ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ಶಕ್ತಿ’ ಯೋಜನೆಯಿಂದ ನಷ್ಟವಾಗಿಲ್ಲ; ಸಚಿವ ರಾಮಲಿಂಗಾರೆಡ್ಡಿ

Published 21 ಮೇ 2024, 21:10 IST
Last Updated 21 ಮೇ 2024, 21:10 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಸಾರಿಗೆ ಇಲಾಖೆ ಅಶಕ್ತವಾಗಿಲ್ಲ. ‘ಶಕ್ತಿ’ ಯೋಜನೆ ಜಾರಿ ಮಾಡಿದ್ದರಿಂದ ಇಲಾಖೆಗೆ ಯಾವುದೇ ನಷ್ಟವಾಗಿಲ್ಲ’ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

‘ಶಕ್ತಿ ಯೋಜನೆ ಜಾರಿಗೆ ಬಂದ ನಂತರ ಮಹಿಳೆಯರು ಪುಣ್ಯಕ್ಷೇತ್ರಗಳಿಗೆ ಹೆಚ್ಚು ತೆರಳುತ್ತಿದ್ದಾರೆ. ಮರಳಿ ಮರಳಿ ಅವರೇ ಹೋಗುವುದಿಲ್ಲ. ಈ ಯೋಜನೆಯಲ್ಲಿ ಸಣ್ಣ ಪುಟ್ಟ ದೋಷಗಳಿವೆ. ಅವುಗಳನ್ನು ಸರಿಪಡಿಸಲಾಗುವುದು’ ಎಂದು ಭಾನುವಾರ ಸುದ್ದಿಗಾರರಿಗೆ ತಿಳಿಸಿದರು.

‘ಪ್ರತಿ ದಿನ 1.56 ಲಕ್ಷ ಶೆಡ್ಯೂಲ್‌ಗಳಲ್ಲಿ ಬಸ್‌ಗಳು ಸಂಚರಿಸುತ್ತಿವೆ. ಪ್ರಯಾಣಿಕರ ಜತೆ ಸಿಬ್ಬಂದಿ ಸೌಜನ್ಯದಿಂದ ವರ್ತಿಸಬೇಕು. ಈ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ಸಾರಿಗೆ ಸಂಸ್ಥೆಗಳಿಗೆ ವಿಶೇಷ ಅನುದಾನ ನೀಡಲಾಗುವುದು’ ಎಂದು ಹೇಳಿದರು.

‘ಆಗಸ್ಟ್ 15ರೊಳಗೆ ‘ಗ್ಯಾರಂಟಿ’ಗಳನ್ನು ಅನುಷ್ಠಾನಕ್ಕೆ ತರುತ್ತೇವೆ. ಕೇಂದ್ರ ಸರ್ಕಾರ ನಮಗೆ ಅಕ್ಕಿ ಕೊಡದಿರುವುದಕ್ಕೆ ರಾಜ್ಯದ ಬಿಜೆಪಿ ನಾಯಕರೇ ಕಾರಣ’ ಎಂದು ದೂರಿದರು.

ಸರ್ಕಾರಿ ವ್ಯಾಜ್ಯಗಳ ನಿರ್ವಹಣಾ ಕಾಯ್ದೆ ರಚನೆಗೆ ಚಿಂತನೆ; ಎಚ್.ಕೆ.ಪಾಟೀಲಹುಬ್ಬಳ್ಳಿ: ‘ಸರ್ಕಾರಿ ವ್ಯಾಜ್ಯಗಳ ನಿರ್ವಹಣಾ ಕಾಯ್ದೆ ರಚನೆಗೆ ಸರ್ಕಾರ ಚಿಂತನೆ ನಡೆಸಿದ್ದು ಜುಲೈನಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುವುದು’ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ ಹೇಳಿದರು. ‘ಸರ್ಕಾರಿ ವ್ಯಾಜ್ಯಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕು. ಸರ್ಕಾರಿ ವ್ಯಾಜ್ಯ ವ್ಯಾಪ್ತಿಯಲ್ಲಿನ ಬಡವರ ಪ್ರಕರಣಗಳು ಬೇಗ ಇತ್ಯರ್ಥವಾಗಬೇಕು. ಈ ನಿಟ್ಟಿನಲ್ಲಿ ಕಾಯ್ದೆ ಜಾರಿಗೆ ತರಲಾಗುತ್ತಿದೆ’ ಎಂದು ನಗರದಲ್ಲಿ ಭಾನುವಾರ ಸುದ್ದಿಗಾರರಿಗೆ ತಿಳಿಸಿದರು. ‘ಐದರಿಂದ ಹತ್ತು ವರ್ಷಗಳವರೆಗೆ ವ್ಯಾಜ್ಯಗಳು ಇತ್ಯರ್ಥವಾಗದೆ ಉಳಿದರೆ ಬಡವರಿಗೆ ತೊಂದರೆಯಾಗುತ್ತದೆ. ಈ ಪರಿಸ್ಥಿತಿ ಬದಲಾಗಬೇಕಿದೆ’ ಎಂದರು. ‘ಮತಾಂತರ ಕಾಯ್ದೆ ಹೆಸರಿನಲ್ಲಿ ಭಯ ಹುಟ್ಟಿಸುವ ರೀತಿಯ ಕೆಲವು ಕಾನೂನುಗಳನ್ನು ಬಿಜೆಪಿ ಸರ್ಕಾರ ಜಾರಿಗೆ ತಂದಿತ್ತು. ಸಂವಿಧಾನದ ಆಶಯದಂತೆ ಕಾನೂನಿನಲ್ಲಿ ಬದಲಾವಣೆ ತರಲಾಗುವುದು’ ಎಂದು ತಿಳಿಸಿದರು.  ‘ಹುಬ್ಬಳ್ಳಿಯ ನವನಗರದಲ್ಲಿರುವ ಕರ್ನಾಟಕ ಕಾನೂನು ವಿಶ್ವವಿದ್ಯಾಲಯಕ್ಕೆ ಅಗತ್ಯ ಮೂಲಸೌಕರ್ಯ ಕಲ್ಪಿಸಿ ದೇಶದಲ್ಲೇ ಅತ್ಯುತ್ತಮ ಕಾನೂನು ವಿ.ವಿಯಾಗಿ ರೂಪಿಸಲಾಗುವುದು. ಇದಕ್ಕೆ ಪ್ರಸ್ತಾವ ಸಲ್ಲಿಸುವಂತೆ ಕುಲಪತಿಗೆ ಸೂಚಿಸಲಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT