ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಣ ಕ್ಷೇತ್ರ ಸದೃಢಕ್ಕೆ ಆದ್ಯತೆ: ಜಗದೀಶ ಶೆಟ್ಟರ್

ಶಾಲಾ ಕೊಠಡಿ, ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಸಚಿವ ಶೆಟ್ಟರ್‌
Last Updated 17 ಸೆಪ್ಟೆಂಬರ್ 2020, 16:08 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಶಿಕ್ಷಣ ಕ್ಷೇತ್ರ ಸದೃಢವಾದರೆ ಮಾತ್ರ ದೇಶದ ಪ್ರಗತಿ ಸಾಧ್ಯ. ಆದ್ದರಿಂದ ಈ ಕ್ಷೇತ್ರದ ಸಮಗ್ರ ಬೆಳವಣಿಗೆಗೆ ಆದ್ಯತೆ ಕೊಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್‌ ಹೇಳಿದರು.

ಹುಬ್ಬಳ್ಳಿ ಗ್ರಾಮೀಣ ತಾಲ್ಲೂಕಿನ ಇಂಗಳಹಳ್ಳಿ ಗ್ರಾಮದಲ್ಲಿ ಗುರುವಾರ ₹1.22 ಕೋಟಿ ವೆಚ್ಚದಲ್ಲಿ 10 ಶಾಲಾ ಕೊಠಡಿಗಳ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ‘ಮಕ್ಕಳು ವಿದ್ಯಾವಂತರಾಗಬೇಕು ‌ಎನ್ನುವ ಉದ್ದೇಶದಿಂದ ಸರ್ಕಾರ, ಶಾಲೆಗಳಿಗೆ ಮೂಲಸೌಲಭ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳುತ್ತಿದೆ’ ಎಂದರು.

‘ಮಲಪ್ರಭಾ ನದಿಯಿಂದ ಜಿಲ್ಲೆಯ ಎಲ್ಲ ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆಗೆ ಯೋಜನೆ ಸಿದ್ಧಪಡಿಸಲಾಗಿದೆ. ನವಲಗುಂದ ತಾಲ್ಲೂಕಿನ ತುಪ್ಪರಿಹಳ್ಳ ಹಾಗೂ ಬೆಣ್ಣೆಹಳ್ಳದಿಂದ ಮೇಲಿಂದ ಮೇಲೆ ಆಗುತ್ತಿರುವ ಪ್ರವಾಹ ಸಮಸ್ಯೆಗೆ ಶಾಶ್ವತ ಪರಿಹಾರ ಕೈಗೊಳ್ಳಲಾಗುವುದು. ಇದಕ್ಕಾಗಿ ರಚಿಸಲಾಗಿದ್ದ ಪರಮಶಿವಯ್ಯ ಸಮಿತಿ ವರದಿ ಆಧರಿಸಿ ಯೋಜನೆ ರೂಪಿಸಲಾಗುವುದು’ ಎಂದರು.

ಆಕ್ಸಿಜನ್‌ ಹೆಚ್ಚಳಕ್ಕೆ ಕ್ರಮ: ಕೋವಿಡ್‌ 19 ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಹೆಚ್ಚು ಆಕ್ಸಿಜನ್‌ ಬೇಕಿರುವ ಕಾರಣ ಕೈಗಾರಿಕೆಗಳಿಗೆ ಆಕ್ಸಿಜನ್ ಕೊರತೆ ಆಗಿದೆ. ಜಿಲ್ಲೆಯಲ್ಲಿ ಆಕ್ಸಿಜನ್‌ ಪ್ರಮಾಣ ಆಸ್ಪತ್ರೆ ಮತ್ತು ಕೈಗಾರಿಕೆಗಳಿಗೆ ಸಮತೋಲನದಲ್ಲಿ ಸಿಗುವಂತೆ ನೋಡಿಕೊಳ್ಳಲು ಜಿಲ್ಲಾಧಿಕಾರಿಗೆ ಸೂಚಿಸಿದ್ದೇನೆ ಎಂದು ಶೆಟ್ಟರ್‌ ತಿಳಿಸಿದರು.

‘ಲಾಕ್‌ಡೌನ್‌ ತೆರವಾದ ಬಳಿಕ ಕೈಗಾರಿಕಾ ಕ್ಷೇತ್ರ ಚೇತರಿಸಿಕೊಳ್ಳುತ್ತಿದೆ. ಇನ್ವೆಸ್ಟ್‌ ಕರ್ನಾಟಕ ಹುಬ್ಬಳ್ಳಿಗೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಇದೇ ನವೆಂಬರ್‌ನಲ್ಲಿ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಜಾಗತಿಕ ಹೂಡಿಕೆದಾರರ ಸಮಾವೇಶವನ್ನು ಕೋವಿಡ್‌ ಕಾರಣಕ್ಕೆ ಮುಂದೂಡಲಾಗಿದೆ. ಸೂಕ್ತ ಸಮಯ ನೋಡಿಕೊಂಡು ದಿನಾಂಕ ನಿರ್ಧರಿಸಲಾಗುವುದು. ಕಿಮ್ಸ್‌ನಲ್ಲಿ ಜಯದೇವ ಆಸ್ಪತ್ರೆಯ ಘಟಕ ಆರಂಭಿಸುವ ಬಗ್ಗೆಯೂ ಪ್ರಯತ್ನ ನಡೆಯುತ್ತಿದೆ’ ಎಂದರು.

ಜಿಲ್ಲಾ ಪಂಚಾಯ್ತಿ ಸದಸ್ಯೆ ಚೈತ್ರಾ ಶಿರೂರ, ತಾಲ್ಲೂಕು ಪಂಚಾಯ್ತಿ ಸದಸ್ಯ ಬಸಪ್ಪ ಬೀರಣ್ಣವರ, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್‌ ಎಸ್.ಬಿ.ಚೌಡಯ್ಯನವರ ಇದ್ದರು.

ರಸ್ತೆ ಕಾಮಗಾರಿಗೆ ಚಾಲನೆ: ಬ್ಯಾಹಟ್ಟಿ ಗ್ರಾಮದಲ್ಲಿ ₹4.5 ಕೋಟಿ ವೆಚ್ಚದ 4 ಕಿ.ಮೀ. ರಸ್ತೆ ಕಾಮಗಾರಿಗೆ ಶೆಟ್ಟರ್‌ ಭೂಮಿಪೂಜೆ ನೆರವೇರಿಸಿದರು. ಶಾಸಕ ಶಂಕರ ಪಾಟೀಲ ಮುನೇನಕೊಪ್ಪ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಎಚ್.ಜಿ.ಗುಂಡೆಳ್ಳಿ, ಸೋಮಶೇಖರ ನೂಲ್ವಿ, ಸಿ.ವಿ. ಪಾಟೀಲ ಪಾಲ್ಗೊಂಡಿದ್ದರು.

ಗ್ರಾಮಸ್ಥರ ಬೇಡಿಕೆ ಈಡೇರಿಸಿದ್ದೇನೆ: ಮುನೇನಕೊಪ್ಪ
ಶಾಲಾ ಭೂಮಿಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಶಂಕರಪಾಟೀಲ ಮುನೇನಕೊಪ್ಪ ‘ಬಡ ಹಾಗೂ ರೈತ ಕುಟುಂಬದ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಅವರು ದೇಶದ ಭವಿಷ್ಯವಾಗಿದ್ದು, ಸರಿಯಾದ ಶೈಕ್ಷಣಿಕ ಸೌಲಭ್ಯಗಳನ್ನು ಕಲ್ಪಿಸುವುದು ನಮ್ಮ ಕರ್ತವ್ಯ’ ಎಂದರು.

‘ಆರು ತಿಂಗಳಲ್ಲಿ ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 201 ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಪಣ ತೊಟ್ಟಿದ್ದೇನೆ’ ಎಂದು ಹೇಳಿದರು.

‘ಹಿಂದೆ ಇಂಗಳಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ್ದಾಗ ಧಾರವಾಡ ಮುರುಘಾಮಠದ ಮೃತ್ಯುಂಜಯ ಶ್ರೀಗಳು ಕಲಿತ ಶಾಲೆಯಿದು. ಈ ಶಾಲೆಗೆ ಕಟ್ಟಡ ನಿರ್ಮಿಸಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದರು. ಅದನ್ನು ಈಡೇರಿಸಿದ್ದೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT