ಮಂಗಳವಾರ, 6 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರವಾಡ: ಬಾಲಕಾರ್ಮಿಕ ಪದ್ಧತಿ ಕಂಡರೆ ಪ್ರಕರಣ

ಬಾಲ ಕಾರ್ಮಿಕ ಯೋಜನಾ ಸಂಘದ ಸಭೆ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ
Last Updated 17 ಫೆಬ್ರವರಿ 2023, 6:42 IST
ಅಕ್ಷರ ಗಾತ್ರ

ಧಾರವಾಡ: ‘ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿ ಪತ್ತೆಗಾಗಿ ವಿಚಕ್ಷಣ ದಳಗಳನ್ನು ರಚಿಸಿಕೊಂಡು ಇನ್ನಷ್ಟು ಕ್ರಿಯಾಶೀಲವಾಗಬೇಕು. ಇಂಥ ಪ್ರಕರಣ ಕಂಡುಬಂದಲ್ಲಿ ತಕ್ಷಣ ಎಫ್‌ಐಆರ್ ದಾಖಲಿಸಬೇಕು’ ಎಂದು ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘದ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ ಮಾಡಬೇಕು. ಶಾಲಾ ಶಿಕ್ಷಣ ಮತ್ತು ಸುಧಾರಣೆ ಇಲಾಖೆ ಸಮೀಕ್ಷೆಯಲ್ಲಿ ಕಂಡುಬಂದ ಮಕ್ಕಳ ಬಗ್ಗೆ ಪರಿಶೀಲನೆ ನಡೆಸಬೇಕು. ಅವರನ್ನು ಮರಳಿ ಶಾಲೆಗೆ ಕಳುಹಿಸುವಂತೆ ಪಾಲಕರಿಗೆ ತಿಳಿವಳಿಕೆ ನೀಡಬೇಕು. ಮುಂದಿನ ಎರಡು ವಾರಗಳಲ್ಲಿ ಈಗಾಗಲೇ ಪತ್ತೆಯಾಗಿರುವ ಪ್ರಕರಣಗಳ ಕುರಿತು ವಿವರವಾದ ವರದಿ ಸಲ್ಲಿಸಬೇಕು. ಪ್ರತಿ ಮಗುವೂ ಶಾಲೆಗೆ ಹೋಗುವಂತೆ ನೋಡಿಕೊಳ್ಳಬೇಕು’ ಎಂದು ತಿಳಿಸಿದರು.

‘ಬೇಕರಿ, ಹೋಟೆಲ್, ಬಾರ್, ಇಟ್ಟಂಗಿ ಭಟ್ಟಿಗಳಲ್ಲಿ ನಿರಂತರವಾಗಿ ಪರಿಶೀಲನೆ ಮಾಡಿ, ಮಾಲೀಕರಿಗೆ ಎಚ್ಚರಿಕೆ ನೀಡಬೇಕು. ನಿಯಮ ಉಲ್ಲಂಘನೆ ಕಂಡುಬಂದಲ್ಲಿ ತಕ್ಷಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಬೇಕು. ಪ್ರತಿ ತಿಂಗಳು ರಾಷ್ಟ್ರೀಯ ಬಾಲಕಾರ್ಮಿಕ ಸಂಘದ ಕಾರ್ಯ ಚಟುವಟಿಕೆಗಳ ಕುರಿತು ವರದಿ ಸಲ್ಲಿಸಬೇಕು’ ಎಂದು ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯ್ತಿ ಸಿಇಒ ಡಾ. ಸುರೇಶ ಇಟ್ನಾಳ ಮಾತನಾಡಿ, ‘ಚುನಾವಣೆಯಲ್ಲಿ ಮಕ್ಕಳ ಬಳಕೆ ನಿಷೇಧಿಸಲಾಗಿದೆ. ಮಕ್ಕಳನ್ನು ಚುನಾವಣಾ ಪ್ರಚಾರಕ್ಕೆ, ಬ್ಯಾನರ್, ಬಂಟಿಂಗ್‌ ಕಟ್ಟಲು, ಕರಪತ್ರ ಹಂಚಲು ಕಳುಹಿಸದಂತೆ ಪಾಲಕರಿಗೆ ತಿಳಿವಳಿಕೆ ಮೂಡಿಸಬೇಕು. ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ಚಟುವಟಿಕೆಗಳಲ್ಲಿ ಮಕ್ಕಳು ಭಾಗವಹಿಸದಂತೆ ಅಧಿಕಾರಿಗಳು ನಿಗಾ ವಹಿಸಬೇಕು. ಒಂದೊಮ್ಮೆ ಕಂಡುಬಂದಲ್ಲಿ ಅಂಥ ಅಧಿಕಾರಿಗಳನ್ನು ಜವಾಬ್ದಾರರನ್ನಾಗಿ ಮಾಡಿ, ಸೂಕ್ತ ಕ್ರಮಕ್ಕೆ ಶಿಫಾರಸು ಮಾಡಲಾಗುವುದು’ ಎಂದರು.

‘ಮಕ್ಕಳ ಗ್ರಾಮಸಭೆಗಳಲ್ಲಿ ಗ್ರಾಮೀಣ ಭಾಗದ ಮಕ್ಕಳು ತಪ್ಪದೇ ಭಾಗವಹಿಸುವಂತೆ ಮಾಡಬೇಕು. ಜಿಲ್ಲಾ ಪಂಚಾಯ್ತಿ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ಗ್ರಾಮೀಣ ಮಕ್ಕಳಲ್ಲಿ ಅವರ ಹಕ್ಕು, ಬೇಡಿಕೆಗಳ ಕುರಿತು ಅರಿವು ಮೂಡಿಸಬೇಕು’ ಎಂದು ತಿಳಿಸಿದರು.

ಕಾರ್ಮಿಕ ಇಲಾಖೆಯ ಸಹಾಯಕ ಕಾರ್ಮಿಕ ಆಯುಕ್ತೆ ಶ್ವೇತಾ ಸಂಗಮ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಷ್ಟ್ರೀಯ ಬಾಲ ಕಾರ್ಮಿಕ ಯೋಜನಾ ಸಂಘದ ಜಿಲ್ಲಾ ನಿರ್ದೇಶಕ ಬಸವರಾಜ ಪಂಚಾಕ್ಷರಿಮಠ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT