ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಂದು ಕೋಟಿ ಸದಸ್ಯತ್ವದ ಗುರಿ

ಬಿಜೆಪಿ ‘ಸಂಘಟನಾ ಪರ್ವ ಸದಸ್ಯತ್ವ ಅಭಿಯಾನ’ದಲ್ಲಿ ಶಾಸಕ ಜಗದೀಶ ಶೆಟ್ಟರ್
Last Updated 29 ಜೂನ್ 2019, 15:28 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಬಿಜೆಪಿ ದೇಶ ಹಾಗೂ ರಾಜ್ಯದಲ್ಲಿ ಅತಿ ಹೆಚ್ಚು ಜನರ ಸದಸ್ಯತ್ವ ಹೊಂದಿದ್ದು, ಈ ಬಾರಿ ರಾಜ್ಯದಲ್ಲಿ ಒಂದು ಕೋಟಿ ಸದಸ್ಯತ್ವದ ಗುರಿ ಇಟ್ಟುಕೊಳ್ಳಲಾಗಿದೆ’ ಎಂದು ಶಾಸಕ ಜಗದೀಶ ಶೆಟ್ಟರ್ ಹೇಳಿದರು.

ಹುಬ್ಬಳ್ಳಿಯಲ್ಲಿ ಶನಿವಾರ ನಡೆದ ಬಿಜೆಪಿಯ ‘ಸಂಘಟನಾ ಪರ್ವ ಸದಸ್ಯತ್ವ ಅಭಿಯಾನ’ದಲ್ಲಿ ಮಾತನಾಡಿದ ಅವರು, ‘ಬಿಜೆಪಿ ವಿಶ್ವದಲ್ಲೇ ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ರಾಜಕೀಯ ಪಕ್ಷವಾಗಿದೆ. ಕಳೆದ ವರ್ಷ ನಡೆದ ಅಭಿಯಾನದಲ್ಲಿ ದೇಶದಲ್ಲಿ 11 ಕೋಟಿ ಹಾಗೂ ರಾಜ್ಯದಲ್ಲಿ 83 ಲಕ್ಷ ಮಂದಿ ಮಿಸ್ ಕಾಲ್ ನೀಡುವ ಮೂಲಕ ಪಕ್ಷದ ಸದಸ್ಯರಾಗಿದ್ದರು’ ಎಂದರು.

‘ಈ ವರ್ಷ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಒಟ್ಟು 22 ಕೋಟಿ ಮತದಾರರು ಮತ ಹಾಕಿದ್ದಾರೆ. ಅಂದರೆ, ನಮ್ಮ ಸದಸ್ಯತ್ವಕ್ಕಿಂತಲೂ ಹೆಚ್ಚಿನ ಮತಗಳು ಬಂದಿವೆ. ಅಂದರೆ, ಜನರು ಪ್ರಬಲ ಪಕ್ಷ ಹಾಗೂ ನಾಯಕತ್ವಕ್ಕೆ ಬೆಂಬಲ ಸೂಚಿಸಿದ್ದಾರೆ. ಅದರ ಫಲವಾಗಿಯೇ ಬಿಜೆಪಿ ಸ್ವಂತ ಶಕ್ತಿಯಿಂದ ಈ ಬಾರಿ ಕೇಂದ್ರದಲ್ಲಿ ಅಧಿಕಾರ ಹಿಡಿದಿದೆ’ ಎಂದು ಹೇಳಿದರು.

‘ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಅಮಿತ್ ಶಾ ಅವರ ಸೂಚನೆಯಂತೆ, ಜುಲೈ 6ರಿಂದ ಆಗಸ್ಟ್ 11ರವರೆಗೆ ಅಭಿಯಾನ ನಡೆಯಲಿದೆ. ಹಾಗಾಗಿ, ಈ ಬಾರಿ ಹಿಂದಿನ ಅಭಿಯಾನಕ್ಕಿಂತಲೂ ಹೆಚ್ಚು ಮಂದಿಯನ್ನು ಪಕ್ಷದ ಸದಸ್ಯರನ್ನಾಗಿ ಮಾಡಬೇಕು. ಆ ಮೂಲಕ, ಪಕ್ಷವನ್ನು ತಳಮಟ್ಟದಿಂದ ಸಂಘಟಿಸಬೇಕು’ ಎಂದು ಕರೆ ನೀಡಿದರು.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಸದಸ್ಯತ್ವ ಅಭಿಯಾನದ ಸಂಚಾಲಕರೂ ಆಗಿರುವ ವಿಧಾನ ಪರಿಷತ್ ಸದಸ್ಯ ಎನ್‌. ರವಿಕುಮಾರ್ ಮಾತನಾಡಿ, ‘ಕಳೆದ ಎರಡೂ ಚುನಾವಣೆಗಳಲ್ಲಿ ಅಧಿಕೃತ ವಿರೋಧ ಪಕ್ಷದ ಸ್ಥಾನಮಾನ ಪಡೆಯಲಾಗದ ಸ್ಥಿತಿಯನ್ನು ಕಾಂಗ್ರೆಸ್ ತಲುಪಿದೆ’ ಎಂದು ವ್ಯಂಗ್ಯವಾಡಿದರು.

‘ಸಂಸತ್ತಿನಲ್ಲಿ ಬಿಜೆಪಿಯನ್ನು ಎದುರಿಸಲು ಕಾಂಗ್ರೆಸ್‌ನಲ್ಲಿ ಸಮರ್ಥ ಸಂಸದೀಯಪಟುಗಳೇ ಇಲ್ಲ. ರಾಹುಲ್ ಗಾಂಧಿ ಅವರು ಪಕ್ಷದ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಲು ಹೆದರುತ್ತಿದ್ದಾರೆ. ಇದೆಲ್ಲವನ್ನು ಗಮನಿಸಿದರೆ ದೇಶ ಕಾಂಗ್ರೆಸ್‌ಮುಕ್ತವಾಗುವ ದಿನಗಳು ದೂರವಿಲ್ಲ’ ಎಂದು ಹೇಳಿದರು.

ಶಾಸಕರಾದ ಅರವಿಂದ ಬೆಲ್ಲದ, ಶಂಕರಪಾಟೀಲ ಮುನೇನಕೊಪ್ಪ, ಅಮೃತ ದೇಸಾಯಿ, ಬಿಜೆಪಿ ಮಹಾನಗರ ಘಟಕದ ಅಧ್ಯಕ್ಷ ನಾಗೇಶ ಕಲಬುರ್ಗಿ, ಗ್ರಾಮೀಣ ಘಟಕದ ಅಧ್ಯಕ್ಷ ಈರಣ್ಣ ಜಡಿ, ಜಿಲ್ಲಾ ಪಂಚಾಯ್ತಿ ಸದಸ್ಯೆ ಚೈತ್ರಾ ಶಿರೂರ, ಮುಖಂಡರಾದ ವೀರಭದ್ರಪ್ಪ ಹಾಲಹರವಿ, ಮೋಹನ ಲಿಂಬಿಕಾಯಿ, ಲಿಂಗರಾಜ ಪಾಟೀಲ, ಎಂ.ಆರ್. ಪಾಟೀಲ, ಸುಧೀರ ಸರಾಫ, ಡಿ.ಕೆ. ಚವ್ಹಾಣ, ದತ್ತಮೂರ್ತಿ ಕುಲಕರ್ಣಿ, ಹನುಮಂತಪ್ಪ ದೊಡ್ಡಮನಿ, ತಿಪ್ಪಣ್ಣ ಮಜ್ಜಗಿ, ರವಿ ನಾಯಕ್ ಮುಂತಾದವರು ಇದ್ದರು.

‘ಕಾಂಗ್ರೆಸ್ ಮುಕ್ತ ರಾಜ್ಯಕ್ಕೆ ವೇದಿಕೆ ಸಿದ್ಧ’
‘ರಾಜ್ಯದಲ್ಲಿ ಬಿಜೆಪಿ ಸದಸ್ಯತ್ವದ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. ಅದರ ಫಲವಾಗಿ, ಕಳೆದ ಚುನಾವಣೆಯಲ್ಲಿ ರಾಜ್ಯದಲ್ಲಿ 25 ಸೀಟುಗಳನ್ನು ಗೆದ್ದಿದ್ದೇವೆ. ಜತೆಗೆ, ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಮಂಡ್ಯದಲ್ಲಿ ಜಯ ಗಳಿಸಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ಕೇವಲ ಒಂದು ಸ್ಥಾನಕ್ಕಷ್ಟೇ ಸೀಮಿತವಾಗಿವೆ. ಕಾಂಗ್ರೆಸ್ ಮುಕ್ತ ಕರ್ನಾಟಕಕ್ಕೆ ವೇದಿಕೆ ಸಿದ್ಧವಾಗುತ್ತಿದ್ದು, ಮುಂದಿನ ಚುನಾವಣೆಯಲ್ಲಿ ಅದು ಸಾಬೀತಾಗಲಿದೆ’ ಎಂದು ಶಾಸಕ ಜಗದೀಶ ಶೆಟ್ಟರ್ ಹೇಳಿದರು.

‘ವೋಟು ಮಾತ್ರ ಮೋದಿಗೆ, ಕೆಲಸಕ್ಕೆ ನಾವಾ’ ಎಂದು ಪ್ರತಿಭಟನಾಕಾರರಿಗೆ ಗದರಿರುವ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಸಿ.ಎಂ ಸ್ಥಾನದಲ್ಲಿರಲು ಅನರ್ಹರು. ಅನೇಕ ಭಾಗ್ಯಗಳನ್ನು ಕೊಟ್ಟರೂ ಜನ ಮೋದಿಗೆ ವೋಟು ಹಾಕಿದ್ದಾರೆ ಎಂದು ಪ್ರಧಾನಿಯನ್ನು ಟೀಕಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಾಮಾನ್ಯ ಜ್ಞಾನವೇ ಇಲ್ಲ. ಅವರ ಮಾತುಗಳು ಜನಾಭಿಪ್ರಾಯಕ್ಕೆ ವಿರುದ್ಧವಾಗಿವೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT