ಹತ್ತು ವರ್ಷಕ್ಕೂ ಹೆಚ್ಚು ಕಾಲ ಇದ್ದವರಿಗೆ ಹಳ್ಳಿಗಾಡಿಗೆ ವರ್ಗಾವಣೆ

7
ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಮೇಜರ್ ಸರ್ಜರಿ

ಹತ್ತು ವರ್ಷಕ್ಕೂ ಹೆಚ್ಚು ಕಾಲ ಇದ್ದವರಿಗೆ ಹಳ್ಳಿಗಾಡಿಗೆ ವರ್ಗಾವಣೆ

Published:
Updated:

ಧಾರವಾಡ: ಸಾರ್ವಜನಿಕ ಶಿಕ್ಷಣ ಇಲಾಖೆಯ ವಾಯವ್ಯ ಕರ್ನಾಟಕ ಶೈಕ್ಷಣಿಕ ವಲಯ ವ್ಯಾಪ್ತಿಯ ಕಚೇರಿಯಲ್ಲಿ ಕನಿಷ್ಠ ಹತ್ತು ವರ್ಷಕ್ಕೂ ಹೆಚ್ಚು ಕಾಲ ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಒಟ್ಟು 27 ಸಿಬ್ಬಂದಿಯನ್ನು ಆಡಳಿತಾತ್ಮಕ ದೃಷ್ಟಿಯಿಂದ ವರ್ಗಾವಣೆ ಮಾಡಿ ಹೆಚ್ಚುವರಿ ಆಯುಕ್ತ ಮೇಜರ್ ಸಿದ್ದಲಿಂಗಯ್ಯ ಹಿರೇಮಠ ಆದೇಶ ಹೊರಡಿಸಿದ್ದಾರೆ.

ವಿಜಯಪುರ, ಬಾಗಲಕೋಟೆ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಗದಗ, ಧಾರವಾಡ, ಚಿಕ್ಕೋಡಿ ಹಾಗೂ ಶಿರಸಿ ಶೈಕ್ಷಣಿಕ ಜಿಲ್ಲೆಗಳ ಎಲ್ಲಾ ಡಿಡಿಪಿಐ, ಡಯಟ್, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಹಾಗೂ ನಗರದ ಆಯುಕ್ತ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 9 ಪ್ರಥಮ ದರ್ಜೆ ಸಹಾಯಕರು, 11 ದ್ವಿತೀಯ ದರ್ಜೆ ಸಹಾಯಕರನ್ನು ಈ ಕ್ಷೇತ್ರ ವ್ಯಾಪ್ತಿಯ ಹಳ್ಳಿಗಾಡಿನ ಸರ್ಕಾರಿ ಪ್ರೌಢಶಾಲೆ ಮತ್ತು ಸಂಯುಕ್ತ ಪದವಿಪೂರ್ವ ಕಾಲೇಜುಗಳಿಗೆ ವರ್ಗಾವಣೆ ಮಾಡಲಾಗಿದೆ. ಉಳಿದಂತೆ ಇಬ್ಬರು ಪತ್ರಾಂಕಿತ ವ್ಯವಸ್ಥಾಪಕರು ಹಾಗೂ 5 ಜನ ಕಚೇರಿ ಸೂಪರಿಂಟೆಂಡೆಂಟ್‌ಗಳನ್ನು ಇಲಾಖೆ ವ್ಯಾಪ್ತಿಯ ಬೇರೆ ಕಚೇರಿಗಳ ಹುದ್ದೆಗಳಿಗೆ ವರ್ಗಾವಣೆ ಮಾಡಿದ್ದಾರೆ.

ಇದೇ ವೇಳೆ ಹಳ್ಳಿಗಾಡಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ 8 ಪ್ರಥಮ ದರ್ಜೆ ಸಹಾಯಕರು ಹಾಗೂ 9 ದ್ವಿತೀಯ ದರ್ಜೆ ಸಹಾಯಕರನ್ನು ಜಿಲ್ಲೆ ಮತ್ತು ತಾಲ್ಲೂಕು ಕೇಂದ್ರ ಸ್ಥಾನಕ್ಕೆ ವರ್ಗಾವಣೆ ಮಾಡಿ ಹೆಚ್ಚುವರಿ ಆಯುಕ್ತರು ಆದೇಶ ಮಾಡಿದ್ದಾರೆ.

ವರ್ಗಾವಣೆ ಕುರಿತು ಪ್ರತಿಕ್ರಿಯಿಸಿರುವ ಮೇಜರ್ ಸಿದ್ಧಲಿಂಗಯ್ಯ ಹಿರೇಮಠ, ‘ಬದಲಾವಣೆ ಜಗದ ನಿಯಮ. ಸರ್ಕಾರದ ವರ್ಗಾವಣೆ ನೀತಿ-ನಿಯಮಗಳನ್ನು ಅನುಪಾಲಿಸುವುದರ ಜೊತೆಗೆ ಆಡಳಿತದಲ್ಲಿ ಕ್ರಿಯಾಪ್ರೇರಕ ಚುರುಕುತನ ತುಂಬಲು ಹಾಗೂ ಸಾರ್ವಜನಿಕ ಬದುಕಿಗೆ ಪಾರದರ್ಶಕ ಆಡಳಿತ ನೀಡುವಲ್ಲಿ ಒಂದು ಹೊಸ ಉಪಕ್ರಮ ಇದಾಗಿದೆ. ಈ ಮೂಲಕ ಇಲಾಖೆಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗೆ ಬದ್ಧತೆಯ ಸಂದೇಶ ರವಾನಿಸಲಾಗಿದೆ’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !