ ಅನುದಾನದಲ್ಲಿ ಕ್ಷೇತ್ರದಾದ್ಯಂತೆ ಒಳಚರಂಡಿ ವ್ಯವಸ್ಥೆಗೆ ಸರ್ಕಾರ ಅಸ್ತು ಎಂದಿದ್ದು, ಶೀಘ್ರದಲ್ಲೇ ಟೆಂಡರ್ ಕರೆಯಲಾಗುವುದು ಎಂದು ಹೇಳಿದರು.

ಈ ಹಿಂದೆ ಕೈ ಬಿಡಲಾಗಿದ್ದ ಹಳೆ ದುರ್ಗದಬೈಲ್ ಮಾರುಕಟ್ಟೆ ಅಭಿವೃದ್ಧಿ ಯೋಜನೆಯನ್ನು ಮತ್ತೆ ಕೈಗೆತ್ತಿಕೊಳ್ಳಲಾಗುವುದು. ಪ್ರಸ್ತುತ ಕ್ರಿಯಾಯೋಜನೆ ಸಿದ್ಧಪಡಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ₹ 20 ಕೋಟಿ ವೆಚ್ಚದಲ್ಲಿ ಹೈಟೆಕ್ ಮಾರುಕಟ್ಟೆ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು. 

ಎಲ್ ಆಂಡ್ ಟಿ ಸಿಬ್ಬಂದಿ ಸೇವೆ ಅತೃಪ್ತಿ:

ನೀರು ಪೂರೈಕೆ ನಿರ್ವಹಣೆ ಹೊಣೆ ಹೊತ್ತಿರುವ ಎಲ್‌ ಆಂಡ್‌ ಟಿ ಕಂಪನಿಯ ಸಿಬ್ಬಂದಿ ನಗರದ ಜನರ ನೆಮ್ಮದಿಯನ್ನೇ ಹಾಳು ಮಾಡಿದ್ದಾರೆ. ಸಮರ್ಪಕ ನೀರು ಪೂರೈಸಲು ಹತ್ತಾರು ಬಾರಿ ಹೇಳಿದರೂ ಯಾವುದೇ ಸುಧಾರಣೆಯಾಗಿಲ್ಲ. ಇವರ ಸೇವೆ ನಮ್ಮ ಕ್ಷೇತ್ರಕ್ಕೆ ತೃಪ್ತಿಕರವಾಗಿಲ್ಲ. ಈ ಬಗ್ಗೆ ಉನ್ನತ ಅಧಿಕಾರಿಗಳಿಗೆ ಕೂಡಲೇ ದೂರು ಸಲ್ಲಿಸಿ ಇವರನ್ನು ಬೇರೆಡೆ ವರ್ಗಾವಣೆ ಮಾಡಲು ಕ್ರಮವಹಿಸಬೇಕೆಂದು ಪ್ರಸಾದ ಅಬ್ಬಯ್ಯ ಅವರು ಆಯುಕ್ತರಿಗೆ ಹೇಳಿದರು.

ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ, ಪಾಲಿಕೆ ಅಧೀಕ್ಷಕ ಅಭಿಯಂತರರಾದ ತಿಮ್ಮಪ್ಪ, ಹೆಸ್ಕಾಂ ಅಧೀಕ್ಷಕ ಅಭಿಯಂತರರಾದ ಎಸ್.ಎಸ್. ಜಂಗೀನ್, ಪಾಲಿಕೆ ವಲಯ ಆಯುಕ್ತರು, ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT