ಭಾನುವಾರ, ಏಪ್ರಿಲ್ 18, 2021
31 °C
ಎಐಡಿಎಸ್‌ಓ ಹಾಗೂ ದಲಿತ ಮಹಿಳಾ ಒಕ್ಕೂಟದ ಆಗ್ರಹ

ಅರ್ಜಿ ಹಾಕಿದ ಪ್ರತಿಯೊಬ್ಬರಿಗೂ ಹಾಸ್ಟೆಲ್ ಕೊಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಧಾರವಾಡ: ಸರ್ಕಾರಿ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಹಾಕಿದ ಪ್ರತಿಯೊಬ್ಬ ವಿದ್ಯಾರ್ಥಿಗೂ ಸೌಲಭ್ಯ ಒದಗಿಸಬೇಕು. ಜತೆಗೆ ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಎಐಡಿಎಸ್‌ಒ ಮತ್ತು ದಲಿತ ಮಹಿಳಾ ಒಕ್ಕೂಟ ಜಂಟಿಯಾಗಿ ಮಂಗಳವಾರ ಪ್ರತಿಭಟನೆ ನಡೆಸಿದವು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಒಕ್ಕೂಟದ ರಾಜ್ಯ ಸಂಚಾಲಕಿ ಗೌರಮ್ಮ ಕರೆಪ್ಪನವರ, ‘ಶಿಕ್ಷಣಕ್ಕೆ ಹೆಸರಾದ ಧಾರವಾಡಕ್ಕೆ ಬೇರೆ ಊರುಗಳಿಂದ ವಿದ್ಯಾರ್ಥಿಗಳು ಬರುತ್ತಾರೆ. ಹೀಗೆ ಬರುವ ಬಹುತೇಕರು ಆರ್ಥಿಕವಾಗಿ ಹಿಂದುಳಿದವರಾಗಿದ್ದು, ಸರ್ಕಾರಿ ವಿದ್ಯಾರ್ಥಿ ನಿಲಯಗಳನ್ನೇ ಅವಲಂಬಿಸಿದ್ದಾರೆ. ಆದರೆ ಅದು ಸಾಧ್ಯವಾಗುತ್ತಿಲ್ಲ. ಹೀಗಾಗಿ ದುಡಿದು ಬಾಡಿಗೆ ರೂಮಿನಲ್ಲಿದ್ದು ಓದುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲವರಿಗೆ ವಿದ್ಯಾರ್ಥಿ ನಿಲಯ ಸಿಗದೆ ಊರಿಗೆ ಮರಳುತ್ತಿದ್ದಾರೆ. ಹೀಗಾಗಿ ಅರ್ಜಿ ಹಾಕಿದ ಪ್ರತಿಯೊಬ್ಬರಿಗೂ ವಿದ್ಯಾರ್ಥಿ ನಿಲಯದಲ್ಲಿ ಅವಕಾಶ ನೀಡಬೇಕು’ ಎಂದು ಒತ್ತಾಯಿಸಿದರು.

ಎಐಡಿಎಸ್‌ಒ ಜಿಲ್ಲಾ ಜಂಟಿ ಕಾರ್ಯದರ್ಶಿ ಮಹಾಂತೇಶ ಬಿಳೂರ ಮಾತನಾಡಿ, ‘ಈ ದೇಶದಲ್ಲಿ ಯಾವುದೇ ಪ್ರದೇಶದಲ್ಲಿ ವಿದ್ಯಾರ್ಥಿ ಕಲಿಯಬಯಸಿದರೂ ಅವರಿಗೆ ಮೂಲಸೌಕರ್ಯ ಒದಗಿಸಿಕೊಡುವುದು ಸರ್ಕಾರದ ಜವಾಬ್ದಾರಿಯಾಗಿದೆ. ಎಲ್ಲಾ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿ ನಿಲಯ ಸಿಗದಿರುವುದು ಒಂದೆಡೆಯಾದರೆ, ಇರುವ ವಿದ್ಯಾರ್ಥಿ ನಿಲಯದಲ್ಲಿ ಮೂಲಸೌಕರ್ಯಗಳ ಕೊರತೆ ಇರುವುದು ಮತ್ತೊಂದು ರೀತಿಯ ಸಮಸ್ಯೆಯಾಗಿದೆ. ಈ ಸಮಸ್ಯೆಗಳನ್ನು ಸರ್ಕಾರ ಕೂಡಲೇ ಪರಿಹರಿಸಬೇಕು’ ಎಂದು ಒತ್ತಾಯಿಸಿದರು.

‘ಶಾಲಾ ಕಾಲೇಜು ಆರಂಭವಾದ ದಿನದಿಂದಲೇ ವಿದ್ಯಾರ್ಥಿನಿಲಯ ಸೌಲಭ್ಯ ಒದಗಿಸಬೇಕು. ಅಲ್ಲಿ ಗುಣಮಟ್ಟದ ಆಹಾರ, ಶುದ್ಧ ಕುಡಿಯುವ ನೀರು, ಸ್ವಂತ ಕಟ್ಟಡದಂಥ ಮೂಲಸೌಕರ್ಯ ಒದಗಿಸಬೇಕು. ವಿದ್ಯಾರ್ಥಿ ವೇತನವನ್ನು ಆಯಾ ಶೈಕ್ಷಣಿಕ ವರ್ಷವೇ ಬಿಡುಗಡೆ ಮಾಡಬೇಕು’ ಎಂಬ ಬೇಡಿಕೆಗಳನ್ನು ಸಲ್ಲಿಸಿದರು.

ಸಿಂಧೂ ಕೌದಿ, ರಣಜೀತ್ ಧೂಪದ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.