ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಚ್ಚುವರಿ ಅನುದಾನ ನೀಡಲು ಸಿದ್ಧ

ಯುವಜನೋತ್ಸವ: ಜನಪ್ರತಿನಿಧಿಗಳು, ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಭೆ
Last Updated 11 ಜನವರಿ 2023, 7:33 IST
ಅಕ್ಷರ ಗಾತ್ರ

ಧಾರವಾಡ: ‘ರಾಜ್ಯದ ಕೀರ್ತಿ ಹೆಚ್ಚಿಸುವಂತೆ ಮತ್ತು ರಾಜ್ಯದ ವೈಶಿಷ್ಟ್ಯವನ್ನು ರಾಷ್ಟ್ರಕ್ಕೆ ಪರಿಚಯಿಸಲು ಸಿಕ್ಕಿರುವ ಉತ್ತಮ ಅವಕಾಶವನ್ನು ಯಶಸ್ವಿಯಾಗಿ ಸಂಘಟಿಸಬೇಕು. ಅಗತ್ಯವಿದ್ದರೆ ಇನ್ನೂ ಹೆಚ್ಚಿನ ಅನುದಾನ ನೀಡಲು ಸಿದ್ಧ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಜ.12ರಿಂದ 16ರವರಗೆ ನಡೆಯಲಿರುವ 26ನೇ ರಾಷ್ಟ್ರೀಯ ಯುವಜನೋತ್ಸವದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

‘ಜ.12ರಂದು ಹುಬ್ಬಳ್ಳಿಯಲ್ಲಿ ಆಯೋಜಿಸಿರುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಪಾಲ್ಗೊಳ್ಳುತ್ತಿದ್ದು, ಅಲ್ಲಿ ಅತ್ಯಂತ ಶಿಸ್ತು ಮತ್ತು ಯಾವುದೇ ಗೊಂದಲಗಳಿಗೆ ಅವಕಾಶವಾಗದಂತೆ ಸಂಘಟಿಸಬೇಕು. ಧಾರವಾಡ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳ ಯುವಕರು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈಗಾಗಲೇ 30ಸಾವಿರಕ್ಕೂ ಹೆಚ್ಚು ಪಾಸ್‌ಗಳನ್ನು ಆನ್‌ಲೈನ್ ನೋಂದಣಿಯಲ್ಲಿ ವಿತರಿಸಲಾಗಿದೆ. ಭದ್ರತೆ ಮತ್ತು ಸಂಚಾರಕ್ಕೆ ಪೊಲೀಸ್ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದರು.

‘ಅಗತ್ಯವಿರುವ ಸಿಬ್ಬಂದಿಯನ್ನು ನೇಮಿಸಿಕೊಂಡು ರಾಷ್ಟ್ರದಾದ್ಯಂತ ವಿವಿಧ ರಾಜ್ಯಗಳಿಂದ ಬರುವ ಅತಿಥಿಗಳಿಗೆ ಯಾವುದೇ ಕೊರತೆ ಉಂಟಾಗದಂತೆ ನೋಡಿಕೊಳ್ಳಬೇಕು. ಸ್ಪರ್ಧಾಳುಗಳು ಮತ್ತು ಅತಿಥಿಗಳು ಉಳಿದುಕೊಳ್ಳುವ, ಸಂಚರಿಸುವ ಮತ್ತು ಕಾರ್ಯಕ್ರಮ ಸ್ಥಳಗಳಲ್ಲಿ ಸ್ವಯಂ ಸೇವಕರನ್ನು, ಪೊಲೀಸ್‍ರನ್ನು ನೇಮಿಸಿ ಜನದಟ್ಟಣೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಬೊಮ್ಮಾಯಿ ಸೂಚಿಸಿದರು.

ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಯುವಜನೋತ್ಸವ ಹಾಗೂ ಪ್ರಧಾನಿ ಭಾಗವಹಿಸುವ ಕಾರ್ಯಕ್ರಮದ ಕುರಿತು ನಡೆಸಿರುವ ಸಿದ್ಧತೆಗಳನ್ನು ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು.

ಮಹಾನಗರ ಪೊಲೀಸ್ ಆಯುಕ್ತ ರಮಣ ಗುಪ್ತಾ ಮಾತನಾಡಿ, ‘ಉದ್ಘಾಟನಾ ಕಾರ್ಯಕ್ರಮಕ್ಕೆ ಸೂಕ್ತ ಸಂಚಾರ ವ್ಯವಸ್ಥೆ ಮತ್ತು ಪೊಲೀಸ್ ಬಂದೋಬಸ್ತ್ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಿಂದ ಒಂದು ಸಾವಿರ ಹಾಗೂ ಪಕ್ಕದ ಜಿಲ್ಲೆಗಳಿಂದ 1,500 ಸೇರಿದಂತೆ ಒಟ್ಟು 2,500 ಪೊಲೀಸ್ ಹಾಗೂ ಅಧಿಕಾರಿಗಳನ್ನು ಭದ್ರತೆಗಾಗಿ ನಿಯೋಜಿಸಲಾಗುತ್ತಿದೆ’ ಎಂದರು.

ಸಭೆಯಲ್ಲಿ ಯುವಸಲೀಕರಣ ಮತ್ತು ಕ್ರೀಡಾ ಸಚಿವರಾದ ಡಾ. ನಾರಾಯಣಗೌಡ, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಆಚಾರ ಹಾಲಪ್ಪ ಬಸಪ್ಪ, ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಶಾಸಕರಾದ ಅಮೃತ ದೇಸಾಯಿ, ಅರವಿಂದ ಬೆಲ್ಲದ, ಮಹಾನಗರ ಪಾಲಿಕೆ ಮೇಯರ್ ಈರೇಶ ಅಂಚಟಗೇರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT