ಶನಿವಾರ, ಏಪ್ರಿಲ್ 1, 2023
23 °C

ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಚುನಾವಣೆ: ಪಕ್ಷಗಳಲ್ಲಿ ಸದ್ದಿಲ್ಲದೆ ಸಿದ್ಧತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ವಾರ್ಡ್‌ಗಳ ಸಂಖ್ಯೆಯನ್ನು 67 ರಿಂದ 82ಕ್ಕೆ ಹೆಚ್ಚಳ, ಮೀಸಲಾತಿ ನಿಗದಿ, ಮತದಾರರ ಪಟ್ಟಿ ಸಿದ್ಧತೆ ಮೂಲಕ ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ನಡೆಸುವತ್ತ ಆಯೋಗ ಒಂದೊಂದೇ ಹೆಜ್ಜೆ ಇಡತೊಡಗಿದೆ. ಅದರ ಬೆನ್ನ ಹಿಂದೆಯೇ ರಾಜಕೀಯ ಪಕ್ಷಗಳಲ್ಲಿಯೂ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ವಾರ್ಡ್‌ ವಿಂಗಡಣೆ, ಮೀಸಲಾತಿ ನಿಗದಿ, ಮತದಾರರ ಪಟ್ಟಿ ಸಿದ್ಧಪಡಿಸುವಲ್ಲಿ ತಾರತಮ್ಯ ಮಾಡಲಾಗಿದೆ. ರಾಜ್ಯದಲ್ಲಿ ಆಡಳಿತದಲ್ಲಿರುವ ಬಿಜೆಪಿ ಮುಖಂಡರ ಅನುಕೂಲಕ್ಕೆ ತಕ್ಕಂತೆ ಮಾಡಿಕೊಳ್ಳಲಾಗಿದೆ ಎಂದು ಕಾಂಗ್ರೆಸ್‌, ಜೆಡಿಎಸ್‌, ಎಎಪಿ ಆಪಾದನೆ ಮಾಡಿವೆ. ಹಾಗೆಯೇ ಚುನಾವಣೆ ಸಿದ್ಧತೆಯನ್ನೂ ಮಾಡಿಕೊಳ್ಳುತ್ತಿವೆ.

ಪಾಲಿಕೆಯಲ್ಲಿ ಹತ್ತು ವರ್ಷಗಳಿಂದ ಅಧಿಕಾರ ನಡೆಸುತ್ತಿರುವ ಬಿಜೆಪಿಯು, ಮತ್ತೊಮ್ಮೆ ಅಧಿಕಾರ ಹಿಡಿಯಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಅಧಿಕಾರದಿಂದ ವಂಚಿತವಾಗಿರುವ ಕಾಂಗ್ರೆಸ್‌ ಕೂಡ, ಆಡಳಿತ ವಿರೋಧಿ ಅಲೆಯನ್ನು ಮೆಟ್ಟಿಲಾಗಿಸಿಕೊಂಡು ಮೇಯರ್‌ ಸ್ಥಾನ ಗಿಟ್ಟಿಸಿಕೊಳ್ಳುವ ಗುರಿ ಹೊಂದಿದೆ.

ಪಾಲಿಕೆಯಲ್ಲಿ ಎಂಟರಿಂದ ಹತ್ತು ಸ್ಥಾನಗಳನ್ನು ಗೆದ್ದುಕೊಳ್ಳುತ್ತಿದ್ದ ಜೆಡಿಎಸ್‌ನಲ್ಲಿ ಉತ್ಸಾಹದ ಕೊರತೆ ಎದ್ದು ಕಾಣುತ್ತಿದೆ. ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷರಾಗಿದ್ದ ರಾಜಣ್ಣ ಕೊರವಿ, ಜೆಡಿಎಸ್‌ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಪಕ್ಷ ಮುನ್ನೆಡುಸುವವರ ಕೊರತೆ ಕಾಣುತ್ತಿದೆ.

ಬಿಜೆಪಿಯಯಲ್ಲಿ ಒಂದೊಂದು ವಾರ್ಡ್‌ನಲ್ಲಿ ನಾಲ್ಕೈದು ಮಂದಿ ಆಕಾಂಕ್ಷಿಗಳಿದ್ದಾರೆ. ಮೀಸಲಾತಿ ಅನುಕೂಲ ಇಲ್ಲದವರೂ ಪಕ್ಕದ ವಾರ್ಡ್‌ಗಳತ್ತಲೂ ಗಮನ ಹರಿಸಿದ್ದಾರೆ. ಟಿಕೆಟ್‌ಗಾಗಿ ತೀವ್ರ ಪೈಪೋಟಿ ಏರ್ಪಟ್ಟಿದೆ. ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿರುವುದು ಪಕ್ಷದ ನಾಯಕರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಟಿಕೆಟ್‌ ಹಂಚಿಕೆಯೇ ದೊಡ್ಡ ಸವಾಲಾಗಿದೆ.

ಮೀಸಲಾತಿ, ಮತದಾರರ ಪಟ್ಟಿಯಲ್ಲಿ ಅನ್ಯಾಯ ಮಾಡಲಾಗಿದೆ ಎಂಬ ಆರೋಪ ಮಾಡುತ್ತಿರುವ ಕಾಂಗ್ರೆಸ್‌ ಸಹ ಚುನಾವಣೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ‘ಈಗಾಗಲೇ ಸಭೆ ಮಾಡಲಾಗಿದೆ. ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ತೈಲ ಬೆಲೆ ಏರಿಕೆ ವಿರುದ್ಧ ಹೋರಾಟ ಮಾಡುವ ಮೂಲಕ ಜನರಿಗೆ ಆಗುತ್ತಿರುವ ತೊಂದರೆಯನ್ನು ಸರ್ಕಾರದ ಗಮನಕ್ಕೆ ತರುವ ಯತ್ನ ಮಾಡಲಾಗಿದೆ’ ಎಂದು ಮಹಾನಗರ ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಅಲ್ತಾಫ ಹಳ್ಳೂರು ಹೇಳಿದರು.

ಆಮ್‌ ಆದ್ಮಿ ಪಾರ್ಟಿ, ಅಖಿಲ ಭಾರತ ಮಜಲೀಸ್‌ ಎ– ಇತ್ತೆಹಾದುಲ್‌ ಮುಸ್ಲಿಮೀನ್‌ ಪಕ್ಷಗಳೂ ಪಾಲಿಕೆ ಚುನಾವಣೆಗೆ ಸೂಕ್ತ ಅಭ್ಯರ್ಥಿಗಳೊಂದಿಗೆ ಚುನಾವಣೆಗೆ ಧುಮಕಲು ಸಿದ್ಧತೆ ಮಾಡಿಕೊಳ್ಳುತ್ತಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು