ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರವಾಡ | ರಾಜಕೀಯ ಉದ್ದೇಶಕ್ಕೆ ‘ಮಹದಾಯಿ‘ ಬಳಕೆ: ಆರೋಪ

ರೈತ ಸೇನಾ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷ ವೀರೇಶ ಸೊಬರದಮಠ ಸ್ವಾಮೀಜಿ
Last Updated 26 ಜೂನ್ 2022, 7:44 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಮಹದಾಯಿ ಯೋಜನೆ ಅನುಷ್ಠಾನ ವಿಚಾರದಲ್ಲಿ ಇಲ್ಲದ ನೆ‍ಪಗಳನ್ನು ಹೇಳುವ ಮೂಲಕ ರಾಜ್ಯ ಸರ್ಕಾರವು ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ. ಯೋಜನೆಯನ್ನು ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳುತ್ತಿದೆ’ ಎಂದುರೈತ ಸೇನಾ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷ ವೀರೇಶ ಸೊಬರದಮಠ ಸ್ವಾಮೀಜಿ ಆರೋಪಿಸಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಕೇಂದ್ರ ಜಲಸಂಪನ್ಮೂಲ ಇಲಾಖೆಗೆ ಇದುವರೆಗೆ ಸಮರ್ಪಕ ದಾಖಲೆ ನೀಡಿಲ್ಲ. ಮಹದಾಯಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಬಸವರಾಜ ಬೊಮ್ಮಾಯಿ ಅವರೇ ಇದೀಗ ಮುಖ್ಯಮಂತ್ರಿ ಆಗಿದ್ದಾರೆ. ಆದರೆ, ಯೋಜನೆ ಅನುಷ್ಠಾನ ಮಾಡಲು ಆಸಕ್ತಿ ತೋರುತ್ತಿಲ್ಲ’ ಎಂದರು.

‘ಮಹದಾಯಿ ಯೋಜನಾ ವೆಚ್ಚ ಆರಂಭದಲ್ಲಿ ₹ 750 ಕೋಟಿ ಇತ್ತು. ಇದೀಗ ₹ 2 ಸಾವಿರ ಕೋಟಿಗೆ ತಲುಪಿದೆ. ಕೇವಲ ₹ 50 ಕೋಟಿ ವೆಚ್ಚದಲ್ಲಿ ಯೋಜನೆ ಅನುಷ್ಠಾನ ಮಾಡಬಹುದಾಗಿದೆ. ಈ ಭಾಗದ ಸಂಸದ ಹಾಗೂ ಕೇಂದ್ರ ಸರ್ಕಾರದಲ್ಲಿ ಸಚಿವರೂ ಆಗಿರುವ ಪ್ರಲ್ಹಾದ ಜೋಶಿ ಅವರು ಕೇಂದ್ರ ಜಲ ಆಯೋಗದ (ಸಿಡಬ್ಲುಸಿ) ಅನುಮತಿ ಪಡೆಯುವಲ್ಲಿ ಸಹಕರಿಸಬೇಕಾಗಿತ್ತು. ಕೇಂದ್ರ ಜಲಸಂಪನ್ಮೂಲ ಇಲಾಖೆ ಜೊತೆ ಸಮನ್ವಯ ಸಾಧಿಸಿ ಇಷ್ಟೊತ್ತಿಗೆ ಯೋಜನೆ ಪೂರ್ಣಗೊಳಿಸಬೇಕಿತ್ತು. ಆದರೆ, ಅವರು ಕೂಡ ಆಸಕ್ತಿ ತೋರುತ್ತಿಲ್ಲ’ ಎಂದು ಆರೋಪಿಸಿದರು.

‘ಮಹದಾಯಿ ಯೋಜನೆ ಅನುಷ್ಠಾನಕ್ಕಾಗಿ ಆಗ್ರಹಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಭಾನುವಾರ ಮನವಿ ಸಲ್ಲಿಸಲಾಗುವುದು’ ಎಂದು ಹೇಳಿದರು.

ಸಿಬಿಐ ತನಿಖೆ ನಡೆಸಿ: ಬೆಣ್ಣೆಹಳ್ಳ ಏತ ನೀರಾವರಿಯಲ್ಲಿ ಅಕ್ರಮ ಕಂಡುಬಂದಿದೆ. ಮಲಪ್ರಭಾ ಅಚ್ಚುಕಟ್ಟು ಹಾಗೂ ಕಾಲುವೆ ನಿರ್ಮಾಣದಲ್ಲಿ ಕಳಪೆ ಕಾಮಗಾರಿ ನಡೆದಿದೆ. ಇಷ್ಟೇ ಅಲ್ಲದೇ, ಕರ್ನಾಟಕ ನೀರಾವರಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ. ಇದರ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಮುಖ್ಯಮಂತ್ರಿ ಅವರನ್ನು ಆಗ್ರಹಿಸಿದರು.

ಕರ್ನಾಟಕ ನೀರಾವರಿ ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕರ ಕಚೇರಿ ಬೆಂಗಳೂರಿನಲ್ಲಿದ್ದು, ಕಚೇರಿಯನ್ನು ಧಾರವಾಡಕ್ಕೆ ಸ್ಥಳಾಂತರಿಸಬೇಕು ಎಂದು ಹಲವು ಬಾರಿ ಮನವಿ ಮಾಡಲಾಗಿದೆ. ಆದರೆ, ಇಲಾಖೆಯನ್ನು ಅವೈಜ್ಞಾನಿಕವಾಗಿ ದಾವಣಗೆರೆಗೆ ಸ್ಥಳಾಂತರ ಮಾಡಲಾಗುತ್ತಿದೆ. ನಿಗಮವು 22 ಜಿಲ್ಲೆಗಳ ವ್ಯಾಪ್ತಿಗೆ ಒಳಪಟ್ಟಿದೆ. ದಾವಣಗೆರೆ ನಿಗಮದ ವ್ಯಾಪ್ತಿಯಲ್ಲಿ ಇಲ್ಲ. ಧಾರವಾಡದಲ್ಲೇ ನಿಗಮದ ಕಚೇರಿ ಆರಂಭಿಸಬೇಕು ಎಂದು ಒತ್ತಾಯಿಸಿದರು.

ಮಲ್ಲಣ್ಣ ಆಲೇಕರ್‌, ಗುರುರಾಯನಗೌಡ್ರ, ಮಂಜಯ್ಯಸ್ವಾಮಿ ಅರವಟಗಿಮಠ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT